ವಿಫಲವಾದ ಮುಖಂಡರ ಅತೃಪ್ತ ಶಾಸಕರ ಮನವೊಲಿಕೆ ಪ್ರಯತ್ನ

ಬೆಂಗಳೂರು, ಜು.6-ಹದಿಮೂರು ಮಂದಿ ಜೆಡಿಎಸ್-ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡುತ್ತಾರೆ ಎಂಬ ವದಂತಿ ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಮನವೊಲಿಕೆ ಪ್ರಯತ್ನಕ್ಕೆ ಮುಂದಾಗಿದ್ದಾರೆ.

ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಲು ಪ್ರಯತ್ನ ನಡೆಸಿ ಸುಮಾರು 13 ಶಾಸಕರು ರಾಜೀನಾಮೆ ನೀಡುತ್ತಿದ್ದಾರೆ ಎಂಬ ಮಾಹಿತಿಗಳು ವ್ಯಾಪಕ ಚರ್ಚೆಗೆ ಒಳಗಾಗಿತ್ತು. ಕಾಂಗ್ರೆಸ್‍ನ ಸುಮಾರು 10 ಮಂದಿ ಶಾಸಕರು ರಾಜೀನಾಮೆ ನೀಡಲು ಸಿದ್ಧರಾಗಿದ್ದಾರೆ ಎಂಬ ಮಾಹಿತಿ ಹೊರಬೀಳುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ಶಾಸಕ ಭೆರತಿ ಬಸವರಾಜ್ ಅವರ ಜೊತೆ ಅಜ್ಞಾತ ಸ್ಥಳಕ್ಕೆ ತೆರಳಿದ್ದರು. ಅಲ್ಲಿಂದಲೇ ಕೆಲವು ಅತೃಪ್ತ ಶಾಸಕರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಸಂಧಾನ ನಡೆಸುವ ಪ್ರಯತ್ನ ಮಾಡಿದ್ದಾರೆ. ಆದರೆ ಈ ಸಂಧಾನಕ್ಕೆ ಶಾಸಕರು ಒಪ್ಪಿಲ್ಲ ಎಂದು ಹೇಳಲಾಗುತ್ತಿದೆ.

ನಾವು ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷವಾಗಿರುವ ಕಾಂಗ್ರೆಸ್‍ನ ಶಾಸಕರು. ಆದರೆ ನಮಗೆ ಕ್ಷೇತ್ರದಲ್ಲಿ ಯಾವುದೇ ಕೆಲಸವಾಗುತ್ತಿಲ್ಲ. ಅಭಿವೃದ್ಧಿ ವಿಷಯ ಬಂದಾಗ ವಿರೋಧ ಪಕ್ಷಗಳಿಗಿಂತಲೂ ಹೀನಾಯಸ್ಥಿತಿಯಲ್ಲಿದ್ದೇವೆ. ಇನ್ಯಾವ ಪುರುಷಾರ್ಥಕ್ಕೆ ನಾವು ಶಾಸಕರಾಗಿ ಮುಂದುವರೆಯಬೇಕು ಎಂಬ ಪ್ರಶ್ನೆಯನ್ನು ಮುಂದಿಟ್ಟಿರುವ ಅತೃಪ್ತ ಶಾಸಕರು ಅಭಿವೃದ್ಧಿ ಮಾಡಲಾಗದಿದ್ದ ಮೇಲೆ ಶಾಸಕರಾಗಿದ್ದುಕೊಂಡು ಏನು ಪ್ರಯೋಜನ ಎಂದು ರಾಜೀನಾಮೆ ನೀಡುತ್ತಿರುವುದಾಗಿ ಹಿರಿಯ ನಾಯಕರಿಗೆ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ಅತೃಪ್ತ ಬಣದಲ್ಲಿ ಗುರುತಿಸಿಕೊಂಡಿರುವ ಹಿರಿಯ ಶಾಸಕ ರಾಮಲಿಂಗಾರೆಡ್ಡಿ ಅವರ ಮನವೊಲಿಕೆಗೆ ಪ್ರಯತ್ನಿಸಿದ್ದಾರೆ. ಸಂಧಾನ ಮಾತುಕತೆಯನ್ನು ನಿರಾಕರಿಸಿರುವ ರಾಮಲಿಂಗಾರೆಡ್ಡಿ ಅವರು, ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿರುವುದಲ್ಲದೆ, ಎರಡನೇ ಹಂತದ ನಾಯಕರ ಜೊತೆ ರಾಜಕೀಯವಾಗಿ ಮಾತುಕತೆ ಕೂಡ ನಡೆಸುವುದಿಲ್ಲ ಎಂದು ಕಠಿಣವಾಗಿ ಉತ್ತರಿಸಿದ್ದಾರೆ ಎನ್ನಲಾಗಿದೆ.

ಹೈಕಮಾಂಡ್ ಮಟ್ಟದ ನಾಯಕರು ಮಾತುಕತೆಗೆ ಬಂದರೆ ಮಾತ್ರ ತಾವು ರಾಜಕೀಯ ವಿಷಯಗಳ ಬಗ್ಗೆ ಪ್ರತಿಕ್ರಿಯಿಸಿರುವುದಾಗಿ ಅವರು ಸ್ಪಷ್ಟಪಡಿಸಿದರು.

ಹೀಗಾಗಿ ಖುದ್ದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಕೆಲವು ಶಾಸಕರ ಜೊತೆ ಮಾತುಕತೆ ನಡೆಸಲು ಪ್ರಯತ್ನಿಸಿರುವುದಾಗಿ ತಿಳಿದುಬಂದಿದೆ. ಅಜ್ಞಾತವಾಸಕ್ಕೆ ತೆರಳಿರುವ ಸಿದ್ದರಾಮಯ್ಯ ಅಲ್ಲಿಂದಲೇ ದೂರವಾಣಿ ಮೂಲಕ ಸಂಪರ್ಕಿಸಿ ಶೀಘ್ರವೇ ಶಾಸಕಾಂಗ ಸಭೆ ಕರೆದು ಎಲ್ಲಾ ವಿಷಯಗಳ ಕುರಿತು ಚರ್ಚೆ ಮಾಡುವ ಭರವಸೆ ನೀಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ