ಬೆಂಗಳೂರು,ಜು.7- ಸರ್ಕಾರದ ವಿರುದ್ದ ಅಸಮಾಧಾನಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಷಯದಲ್ಲಿ ವಿಧಾನಸಭೆ ಸ್ಪೀಕರ್ ಕೆ.ಆರ್.ರಮೇಶ್ಕುಮಾರ್ ನಿಷ್ಪಕ್ಷಪಾತವಾದ ಕ್ರಮ ಕೈಗೊಳ್ಳಲಿದ್ದಾರೆ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ಕುಮಾರ್ ಅನೇಕ ವಿಷಯಗಳಲ್ಲಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಅವರು ಸ್ಪೀಕರ್ ಸ್ಥಾನದಲ್ಲಿ ಕುಳಿತು ಕುರ್ಚಿಯ ಗೌರವವನ್ನು ಹೆಚ್ಚಿಸಿದ್ದಾರೆ. ನಮಗೂ ಅವರ ಬಗ್ಗೆ ಅಪಾರ ಗೌರವವಿದೆ. ಶಾಸಕರ ರಾಜೀನಾಮೆ ವಿಷಯದಲ್ಲಿ ಯಾರ ಒತ್ತಡಕ್ಕೂ ಒಳಗಾಗದೆ ನಿಷ್ಪಕ್ಷಪಾತವಾಗಿ ನಡೆದುಕೊಳ್ಳಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಸ್ಪೀಕರ್ ಬಗ್ಗೆ ನಮಗೆ ಯಾವುದೇ ರೀತಿಯ ಅನುಮಾನವಿಲ್ಲ. ಶಾಸಕರು ಸ್ವ ಇಚ್ಚೆಯಿಂದ ರಾಜೀನಾಮೆ ನೀಡಿದ್ದಾರೆ. ಶಾಸಕರ ರಾಜೀನಾಮೆಯಲ್ಲಿ ಬಿಜೆಪಿಯ ಪಾತ್ರವೇನಿಲ್ಲ. ವೈಯಕ್ತಿಕ ಕಾರಣಗಳಿಗಾಗಿ ಶಾಸಕರು ರಾಜೀನಾಮೆ ಕೊಟ್ಟರೆ ನಮಗೂ ಅದಕ್ಕೆ ಸಂಬಂಧ ಕಲ್ಪಿಸುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.
ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಜನತೆ ದೋಸ್ತಿ ಪಕ್ಷಗಳಿಗೆ ಎಂಥ ಫಲಿತಾಂಶ ಕೊಟ್ಟಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಅಂದೇ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ರಾಜೀನಾಮೆ ಕೊಡಬೇಕಿತ್ತು ಎಂದರು.
ಈಗ ಶಾಸಕರು ರಾಜೀನಾಮೆ ನೀಡಿರುವುದರಿಂದ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಮುಂದಿನ ದಿನಗಳಲ್ಲಿ ಇನ್ನು ಕ್ಷಿಪ್ರ ಬೆಳವಣಿಗೆಗಳು ನಡೆಯುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ ಎಂದು ಅವರು ಹೇಳಿದರು.
ಸರ್ಕಾರ ಬದುಕಿದ್ದರೆ ಪ್ರತಿಪಕ್ಷದ ನಾಯಕ ಯಡಿಯೂರಪ್ಪನವರು ರಾಜ್ಯ ಪ್ರವಾಸ ಕೈಗೊಳ್ಳಬೇಕಾದ ಅಗತ್ಯವಿರುತ್ತಿರಲಿಲ್ಲ. ಇಂಥ ಸರ್ಕಾರ ಜನರ ಪಾಲಿಗೆ ಇದ್ದರೂ ಒಂದೇ ಇಲ್ಲದಿದ್ದರೂ ಒಂದೇ ಎಂದು ವಾಗ್ದಾಳಿ ನಡೆಸಿದರು.
ಇನ್ನು ಅನೇಕ ಶಾಸಕರು ಅಸಮಾಧಾನಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬಹುದು. ಇದು ಕೆಲವೇ ಕೆಲವು ಮಂದಿಯ ಸರ್ಕಾರವಾಗಿದೆ.ಶಾಸಕರನ್ನು ಕಡೆಗಣಿಸಿದರೆ ಏನಾಗಬಹುದು ಎಂಬುದಕ್ಕೆ ಇದು ತಾಜಾ ಉದಾಹರಣೆಯಾಗಿದೆ ಎಂದರು.
ಬೆಂಗಳೂರು ಶಾಸಕರ ರಾಜೀನಾಮೆಯ ಹಿಂದೆ ಕಸದ ಲಾಬಿ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಮುನಿರತ್ನ, ಸೋಮಶೇಖರ್, ಭೆರತಿ ಬಸವರಾಜ್ ಹಾಗೂ ರಾಮಲಿಂಗಾರೆಡ್ಡಿ ಅವರಂತಹ ಹಿರಿಯರೇ ರಾಜೀನಾಮೆ ಕೊಡುತ್ತಾರೆ ಎಂದರೆ ಪರಿಸ್ಥಿತಿಯನ್ನು ನೀವೇ ಊಹಿಸಿಕೊಳ್ಳಿ ಎಂದರು.
ಶಾಸಕ ಎಂ.ಪಿ.ರೇಣುಕಾಚಾರ್ಯ ಮಾತನಾಡಿ, ಬಿಜೆಪಿ ಯಾವುದೇ ರೀತಿಯ ಆಪರೇಷನ್ ಕಮಲ ನಡೆಸುತ್ತಿಲ್ಲ. ದೋಸ್ತಿಯಲ್ಲಿರುವ ಅಸಮಾಧಾನ ಈಗ ಸ್ಪೋಟಗೊಂಡಿದೆ.ತಮ್ಮಲ್ಲಿರುವ ಹುಳುಕುಗಳನ್ನು ಮುಚ್ಚಿಕೊಳ್ಳಲು ಬಿಜೆಪಿ ಹೆಸರು ಹೇಳುತ್ತಿದ್ದಾರೆ ಎಂದು ಹರಿಹಾಯ್ದರು.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಜನರ ಪಾಲಿಗೆ ಇದ್ದು ಇಲ್ಲದಂತಾಗಿದೆ. ಈ ಸರ್ಕಾರ ಎಷ್ಟು ಬೇಗ ಪತನಗೊಳ್ಳುತ್ತದೆಯೋ ಎಂದು ಕಾಯುತ್ತಿದ್ದಾರೆ.
ನಿಮ್ಮಲ್ಲಿರುವ ಆಂತರಿಕ ಭಿನ್ನಮತವನ್ನು ಮರೆಮಾಚಲು ಆಪರೇಷನ್ ಕಮಲದ ಹೆಸರು ಬಳಸಿಕೊಳ್ಳಬೇಡಿ ಎಂದರು.