ಬೆಂಗಳೂರು,ಜು.1- ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ನಿರಂತರ ಹಗಲುಗನಸು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಪ್ರಯತ್ನ ಸಫಲವಾಗುವುದಿಲ್ಲ ಎಂದು ಅವರು ಮಾಡಿರುವ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್ ಶಾಸಕ ಆನಂದ್ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದ್ದಂತೆ ಕುಮಾರಸ್ವಾಮಿ ಅವರು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.
ಅಮೆರಿಕದ ನ್ಯೂಜೆರ್ಸಿಯಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಶ್ರೀ ಕಾಲಭೆರವೇಶ್ವರದ ದೇವಸ್ಥಾನದ ಭೂಮಿ ಪೂಜೆ ನೆರವೇರಿದೆ. ಆ ಕಾರ್ಯಕ್ರಮದಲ್ಲಿ ತಾವು ಪಾಲ್ಗೊಂಡಿದ್ದಲ್ಲದೆ ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲ ವಿದ್ಯಮಾನಗಳನ್ನು ಗಮನಿಸುತ್ತಿರುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.