ಬೆಂಗಳೂರು, ಜೂ.23-ನೂತನ ಸಚಿವರಿಬ್ಬರಿಗೆ ನಾಳೆ ಖಾತೆ ಹಂಚಿಕೆ ಮಾಡುವ ಸಾಧ್ಯತೆಗಳಿವೆ. ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ನಾಗೇಶ್ ಅವರು ಕಳೆದ ವಾರ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಅಂದಿನಿಂದ ಇಂದಿನವರೆಗೂ ಅವರು ಖಾತೆ ಹಂಚಿಕೆಯ ನಿರೀಕ್ಷೆಯಲ್ಲಿಯೇ ಇದ್ದಾರೆ.
ನಾಳೆ ಸಂಜೆ ವೇಳೆಗೆ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವ ಸಾಧ್ಯತೆಗಳಿವೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಮೈತ್ರಿ ಸರ್ಕಾರವನ್ನು ಭದ್ರಪಡಿಸಿಕೊಳ್ಳಲು ಕಾಂಗ್ರೆಸ್ ಪಾಲಿನ ಒಂದು ಹಾಗೂ ಜೆಡಿಎಸ್ ಪಾಲಿನ ಒಂದು ಸಚಿವ ಸ್ಥಾನವನ್ನು ಪಕ್ಷೇತರರಿಗೆ ನೀಡಲಾಗಿದೆ.
ಮುಖ್ಯಮಂತ್ರಿಗಳ ದೆಹಲಿ ಪ್ರವಾಸ ಹಾಗೂ ಗ್ರಾಮ ವಾಸ್ತವ್ಯ ಸೇರಿದಂತೆ ಬಿಡುವಿಲ್ಲದ ಕಾರ್ಯಕ್ರಮಗಳಿಂದಾಗಿ ಖಾತೆ ಹಂಚಿಕೆ ಆಗಿರಲಿಲ್ಲ. ಶಂಕರ್ ಅವರಿಗೆ ಪೌರಾಡಳಿತ ಖಾತೆ ಹಾಗೂ ನಾಗೇಶ್ ಅವರಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆಯಾದರೂ ಇನ್ನೂ ಖಚಿತವಾಗಿಲ್ಲ.