ಜಲಧಾರೆ ಯೋಜನೆಯಡಿ ಜಿಲ್ಲೆಗೆ ಶುದ್ಧ ಕುಡಿಯುವ ನೀರು-ಸಿಎಂ ಕುಮಾರಸ್ವಾಮಿ

ರಾಯಚೂರು,ಜೂ.26- ಜಲಧಾರೆ ಯೋಜನೆಯಡಿ ರಾಯಚೂರು ಜಿಲ್ಲೆಗೆ ಶುದ್ದ ಕುಡಿಯುವ ನೀರು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಬೆಂಗಳೂರಿನಿಂದ ರೈಲು ಮೂಲಕ ರಾಯಚೂರಿಗೆ ಆಗಮಿಸಿದ ಮುಖ್ಯಮಂತ್ರಿಗಳು ಕರೆಗುಡ್ಡದಲ್ಲಿ ಜನತಾದರ್ಶನ ನಡೆಸುವ ಮುನ್ನ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ಜಲಧಾರೆ ಯೋಜನೆ ಮೂಲಕ ರಾಯಚೂರು ಜಿಲ್ಲೆಗೆ ಸಮಗ್ರ ಕುಡಿಯುವ ನೀರು ಒದಗಿಸುವ ಪ್ರಸ್ತಾವನೆ ಸರ್ಕಾರದ ಮುಂದಿದ್ದು, ಶೀಘ್ರವೇ ಅನುಮೋದನೆ ನೀಡಿ ಜಿಲ್ಲೆಗೆ ನೀರು ಒದಗಿಸುವ ಭರವಸೆಯನ್ನು ನೀಡಿದರು.

ಬರ ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು.

ಯಾವುದೇ ಭಾಗದಲ್ಲಿ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಶರತ್ ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನಳಿನಿ ಅತುಲ್ ಅವರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಯವರು ಬರಪರಿಸ್ಥಿತಿ ನಿರ್ವಹಣೆಗೆ ಜಿಲ್ಲೆಯಲ್ಲಿ ಹಣದ ಕೊರತೆ ಇಲ್ಲ ಎಂದು ತಿಳಿಸಿದರು. ಮಾನ್ವಿ ಲೋಕಸಭಾ ಕ್ಷೇತ್ರದಲ್ಲಿ ಲೋಕೋಪಯೋಗಿ, ಸಣ್ಣ ನೀರಾವರಿ, ಪಶುಸಂಗೋಪನೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್, ಪ್ರವಾಸೋದ್ಯಮ, ಅಲ್ಪಸಂಖ್ಯಾತರ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳಿಗೆ 8144.99 ಲಕ್ಷ ರೂ.ಗಳ 38 ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯಾಗಬೇಕಿದೆ ಎಂದರು.

ಈ ಸಂದರ್ಭದಲ್ಲಿ ಸಚಿವರಾದ ಸಾ.ರಾ.ಮಹೇಶ್, ಶಿವಶಂಕರ್ ರೆಡ್ಡಿ, ವೆಂಕಟರಾವ್ ನಾಡಗೌಡ, ಶಾಸಕ ವೆಂಕಟಪ್ಪ ನಾಯಕ್, ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಎಚ್.ಬಿ.ದಿನೇಶ್ ಸೇರಿದಂತೆ ಮತ್ತಿತರ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ