ಕ್ಷೀಪ್ರ ರಾಜಕೀಯ ಬೆಳವಣಿಗೆ ಹಿನ್ನಲೆ-ಎಐಸಿಸಿ ಪ್ರಧಾನಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಬೆಂಗಳೂರಿಗೆ

ಬೆಂಗಳೂರು, ಜು.6-ರಾಜಕೀಯ ಬೆಳವಣಿಗೆಗೆ ಕ್ಷಿಪ್ರಗೊಂಡ ಬೆನ್ನಲ್ಲೇ ಪರಿಸ್ಥಿತಿ ನಿಭಾಯಿಸಲು ಹೈಕಮಾಂಡ್ ಎಐಸಿಸಿ ಪ್ರಧಾನಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಕರ್ನಾಟಕಕ್ಕೆ ಕಳುಹಿಸಿದೆ.

ರಾಜೀನಾಮೆ ನೀಡಲು ಸ್ಪೀಕರ್ ಕಚೇರಿಗೆ ಆಗಮಿಸಿದ್ದ ಅತೃಪ್ತ ಶಾಸಕರನ್ನು ಸಮಾಧಾನಪಡಿಸಲು ಜಲಸಂಪನ್ಮೂಲ ಡಿ.ಕೆ.ಶಿವಕುಮಾರ್ ವಿಧಾನಸೌಧಕ್ಕೆ ಆಗಮಿಸಿದರು.

ಕಾಂಗ್ರೆಸ್‍ನ ಟ್ರಬಲ್ ಶೂಟರ್ ಎಂದೇ ಖ್ಯಾತರಾಗಿರುವ ಡಿ.ಕೆ.ಶಿವಕುಮಾರ್ ಕನಕಪುರ ಕ್ಷೇತ್ರದ ಪ್ರವಾಸದಲ್ಲಿದ್ದರು. ಎಂಟು ಮಂದಿ ಶಾಸಕರು ರಾಜೀನಾಮೆ ನೀಡಲು ಆಗಮಿಸುತ್ತಿದ್ದಂತೆ ತಮ್ಮ ಪ್ರವಾಸವನ್ನು ಮೊಟಕುಗೊಳಿಸಿ ವಿಧಾನಸೌಧಕ್ಕೆ ಆಗಮಿಸಿದ್ದರು.

ತರಾತುರಿಯಲ್ಲಿ ಬಂದ ಡಿ.ಕೆ.ಶಿವಕುಮಾರ್ ಅವರ ಮುಖದಲ್ಲಿ ಆತಂಕ, ದುಗುಡಗಳು ಎದ್ದು ಕಾಣುತ್ತಿತ್ತು. ಅತೃಪ್ತ ಶಾಸಕರು ರಾಜೀನಾಮೆ ನೀಡುವುದು ಶತಸಿದ್ಧ.ತಮ್ಮ ನಿರ್ಧಾರದಿಂದ ಹಿಂದೆ ಸರಿಯುವುದೇ ಇಲ್ಲ ಎಂದು ಪಟ್ಟು ಹಿಡಿದಿರುವುದು ಕಾಂಗ್ರೆಸ್ ಪಾಲಿಗೆ ನುಂಗಲಾರದ ಬಿಸಿ ತುಪ್ಪವಾಗಿದೆ.

ಡಿ.ಕೆ.ಶಿವಕುಮಾರ್ ಅವರಿಗಿಂತಲೂ ಮೊದಲು ಶಾಸಕರಾದ ಎಸ್.ಟಿ.ಸೋಮಶೇಖರ್, ಮುನಿರತ್ನ, ಭೆರತಿ ಬಸವರಾಜ್ ಅವರುಗಳು ಸ್ಪೀಕರ್ ಕಚೇರಿಗೆ ಆಗಮಿಸಿ ರಾಜೀನಾಮೆ ನೀಡಲು ಮುಂದಾಗಿದ್ದ ಶಾಸಕರನ್ನು ಮನವೊಲಿಸುವ ಪ್ರಯತ್ನ ನಡೆಸಿದ್ದರು. ಆದರೆ ಅದು ಯಶಸ್ವಿಯಾಗದಿದ್ದರಿಂದ ಡಿ.ಕೆ.ಶಿವಕುಮಾರ್ ಖುದ್ದಾಗಿ ಆಗಮಿಸಬೇಕಾಯಿತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ