ಲಕ್ನೋ: ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಬೇಸರಗೊಂಡಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರಿ ನೌಕರರಿಗೆ ಬಿಸಿ ಮುಟ್ಟಿಸಿದ್ದಾರೆ.
ಸರ್ಕಾರಿ ನೌಕರರಿಗೆ ಶಾಕ್ ನೀಡಿರುವ ಸಿಎಂ ಯೋಗಿ ಆದಿತ್ಯನಾಥ್ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ನೌಕರರು, ಅಧಿಕಾರಿಗಳು ಬೆಳಿಗ್ಗೆ 9 ಗಂಟೆ ಒಳಗೆ ಕಚೇರಿ ತಲುಪುವಂತೆ ಕಟ್ಟುನಿಟ್ಟಾಗಿ ನಿರ್ದೇಶಿಸಿದ್ದಾರೆ.
ಸರ್ಕಾರದ ಈ ಆದೇಶವನ್ನು ಎಲ್ಲಾ ಅಧಿಕಾರಿಗಳು ಕೂಡಲೇ ಜಾರಿಗೆ ತರಬೇಕು ಎಂದು ಸೂಚಿಸಿರುವ ಯೋಗಿ ಸರ್ಕಾರ, ಸರ್ಕಾರದ ಆದೇಶವನ್ನು ಪಾಲಿಸದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅವರ ಸಂಬಳವನ್ನೂ ಕಡಿತಗೊಳಿಸಬಹುದು ಎಂದು ಹೇಳಲಾಗಿದೆ. ಈ ಮಾಹಿತಿಯನ್ನು ಮುಖ್ಯಮಂತ್ರಿ ಕಚೇರಿಯ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.
ಇತ್ತೀಚೆಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದ ಯೋಗಿ ಆದಿತ್ಯನಾಥ್, ಡಿಎಂ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದ ಅವರು ಸರ್ಕಾರದ ಅಭಿವೃದ್ದಿ ಕೆಲಸಗಳ ಬಗ್ಗೆ ಪರಿಶೀಲಿಸಿದ್ದರು.
ಭ್ರಷ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಂದೇಶ ನೀಡಿದ್ದ ಮುಖ್ಯಮಂತ್ರಿ, ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಸರ್ಕಾರದಲ್ಲಿರುವ ಭ್ರಷ್ಟ ಅಧಿಕಾರಿಗಳ ವಿರುದ್ಧ ಪಟ್ಟಿ ಸಿದ್ಧಪಡಿಸುವಂತೆ ಸೂಚಿಸಿರುವ ಸಿಎಂ ಯೋಗಿ, ಅವರನ್ನು ಸ್ವಯಂಪ್ರೇರಿತ ನಿವೃತ್ತಿಗೆ ಒತ್ತಾಯಿಸುವಂತೆ ಸೂಚಿಸಿದ್ದರು.