ಅತೃಪ್ತ ಶಾಸಕರ ರಾಜೀನಾಮೆ ಹಿನ್ನಲೆ-ಕೈ ನಾಯಕರ ತುರ್ತು ಸಭೆ

ಬೆಂಗಳೂರು,ಜು.6- ಅತೃಪ್ತ ಸಕರು ರಾಜೀನಾಮೆ ನೀಡುತ್ತಿದ್ದಂತೆ ಕೈ ನಾಯಕರು ತುರ್ತು ಸಭೆ ನಡೆಸಿದ್ದಾರೆ.
ಕನ್ನಿಂಗ್ ಹ್ಯಾಂ ರಸ್ತೆಯಲ್ಲಿರುವ ಕಚೇರಿಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಈಶ್ವರ ಖಂಡ್ರೆ, ಎಂ.ಬಿ.ಪಾಟೀಲ್, ಪರಮೇಶ್ವರ್ ಸೇರಿದಂತೆ ಹಲವು ಮುಖಂಡರು ಸೇರಿ ಸಭೆ ನಡೆಸಿ ಮುಂದಿನ ನಡೆಯ ಬಗ್ಗೆ ಚರ್ಚೆ ನಡೆಸಿದ್ದಾರೆ.

ದಿಢೀರ್ ಬೆಳವಣಿಗೆಯಲ್ಲಿ ಕಾಂಗ್ರೆಸ್ ಹಲವು ಶಾಸಕರು ರಾಜೀನಾಮೆ ನೀಡಿದ್ದು, ಮೈತ್ರಿ ಸರ್ಕಾರದ ಮೇಲೆ ಆಗುವ ಪರಿಣಾಮ, ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಮೈತ್ರಿ ಸರ್ಕಾರ ರಚನೆಯಾದಾಗಿನಿಂದ ಒಂದಲ್ಲಾ ಒಂದು ಅತೃಪ್ತಿ ಅಸಮಾಧಾನ ಬೆಳವಣಿಗೆಗಳು ನಿರಂತರವಾಗಿ ನಡೆಯುತ್ತಲೇ ಬಂದಿವೆ. ನಾಯಕರು ಅತೃಪ್ತರ ಮನವೊಲಿಕೆ ಯತ್ನವನ್ನು ನಡೆಸುತ್ತಲೇ ಬಂದಿದ್ದಾರೆ. ಅತೃಪ್ತ ಶಾಸಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ಬಿ.ಸಿ.ಪಾಟೀಲ್, ಪ್ರತಾಪ್ ಗೌಡ, ಬಿ.ನಾಗೇಂದ್ರ ಸೇರಿದಂತೆ 8 ಶಾಸಕರು ಇಂದು ರಾಜೀನಾಮೆ ನೀಡಿದ್ದು ಮೈತ್ರಿ ಸರ್ಕಾರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಸರ್ಕಾರ ಉಳಿಸಿಕೊಳ್ಳುವ ಸಾಧ್ಯತೆ ಕ್ಷೀಣವಾಗಿದೆ.ಹೀಗಾಗಿ ಕಾಂಗ್ರೆಸ್ ಮುಂದೆ ಯಾವ ನಿರ್ಧಾರ ಕೈಗೊಳ್ಳಬೇಕು ಎಂಬ ಬಗ್ಗೆ ಈ ನಾಯಕರು ಚರ್ಚೆ ನಡೆಸಿದ್ದಾರೆ.

ವಿಜಯನಗರ ಶಾಸಕ ಆನಂದ್ ಸಿಂಗ್ ಈಗಾಗಲೇ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಅವರ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ. ಅವರ ಮನವೊಲಿಸುವ ಯತ್ನವನ್ನು ಮಾಡುವುದಿಲ್ಲ ಎಂದು ಡಾ.ಜಿ.ಪರಮೇಶ್ವರ್ ಹಾಗೂ ಸಿದ್ದರಾಮಯ್ಯನವರು ಹೇಳಿದ್ದರು. ಈಗ ಕಾಂಗ್ರೆಸ್‍ನ 6 ಶಾಸಕರು ಏಕಾಏಕಿ ರಾಜೀನಾಮೆ ಸಲ್ಲಿಸಿದ್ದಾರೆ.ಮುಂದೆ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕು.
ಎಲ್ಲದಕ್ಕಿಂತ ಆಶ್ಚರ್ಯಕರ ಬೆಳವಣಿಗೆಯೆಂದರೆ ಕಾಂಗ್ರೆಸ್ ಹಿರಿಯ ಶಾಸಕ ರಾಮಲಿಂಗಾರೆಡ್ಡಿ, ಜಯನಗರ ಶಾಸಕಿ ಸೌಮ್ಯಾರೆಡ್ಡಿ ರಾಜೀನಾಮೆಗೆ ಮುಂದಾಗಿರುವುದು ಕಾಂಗ್ರೆಸ್‍ಗೆ ನುಂಗಲಾರದ ಬಿಸಿ ತುಪ್ಪವಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ