ಬೆಂಗಳೂರು, ಜು.10- ಕೇಂದ್ರ ಸರ್ಕಾರ ಮತ್ತು ಬಿಜೆಪಿ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ. ರಾಜ್ಯಪಾಲರು ಸಹ ಇದಕ್ಕೆ ಸಹಕಾರ ನೀಡುತ್ತಿದ್ದಾರೆ ಎಂದು ನಗರದಲ್ಲಿಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ಕೆಪಿಸಿಸಿ ಕಚೇರಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆ ನಗರದ ಆದಾಯ ತೆರಿಗೆ ಇಲಾಖೆ ಕಚೇರಿ ಬಳಿ ಇರುವ ಮಿನ್ಸ್‍ಚೌಕಾದ ಬಳಿ ತೆರಳಿ ಅಲ್ಲಿಂದ ರಾಜಭವನಕ್ಕೆ ಮುತ್ತಿಗೆ ಹಾಕುವ ಪ್ರಯತ್ನ ಮಾಡಲಾಯಿತು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್‍ಖಂಡ್ರೆ, ಸಚಿವರು, ಶಾಸಕರು ಸೇರಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಸಮ್ಮಿಶ್ರ ಸರ್ಕಾರದ ದೋಸ್ತಿ ಪಕ್ಷಗಳಾದ ಕಾಂಗ್ರೆಸ್-ಜೆಡಿಎಸ್‍ನ ಶಾಸಕರಿಗೆ ಹಣದ ಆಮೀಷ ತೋರಿಸಿ ರಾಜೀನಾಮೆ ಕೊಡಿಸಿದ್ದು, ಅವರನ್ನು ಮುಂಬೈನ ಹೋಟೆಲ್‍ನಲ್ಲಿ ಅಡಗಿಸಿಟ್ಟಿದ್ದಾರೆ. ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಇತರರು ರಾಜೀನಾಮೆ ಕೊಟ್ಟಿರುವ ಶಾಸಕರನ್ನು ಭೇಟಿ ಮಾಡಲು ಹೋದರೆ ಅವರಿಗೆ ಅವಕಾಶ ಕೊಡದೆ ಪ್ರಜಾಪ್ರಭುತ್ವದ ವಿರುದ್ಧವಾಗಿ ನಡೆದುಕೊಳ್ಳಲಾಗಿದೆ. ರಾಜ್ಯಪಾಲರು ಕೂಡ ಬಿಜೆಪಿ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದರು.
ಕಾಂಗ್ರೆಸ್ ನಾಯಕರ ನಿಯೋಗವೊಂದು ರಾಜ್ಯಪಾಲರನ್ನು ಭೇಟಿ ಮಾಡಿ ಬಿಜೆಪಿಯ ಸಂಚಿನ ವಿರುದ್ಧ ದೂರು ನೀಡಿತು.