ಬೆಂಗಳೂರು,ಜೂ.27- ಇನ್ನು ಒಂದು ವಾರದಲ್ಲಿ ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ನೇಮಕವಾಗುವ ಸಾಧ್ಯತೆಗಳಿವೆ.
ರಾಜೀನಾಮೆ ವಾಪಸ್ ಪಡೆಯುವಂತೆ ಪಕ್ಷದ ವರಿಷ್ಠರು ನಡೆಸಿದ ಯಾವ ಪ್ರಯತ್ನಗಳು ಫಲ ನೀಡದ ಹಿನ್ನೆಲೆಯಲ್ಲಿ ಹೊಸ ಅಧ್ಯಕ್ಷರ ನೇಮಕಕ್ಕೆ ಹುಡುಕಾಟ ನಡೆಸುತ್ತಿದ್ದಾರೆ.
ವಿಶ್ವನಾಥ್ ಅವರ ರಾಜೀನಾಮೆಯಿಂದ ತೆರವಾಗುವ ರಾಜ್ಯಾಧ್ಯಕ್ಷ ಸ್ಥಾನವನ್ನು ಪರಿಶಿಷ್ಟ ಜಾತಿ ಇಲ್ಲವೇ ಹಿಂದುಳಿದ ವರ್ಗದವರಿಗೆ ನೀಡುವ ಬಗ್ಗೆ ಜೆಡಿಎಸ್ನಲ್ಲಿ ಸಮಾಲೋಚನೆ ನಡೆಸಲಾಗಿದೆ.
ಮಾಜಿ ಶಾಸಕ ಮಧುಬಂಗಾರಪ್ಪ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಬೇಕೆಂದು ಈಗಾಗಲೇ ವಿಶ್ವನಾಥ್ ಅವರು ವರಿಷ್ಠರನ್ನು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೂಡ ಮಧುಬಂಗಾರಪ್ಪ ಅವರಿಗೆ ಪಕ್ಷದ ಸಾರಥ್ಯ ನೀಡಬೇಕೆಂಬ ಬಗ್ಗೆ ಒಲವು ಹೊಂದಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಸಾಮಾಜಿಕ ನ್ಯಾಯ ಒದಗಿಸಬೇಕೆಂಬ ಉದ್ದೇಶದಿಂದ ಪರಿಶಿಷ್ಟ ಸಮುದಾಯ ಹಾಗೂ ಮುಸ್ಲಿಂ ಸಮುದಾಯಕ್ಕೂ ಪ್ರಾಶಸ್ತ್ಯ ನೀಡುವ ಬಗ್ಗೆ ಸಮಾಲೋಚನೆ ನಡೆಸಲಾಗುತ್ತಿದೆ.
ಈ ಎರಡೂ ಸಮುದಾಯಕ್ಕೂ ಜೆಡಿಎಸ್ ಇದುವರೆಗೂ ಸಚಿವ ಸ್ಥಾನ ನೀಡಿಲ್ಲ. ವಿಧಾನಪರಿಷತ್ ಸದಸ್ಯ ಬಿ.ಎಂ.ಫಾರೂಖ್ ಅವರ ಹೆಸರು ಪದೇ ಪದೇ ಪ್ರಸ್ತಾಪವಾಯಿತಾದರೂ ಅವರಿಗೆ ಸಚಿವ ಸ್ಥಾನ ದೊರೆತಿಲ್ಲ. ಅವರಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಅದೇ ರೀತಿ ಪರಿಶಿಷ್ಟ ಜಾತಿಗೂ ಸಚಿವ ಸಂಪುಟದಲ್ಲಿ ಅವಕಾಶ ಸಿಕ್ಕಿಲ್ಲ. ಹೀಗಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನವನ್ನು ಮಾಜಿ ಸಚಿವ ಎಚ್.ಕೆ.ಕುಮಾರಸ್ವಾಮಿ ಅವರಿಗೆ ನೀಡುವ ಬಗ್ಗೆ ಗಂಭೀರ ಚಿಂತನೆ ನಡೆಸಲಾಗಿದೆ.
ಮತ್ತೊಬ್ಬ ಮಾಜಿ ಸಚಿವ ಬಿ.ಬಿ.ನಿಂಗಯ್ಯ ಅವರ ಹೆಸರು ಕೂಡ ಕೇಳಿಬರುತ್ತಿದೆ. ಜೆಡಿಎಸ್ ವರಿಷ್ಠರು ಯಾರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಲಿದ್ದಾರೆ ಎಂಬುದು ಕುತೂಹಲ ಕೆರಳಿಸಿದೆ. ಮಧುಬಂಗಾರಪ್ಪ ಇಲ್ಲವೇ ಎಚ್.ಕೆ.ಕುಮಾರಸ್ವಾಮಿ ಇಬ್ಬರಲ್ಲಿ ಒಬ್ಬರು ರಾಜ್ಯಾಧ್ಯಕ್ಷರಾಗುವುದು ಬಹುತೇಕ ಖಚಿತ ಎಂದು ಪಕ್ಷದ ಮೂಲಗಳು ತಿಳಿಸಿವೆ.