ಬೆಂಗಳೂರು, ಜೂ.22- ವಿಧಾನ ಪರಿಷತ್ ಮಾಜಿ ಸದಸ್ಯ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸೋದರ ಎಸ್.ಎಂ.ಶಂಕರ್ (83) ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಗರದ ಮಂತ್ರಿಮಾಲ್ ಬಳಿ ಇರುವ ಅಪೋಲೋ ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಒಬ್ಬ ಪುತ್ರ ಹಾಗೂ ಪುತ್ರಿಯನ್ನು ಇವರು ಅಗಲಿದ್ದು, ಸ್ವಗ್ರಾಮ ಸೋಮನಹಳ್ಳಿಯಲ್ಲಿ ಇಂದು ಸಂಜೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕಳೆದ ಒಂದು ವರ್ಷದಿಂದ ಅವರಿಗೆ ಆರೋಗ್ಯದ ಸಮಸ್ಯೆ ಕಾಡುತ್ತಿತ್ತು. ಇತ್ತೀಚೆಗೆ ಆರೋಗ್ಯ ಸಮಸ್ಯೆ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಎಸ್.ಎಂ.ಶಂಕರ್ ಅವರು ಬ್ಲಾಕ್ ಕಾಂಗ್ರೆಸ್ ಮಟ್ಟದಿಂದ ರಾಜಕೀಯ ಪ್ರವೇಶಿಸಿ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು.
ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮಂಡ್ಯ ಸ್ಥಳೀಯ ಸಂಸ್ಥೆಗಳಿಂದ ಎಸ್.ಎಂ.ಶಂಕರ್ ಅವರು ವಿಧಾನ ಪರಿಷತ್ಗೆ ಆಯ್ಕೆಯಾಗಿದ್ದರು.
ಎಸ್.ಎಂ.ಶಂಕರ್ ಅವರ ನಿಧನಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವರಾದ ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಸಾ.ರಾ.ಮಹೇಶ್ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತರ ಆತ್ಮಕ್ಕೆ ಚಿರಶಾಂತಿ ಕೋರಿರುವ ಇವರು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.