ದೇಶದಲ್ಲಿ ಪ್ರಜಾಪ್ರಭುತ್ವವನ್ನು ಹಾಳುಮಾಡುವ ಹುನ್ನಾರ ನಡೆದಿದೆ-ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು, ಜು.10- ಬಿಜೆಪಿ ವಿರುದ್ಧ ಬೀದಿಗಿಳಿದು ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ದೋಸ್ತಿ ನಾಯಕರು ಇಂದು ಬೃಹತ್ ಪ್ರತಿಭಟನೆ ನಡೆಸಿದರು.

ನಗರದ ರಾಜಭವನದ ರಸ್ತೆಯಲ್ಲಿ ಕಿಕ್ಕಿರದ ನಾಯಕರು ರಾಜಭವನ ಮುತ್ತಿಗೆಗೆ ಮುಂದಾದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ವೇಳೆ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ದೇಶದಲ್ಲಿ ಪ್ರಜಾಪ್ರಭುತ್ವವನ್ನು ಹಾಳು ಮಾಡುವ ಹುನ್ನಾರ ನಡೆದಿದೆ. ನಮ್ಮ ಶಾಸಕರು ಸ್ವಯಂ ಪ್ರೇರಿತರಾಗಿ ಹೋಗಿಲ್ಲ. ಪ್ರಜಾಪ್ರಭುತ್ವ ಉಳಿಸಲು ಮುಂದಾಗಬೇಕಿದೆ ಎಂದರು.

ಒಬ್ಬೊಬ್ಬ ಶಾಸಕರು ಒಂದು ಪ್ಲೈಟ್ ಮಾಡಿಕೊಂಡು ಹೋಗಿದ್ದಾರೆ.ಪ್ಲೈಟ್ ಮಾಡಿಕೊಂಡು ಹೋಗುವಷ್ಟು ನಮ್ಮ ಶಾಸಕರು ಶ್ರೀಮಂತರಾ?ಮುಂಬೈಗೆ ಕರೆದುಕೊಂಡು ಹೋಗಿದ್ದು ಯಾರು ಎಂದು ಪ್ರಶ್ನಿಸಿದ ಅವರು, ನಾವು ನ್ಯಾಯಕ್ಕಾಗಿ ಹೋರಾಡಬೇಕಿದೆ.ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಮತ್ತು ರಾಜ್ಯಪಾಲರು ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ದೇಶದ ವ್ಯವಸ್ಥೆಯನ್ನು ಬುಡಮೇಲು ಮಾಡುತ್ತಿದ್ದಾರೆ. ಅದರ ವಿರುದ್ಧ ಸಾಂಕೇತಿಕ ಧರಣಿ ನಡೆಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ದೇಶಾದ್ಯಂತ ಬಿಜೆಪಿ ವಿರುದ್ಧ ಹೋರಾಟ ಮಾಡಬೇಕಾದ ಅನಿವಾರ್ಯತೆ ನಿರ್ಮಾಣವಾಗುತ್ತಿದೆ ಎಂದರು.

ಕೇಂದ್ರ ಸರ್ಕಾರ ಹಾಗೂ ಬಿಜೆಪಿ ನಾಯಕರು ಮತ್ತು ರಾಜ್ಯಪಾಲರು ಸಂವಿಧಾನಕ್ಕೆ ವಿರುದ್ಧವಾಗಿದ್ದಾರೆ. ರಾಜ್ಯದಲ್ಲಿ ಬಿಜೆಪಿ ವಿರುದ್ಧ ಜನಾಭಿಪ್ರಾಯವಿದೆ. ಆದರೂ ಬಿಜೆಪಿಯವರು ಇನ್ನಿಲ್ಲದ ಕಸರತ್ತು ಮಾಡಿದ್ದಾರೆ. ಒಂದು ಪಕ್ಷಕ್ಕೆ ಜನಾದೇಶ ಕೊಟ್ಟಿರಲಿಲ್ಲ. ಬಿಜೆಪಿಗೆ ಹೆಚ್ಚು ಬೆಂಬಲಿಸಿದರೂ, ಮತ್ತೆರೆಡು ಪಕ್ಷಗಳಿಗೂ ಬೆಂಬಲ ನೀಡಿದ್ದರು. ಶೇ.57ರಷ್ಟು ನಮಗೆ ಮತ ನೀಡಿದ್ದರು. ಆದರೆ, ಬಿಜೆಪಿಯವರು ಅಧಿಕಾರ ಹಿಡಿಯಲು ಕುಟಿಲ ಪ್ರಯತ್ನ ನಡೆಸಿ ಹಣ, ಅಧಿಕಾರದ ಆಮಿಷ ತೋರಿಸಿ ಶಾಸಕರನ್ನು ಕುದುರೆ ವ್ಯಾಪಾರ ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೊಂದು ಸಾಂಕೇತಿಕ ಪ್ರತಿಭಟನೆ ವ್ಯವಸ್ಥೆಯನ್ನು ನಾಶ ಮಾಡಲು ಮೋದಿ ಹಾಗೂ ಶಾ ಪ್ರಯತ್ನಿಸುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಆಕ್ಷೇಪ ವ್ಯಕ್ತಪಡಿಸಿದರು.

ಡಿ.ಕೆ.ಶಿವಕುಮಾರ್ ಅವರು ಮುಂಬೈ ಹೋಟೆಲ್‍ಗೆ ಹೋದಾಗ ಅವರನ್ನು ಒಳಗೆ ಬಿಟ್ಟಿಲ್ಲ. ಅಘೋಷಿತ ತುರ್ತು ಪರಿಸ್ಥಿತಿಯಂತ ಕೆಟ್ಟ ವ್ಯವಸ್ಥೆ ಇದೆ. ರಾಜ್ಯದಲ್ಲಿ ಮಾತ್ರವಲ್ಲ. ಎಲ್ಲಾ ರಾಜ್ಯದಲ್ಲೂ ಇದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವೆಲ್ಲ ಒಂದುಗೂಡಿ ಹೋರಾಡುವ ಅನಿವಾರ್ಯತೆ ಇದೆ. ನಾಳೆ ಸ್ಪೀಕರ್ ಅವರು ಮೂವರಿಗೆ ಅವಕಾಶಕೊಟ್ಟಿದ್ದಾರೆ.ಜು.15ರಂದು ಭೇಟಿಗೆ ಅವಕಾಶ ನೀಡಿದ್ದಾರೆ. ಏನೇ ಭಿನ್ನಾಭಿಪ್ರಾಯವಿದ್ದರೂ ಒಟ್ಟಾಗಿ ಹೋರಾಟ ಮಾಡೋಣ ಎಂದು ಹೇಳಿದರು.

ರಾಜಭವನ ಮುತ್ತಿಗೆ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಗುಲಾಬ್‍ನಬಿ ಆಜಾದ್, ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಸೇರಿದಂತೆ ಮತ್ತಿತರ ನಾಯಕರು ಪಾಲ್ಗೊಂಡಿದ್ದರು.

ಮುತ್ತಿಗೆಗೆ ಯತ್ನಿಸಿದವರನ್ನು ಪೊಲೀಸರು ವಶಕ್ಕೆ ಪಡೆದರು.

ಇದಕ್ಕೂ ಮುನ್ನ ನಗರದ ಮಲ್ಲೇಶ್ವರಂನ ಬಿಜೆಪಿ ಕಚೇರಿ ಬಳಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಪರಮೇಶ್ವರ್, ಕಾರ್ಯಾಧ್ಯಕ್ಷ ಈಶ್ವರ್‍ಖಂಡ್ರೆ, ಸಚಿವರು, ಶಾಸಕರು ಸೇರಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಸಮ್ಮಿಶ್ರ ಸರ್ಕಾರದ ದೋಸ್ತಿ ಪಕ್ಷಗಳಾದ ಕಾಂಗ್ರೆಸ್-ಜೆಡಿಎಸ್‍ನ ಶಾಸಕರಿಗೆ ಹಣದ ಆಮೀಷ ತೋರಿಸಿ ರಾಜೀನಾಮೆ ಕೊಡಿಸಿದ್ದು, ಅವರನ್ನು ಮುಂಬೈನ ಹೋಟೆಲ್‍ನಲ್ಲಿ ಅಡಗಿಸಿಟ್ಟಿದ್ದಾರೆ. ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಇತರರು ರಾಜೀನಾಮೆ ಕೊಟ್ಟಿರುವ ಶಾಸಕರನ್ನು ಭೇಟಿ ಮಾಡಲು ಹೋದರೆ ಅವರಿಗೆ ಅವಕಾಶ ಕೊಡದೆ ಪ್ರಜಾಪ್ರಭುತ್ವದ ವಿರುದ್ಧವಾಗಿ ನಡೆದುಕೊಳ್ಳಲಾಗಿದೆ. ರಾಜ್ಯಪಾಲರು ಕೂಡ ಬಿಜೆಪಿ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದರು.

ಕಾಂಗ್ರೆಸ್ ನಾಯಕರ ನಿಯೋಗವೊಂದು ರಾಜ್ಯಪಾಲರನ್ನು ಭೇಟಿ ಮಾಡಿ ಬಿಜೆಪಿಯ ಸಂಚಿನ ವಿರುದ್ಧ ದೂರು ನೀಡಿತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ