ಬೆಂಗಳೂರು, ಜೂ.26-ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ದೆಹಲಿ ಮತ್ತು ಕೇರಳ ರಾಜ್ಯದಲ್ಲಿನ ಶಿಕ್ಷಣ ವ್ಯವಸ್ಥೆ ಬಗ್ಗೆ ಅಧ್ಯಯನ ನಡೆಸಲು ಸದ್ಯದಲ್ಲೇ ನಿಯೋಗವೊಂದನ್ನು ಕೊಂಡೊಯ್ಯಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಆರ್.ಶ್ರೀನಿವಾಸ್ (ವಾಸು) ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳ ಮತ್ತು ದೆಹಲಿ ರಾಜ್ಯಗಳು ಶಿಕ್ಷಣದಲ್ಲಿ ಮುಂದಿವೆ. ಅಲ್ಲಿನ ಶಿಕ್ಷಣ ವ್ಯವಸ್ಥೆ ಅಧ್ಯಯನ ಮಾಡಲು ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಶಿಕ್ಷಣ ತಜ್ಞರ ತಂಡವನ್ನು 15 ದಿನದೊಳಗೆ ತಾವು ಕೊಂಡೊಯ್ಯುವುದಾಗಿ ತಿಳಿಸಿದರು.
ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬುದು ಸರ್ಕಾರದ ಉದ್ದೇಶವಾಗಿದ್ದು, ಅದಕ್ಕೆ ಪೂರಕವಾದ ಶಿಕ್ಷಣ ಕ್ರಮಗಳನ್ನು ಕೈಗೊಳ್ಳಲಾಗುವುದು. ಎರಡೂ ರಾಜ್ಯಗಳಲ್ಲಿ ಅಧ್ಯಯನ ನಡೆಸಿದ ನಂತರ ಪಠ್ಯಕ್ರಮದಲ್ಲಿ ಬದಲಾವಣೆ ಅಗತ್ಯವೆನಿಸಿದರೆ ಪಠ್ಯಪುಸ್ತಕ ಪರಿಷ್ಕರಣೆ ಕೂಡ ಮಾಡಲಾಗುವುದು. ಶಿಕ್ಷಣ ತಜ್ಞರ ಅಭಿಪ್ರಾಯ ಹಾಗೂ ಶಿಕ್ಷಣ ಕ್ಷೇತ್ರವನ್ನು ಪ್ರತಿನಿಧಿಸುವ ವಿಧಾನಪರಿಷತ್ ಸದಸ್ಯರ ಅಭಿಪ್ರಾಯವನ್ನು ಪಡೆಯಲಾಗುವುದು ಎಂದರು.
ಗ್ರಾಮೀಣ ಭಾಗದಲ್ಲೂ ಪೋಷಕರು ತಮ್ಮ ಮಕ್ಕಳನ್ನು ಕಾನ್ವೆಂಟ್ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಇದನ್ನು ತಪ್ಪಿಸಲು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಶಾಲೆಗಳನ್ನು ತೆರೆಯುವ ಚಿಂತನೆ ಇದೆ ಎಂದು ಹೇಳಿದರು.
ಪ್ರತಿ ತಾಲೂಕಿನಲ್ಲೂ ವಿದ್ಯಾರ್ಥಿಗಳ ಕೊರತೆಯಿಂದಾಗಿ 20 ರಿಂದ 40 ಶಾಲೆಗಳವರೆಗೂ ಮುಚ್ಚಲಾಗುತ್ತಿದೆ. ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಆಕರ್ಷಿಸಲು ನಲಿ-ಕಲಿ ಸೇರಿದಂತೆ ಹಲವು ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಬಂದಿದೆ. ಆ ಶಾಲೆಗಳಿಗೆ ಮಕ್ಕಳು ತಾವಾಗಿಯೇ ಬರುತ್ತಿದ್ದಾರೆ. ಸುಮಾರು 40 ಮಕ್ಕಳ ಪ್ರವೇಶಕ್ಕೆ ಅವಕಾಶವಿದ್ದರೆ, 200 ಮಕ್ಕಳು ಅರ್ಜಿ ಸಲ್ಲಿಸುತ್ತಿದ್ದಾರೆ. ಇದರಿಂದ ಶಿಕ್ಷಣದ ವ್ಯಾಪಾರೀಕರಣವನ್ನು ನಿವಾರಣೆ ಸಾಧ್ಯವಾಗುತ್ತದೆ ಎಂದರು.
ಗ್ರಂಥಪಾಲಕರನ್ನು ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿತ್ತು. ಈಗ ಸೇವೆ ಖಾಯಂಗೊಳಿಸುವಂತೆ ಅವರು ಬೇಡಿಕೆ ಮುಂದಿಟ್ಟಿದ್ದಾರೆ.
ಗ್ರಾಮೀಣಾಭಿವೃದ್ಧಿ ಇಲಾಖೆಗೆ ಗ್ರಂಥಾಲಯ ಬರುತ್ತದೆ. ಅಲ್ಲಿ ದಿನಗೂಲಿ ನೌಕರರನ್ನು ಖಾಯಂಗೊಳಿಸುವ ಪ್ರಯತ್ನ ಹಂತ ಹಂತವಾಗಿ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದರು.
ಹಿಂದಿನ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ನೀಡುವ ಆಶ್ವಾಸನೆ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದರು.
ಶಾಲೆಗಳ ಮೂಲಸೌಕರ್ಯಾಭಿವೃದ್ಧಿಗೆ ಕಾರ್ಪೊರೇಟ್ ಸಂಸ್ಥೆಗಳ ಸಿಎಸ್ಆರ್ ನಿಧಿ ಬಳಕೆಗೂ ಪ್ರಯತ್ನಿಸಲಾಗುವುದು. ಶಾಲೆಗಳ ಮೂಲ ಸೌಕರ್ಯ ಅಭಿವೃದ್ಧಿಗೆ 1200 ಕೋಟಿ ಅನುದಾನ ಒದಗಿಸಲಾಗಿದೆ ಎಂದು ಹೇಳಿದರು.