ಬೆಂಗಳೂರು,ಜು.15- ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಬಿ.ಎಲ್. ಸಂತೋಷ್ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರ ಅವರನ್ನು ಭೇಟಿಯಾದರು.
ಡಾಲರ್ಸ್ ಕಾಲೋನಿ ನಿವಾಸಕ್ಕೆ ಆಗಮಿಸಿದ ಸಂತೋಷ್, ಯಡಿಯೂರಪ್ಪನವರೊಂದಿಗೆ ಕೆಲಕಾಲ ಮಾತುಕತೆ ನಡೆಸಿದರು.
ನಿನ್ನೆಯಷ್ಟೇ ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಸ್ಥಾನದಿಂದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸ್ಥಾನಕ್ಕೆ ನಿಯೋಜನೆಗೊಂಡಿರುವ ಸಂತೋಷ್ ಪ್ರಸಕ್ತ ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿದ್ದಾರೆ.
ಬಿಎಸ್‍ವೈ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕೊಟ್ಟು ಮಾತುಕತೆ ನಡೆಸಿದ ಬಳಿಕ ಅವರಿಗೆ ಶುಭಕೋರಿದ ಬಿಎಸ್‍ವೈ, ಮನೆಯ ಗೇಟ್ ತನಕ ಬಂದು ಬಿ.ಎಲ್ ಸಂತೋಷ್ ಅವರನ್ನು ಕಾರು ಹತ್ತಿಸಿದರು.
ಬಳಿಕ ಸಂಸದೆ ಶೋಭಾ ಕರಂದ್ಲಾಜೆ, ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಸೇರಿದಂತೆ ಮತ್ತಿತರ ನಾಯಕರು ಆಗಮಿಸಿ ಮುಂದಿನ ರಾಜಕೀಯ ಬೆಳವಣಿಗೆಗಳ ಕುರಿತಂತೆ ಮಾತುಕತೆ ನಡೆಸಿದರು.