ದೇಶದ ವಿವಿಧೆಡೆ ವೈದ್ಯರ ಮುಷ್ಕರ ಅಂತ್ಯ-ಅರ್ಜಿಯ ತುರ್ತು ವಿಚಾರಣೆಯ ಅಗತ್ಯವಿಲ್ಲ-ಸುಪ್ರೀಂ ಕೋರ್ಟ್

ನವದೆಹಲಿ, ಜೂ.18- ದೇಶದಲ್ಲಿರುವ ಸರ್ಕಾರಿ ಆಸ್ಪತ್ರೆಗಳ ವೈದ್ಯರ ಸುರಕ್ಷತೆ ಮತ್ತು ಭದ್ರತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ಕುರಿತ ವಿಚಾರಣೆಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ. ಪಶ್ಚಿಮ ಬಂಗಾಳ ಸೇರಿದಂತೆ ದೇಶದ ವಿವಿಧೆಡೆ ವೈದ್ಯರು ತಮ್ಮ ಮುಷ್ಕರವನ್ನು ಅಂತ್ಯಗೊಳಿಸಿದ್ದಾರೆ. ಹೀಗಾಗಿ ಈ ಅರ್ಜಿಯನ್ನು ತುರ್ತು ವಿಚಾರಣೆ ನಡೆಸುವ ಅಗತ್ಯವಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಕಾರಣ ನೀಡಿದೆ.

ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ ಮತ್ತು ಸೂರ್ಯ ಕಾಂತ್ ಅವರನ್ನು ಒಳಗೊಂಡ ರಜೆ ಕಾಲದ ಪೀಠವು ಅರ್ಜಿದಾರರ ಪರ ಹಿರಿಯ ವಕೀಲ ಅಲಖ್ ಅಲೋಕ್ ಶ್ರೀವಾಸ್ತವ ಸಲ್ಲಿಸಿರುವ ಮನವಿ ಅರ್ಜಿಯ ವಿಚಾರಣೆ ನಡೆಸಿದರು.

ಈ ಸಂಬಂಧ ಸರ್ಕಾರಕ್ಕೆ ನೋಟಿಸ್ ನೀಡುವುದಿಲ್ಲ, ಅದಾಗ್ಯೂ ವೈದ್ಯರ ರಕ್ಷಣೆಯಂಥ ಪ್ರಮುಖ ವಿಚಾರವನ್ನು ಮುಕ್ತವಾಗಿಡಲಾಗುವುದು ಎಂದು ಪೀಠ ತಿಳಿಸಿತು.
ಮುಷ್ಕರ ನಡೆಸುತ್ತಿದ್ದ ವೈದ್ಯರು ತಮ್ಮ ಹರತಾಳವನ್ನು ಅಂತ್ಯಗೊಳಿಸಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಹೀಗಾಗಿ ಈ ಅರ್ಜಿಯ ವಿಚಾರಣೆಯನ್ನು ತುರ್ತಾಗಿ ನಡೆಸುವ ಅಗತ್ಯವಿಲ್ಲ ಎಂದು ತಿಳಿಸಿ ಪೀಠವು ವಿಚಾರಣೆಯನ್ನು ಮುಂದೂಡಿತು. ಸೂಕ್ತ ಪೀಠದಲ್ಲಿ ಇದರ ವಿಚಾರಣೆ ನಡೆಯಲಿದೆ ಎಂದು ನ್ಯಾಯಾಧೀಶರು ತಿಳಿಸಿದರು.

ರೋಗಿಗಳ ಕುಟುಂಬದವರು ನಡೆಸಿದ ಹಲ್ಲೆಯಿಂದ ಕಿರಿಯ ವೈದ್ಯರೊಬ್ಬರು ಮೃತಪಟ್ಟಿದ್ದರು. ವೈದ್ಯರಿಗೆ ರಕ್ಷಣೆ ಕೋರಿ ಪಶ್ವಿಮ ಬಂಗಾಳದಲ್ಲಿ ನಡೆಸುತ್ತಿರುವ ಮುಷ್ಕರದ ಹಿನ್ನೆಲೆಯಲ್ಲಿ ಕಳೆದ ಶುಕ್ರವಾರ ಈ ಅರ್ಜಿ ಸಲ್ಲಿಸಲಾಗಿತ್ತು.

ವೈದ್ಯರ ಸುರಕ್ಷತೆ ಮತ್ತು ಭದ್ರತೆಗಾಗಿ ದೇಶಾದ್ಯಂತ ಇರುವ ಎಲ್ಲ ರಾಜ್ಯ ಸರ್ಕಾರಿ ಸ್ವಾಮ್ಯದ ಆಸ್ಪತ್ರೆಗಳಿಗೆ ಸರ್ಕಾರದಿಂದ ನೇಮಕಗೊಂಡ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸುವಂತೆ ಕೇಂದ್ರ ಗೃಹ ಮತ್ತು ಆರೋಗ್ಯ ಸಚಿವರಿಗೆ ಸೂಚನೆ ನೀಡಬೇಕೆಂದು ಸಹ ಅರ್ಜಿದಾರರು ಮನವಿಯಲ್ಲಿ ಕೋರಿದ್ದಾರೆ.

ವೈದ್ಯರ ಬೇಡಿಕೆಗಳನ್ನು ಈಡೇರಿಸಲು ಸಮ್ಮತಿಸಿದ ಪಶ್ಚಿಮಬಂಗಾಳ ಸರ್ಕಾರ
ಕೋಲ್ಕತಾ/ನವದೆಹಲಿ/ಮುಂಬೈ, ಜೂ.18-ವೈದ್ಯರಿಗೆ ಸೂಕ್ತ ರಕ್ಷಣೆ ಸೇರಿದಂತೆ ಅವರ ಬೇಡಿಕೆಗಳನ್ನು ಈಡೇರಿಸಲು ಪಶ್ಚಿಮಬಂಗಾಳ ಸರ್ಕಾರ ನಿನ್ನೆ ಸಮ್ಮತಿಸಿದ ನಂತರ ಮುಷ್ಕರ ಏಳು ದಿನಗಳ ಮುಷ್ಕರ ಅಂತ್ಯಗೊಳಿಸಿದ ಸಾವಿರಾರು ವೈದ್ಯರು ಇಂದು ಕರ್ತವ್ಯಕ್ಕೆ ಹಾಜರಾದರು.

ವೈದ್ಯರ ಮುಷ್ಕರ ಅಂತ್ಯಗೊಂಡಿರುವುದರಿಂದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಮತ್ತು ವೈದ್ಯಕೀಯ ಸಮೂಹದ ನಡುವೆ ನಡೆಯುತ್ತಿದ್ದ ಸಂಘರ್ಷ ಬಗೆಹರಿದಂತಾಗಿದೆ.

ಪಶ್ಚಿಮ ಬಂಗಾಳ ವೈದ್ಯರ ಮುಷ್ಕರಕ್ಕೆ ಬೆಂಬಲ ಸೂಚಿಸಿ ಭಾರತೀಯ ವೈಧ್ಯಕೀಯ ಸಂಸ್ಥೆ (ಐಎಂಎ) ನಿನ್ನೆ ಕರೆ ನೀಡಿದ್ದ ರಾಷ್ಟ್ರವ್ಯಾಪಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ದೆಹಲಿ, ಮುಂಬೈ, ಚೆನ್ನೈ ಸೇರಿದಂತೆ ವಿವಿಧ ನಗರಗಳ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳ ವೈದ್ಯರೂ. ಸಹ ಇಂದು ಕರ್ತವ್ಯಕ್ಕೆ ಮರಳಿದ್ದಾರೆ.

ದೇಶದಾದಂತ್ಯ ನಿನ್ನೆ ವಿವಿಧ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಗಳ ಸಹಸ್ರಾರು ವೈದ್ಯರು ನಿನ್ನೆ ತಮ್ಮ ಕೆಲಸಗಳನ್ನು ಬಹಿಷ್ಕರಿಸಿ ಮುಷ್ಕರದಲ್ಲಿ ಭಾಗವಹಿಸಿದ್ದರು. ಇದರಿಂದ ಹೊರ ರೋಗಿಗಳ ವಿಭಾಗಗಳಲ್ಲಿ ರೋಗಿಗಳು ಪರದಾಡುವಂತಾಗಿತ್ತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ