ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಕೊಡಗಿನಲ್ಲಿ ಮುಂದುವರೆದ ಮಳೆ

ಬೆಂಗಳೂರು, ಜು.23- ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಡಿಕೇರಿ , ಕೊಡಗಿನಾದ್ಯಂತ ಜಿಟಿ ಜಿಟಿ ಮಳೆ ಮುಂದುವರೆದಿದ್ದು , ಜನಜೀವನ ಅಸ್ತವ್ಯಸ್ತಗೊಂಡಿದೆ.
ಕೊಡಗಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ರಸ್ತೆಗೆ ಅಡ್ಡಲಾಗಿ ಮಣ್ಣು ದಿಬ್ಬ ಕುಸಿದು ಬಿದ್ದಿದ್ದು, ವಾಹನ ಸವಾರರು ಭಾರೀ ತೊಂದರೆ ಅನುಭವಿಸುವಂತಾಗಿದ್ದು, ಮಳೆಯಿಂದಾಗಿ ವಿದ್ಯುತ್ ಕಂಬಗಳು ನೆಲಕ್ಕೆ ಬಾಗಿಕೊಂಡಿದ್ದು ಅಲ್ಲಲ್ಲಿ ರಸ್ತೆಯಲ್ಲಿ ಮಣ್ಣಿನ ದಿಬ್ಬಗಳು ಕುಸಿದಿದ್ದರಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿತ್ತು.

ಕೊಡಗು ಜಿಲ್ಲೆಯಾದ್ಯಂತ ಮುಂಜಾಗ್ರತಾ ಕ್ರಮವಾಗಿ ನಾಳೆಯವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲೂ ಸಹ ಮಳೆ ಜೋರಾಗಿದ್ದು ಕಾರವಾರ ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಹೊಲ, ಗದ್ದೆಗಳು ಜಲಾವೃತಗೊಂಡಿವೆ.
ಅರಗ ಗ್ರಾಮದ ಹೆದ್ದಾರಿಯಲ್ಲಿ ನೀರು ತುಂಬಿಕೊಂಡು ವಾಹನ ಸಂಚಾರದಲ್ಲಿ ತುಸು ವ್ಯತ್ಯಯವಾಗಿತ್ತು.
ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು , ಹಳ್ಳ-ಕೊಳ್ಳಗಳು ತುಂಬಿ ಹರಿದಿವೆ.
ಬೆಂಗಳೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ ಸೇರಿದಂತೆ ವಿವಿಧೆಡೆ ಮೋಡ ಕವಿದ ವಾತಾವರಣವಿದ್ದು , ಆಗಾಗ ಮಳೆ ಬೀಳುತ್ತಿದೆ.
ರಾತ್ರಿಯಿಂದ ಬೆಳಗಿನ ಜಾವದವರೆಗೂ ಬೆಂಗಳೂರಿನಲ್ಲಿ ಜಿಟಿ ಜಿಟಿ ಮಳೆ ಸುರಿದಿದ್ದು , ಬೆಳಗ್ಗೆ 7 ಗಂಟೆಯ ನಂತರ ಮಳೆ ನಿಂತಿತ್ತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ