ಬಿಜೆಪಿ ವಿರುದ್ಧ ಧರಣಿ ನಡೆಸಿದ ಕಾಂಗ್ರೇಸ್ ಶಾಸಕರು

ಬೆಂಗಳೂರು,ಜು.9- ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಿದ್ದೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕರು ವಿಧಾನಸೌಧ ಮತ್ತು ವಿಕಾಸಸೌಧ ಮಧ್ಯೆಯಿರುವ ಮಹಾತ್ಮಗಾಂಧೀಜಿ ಪ್ರತಿಮೆ ಎದುರು ಕೆಲಕಾಲ ಧರಣಿ ನಡೆಸಿದರು.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ಧರಣಿ ನಡೆಸಿ ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧ ಘೋಷಣೆಗಳನ್ನು ಕೂಗಿದರು. ಅಧಿಕಾರದ ದಾಹದಿಂದ ಕುದುರೆ ವ್ಯಾಪಾರ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

ನಂತರ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿರುವ 10 ಶಾಸಕರು ಕಾಂಗ್ರೆಸ್‍ನಿಂದ ಸ್ಪರ್ಧಿಸಿ ಚುನಾಯಿತರಾಗಿದ್ದಾರೆ.

ಬಿಜೆಪಿ ಜತೆ ಕೈ ಜೋಡಿಸಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಪಕ್ಷಾಂತರ ನಿಷೇಧ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ದೂರು ನೀಡುತ್ತೇವೆ ಎಂದರು.

ರಾಜೀನಾಮೆ ನೀಡಿರುವ ಶಾಸಕರು ಒಂದೇ ವಿಮಾನದಲ್ಲಿ ತೆರಳಿ ಒಂದೇ ಹೋಟೆಲ್‍ನಲ್ಲಿ ಉಳಿದುಕೊಂಡಿದ್ದಾರೆ. ಇದರ ಅರ್ಥ ಬಿಜೆಪಿ ಅವರ ಕೈವಾಡವಿದೆ ಎಂದು ಆರೋಪಿಸಿದರು. ರಾಜೀನಾಮೆ ನೀಡಿರುವ ಶಾಸಕರು ವಾಪಸ್ ಬಂದು ರಾಜೀನಾಮೆ ಹಿಂಪಡೆಯುಂತೆ ಮನವಿ ಮಾಡಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಕೂಡ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿ ಸತ್ಯಕ್ಕೆ ಜಯ ಸಿಗಲಿದೆ. ಶಾಸಕರು ವಾಪಸ್ ಬರಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಸಚಿವ ಜಮೀರ್ ಅಹಮ್ಮದ್ ಖಾನ್ ಮಾತನಾಡಿ ರಾಜೀನಾಮೆ ನೀಡಿರುವ ಶಾಸಕರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ, ಆದರೂ ಅವರು ವಾಪಸ್ ಬರುವ ವಿಶ್ವಾಸವಿದೆ. ವಾಪಸ್ ಬಂದು ರಾಜೀನಾಮೆ ಹಿಂಪಡೆಯದಿದ್ದರೆ ಕಾನೂನು ಹೋರಾಟ ಮಾಡುವುದಾಗಿ ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ