ಬೆಂಗಳೂರು, ಜು.24-ವಿಶ್ವಾಸಮತ ಯಾಚನೆಯಲ್ಲಿ ಸೋಲುಂಟಾಗಿ ಸರ್ಕಾರ ಪತನಗೊಂಡ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಇಂದು ಮಹತ್ವದ ಸಭೆ ನಡೆಸಿ ಮುಂದಿನ ರಾಜಕೀಯ ನಡೆಗಳ ಬಗ್ಗೆ ನಡೆಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷ ದಿನೇಶ್‍ಗುಂಡೂರಾವ್, ಕಾಂಗ್ರೆಸ್‍ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಸಚಿವರಾದ ಡಿ.ಕೆ.ಶಿವಕುಮಾರ್, ಕೃಷ್ಣಭೆರೇಗೌಡ, ಎಚ್.ಸಿ.ಮಹದೇವಪ್ಪ, ಹಿರಿಯ ನಾಯಕರಾದ ಎಚ್.ಕೆ.ಪಾಟೀಲ್, ಎಸ್.ಆರ್.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.
ಕಾಂಗ್ರೆಸ್ ವಿಪಕ್ಷ ನಾಯಕನ ಆಯ್ಕೆ ಸಂಬಂಧ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.ಜೊತೆಯಲ್ಲಿ ಮುಂದಿನ ದಿನಗಳಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿ ನಡೆಸಬೇಕೇ, ಬೇಡವೇ ಎಂಬ ಸುದೀರ್ಘ ಚರ್ಚೆ ನಡೆದಿದೆ.
ರಾಜೀನಾಮೆ ನೀಡಿ ಹೊರ ಹೋಗಿರುವ ಪಕ್ಷದ 13 ಮಂದಿ ಶಾಸಕರ ವಿರುದ್ಧ ಕ್ರಮಕೈಗೊಳ್ಳುವ ಮಹತ್ವದ ಚರ್ಚೆಯಾಗಿದ್ದು, ಮುಂದಿನ ದಿನಗಳಲ್ಲಿ ನಡೆಯುವ ಉಪಚುನಾವಣೆಯಲ್ಲಿ ರಾಜೀನಾಮೆ ನೀಡಿರುವ ಶಾಸಕರ ಕ್ಷೇತ್ರಗಳಲ್ಲಿ ಪರ್ಯಾಯ ನಾಯಕತ್ವ ಹುಟ್ಟುಹಾಕುವ ಬಗ್ಗೆಯೂ ಸಮಾಲೋಚನೆ ನಡೆಸಲಾಗಿದೆ.
ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಬಗ್ಗೆ ಮತ್ತು ಪಕ್ಷದ್ರೋಹ ಮಾಡಿದ ಶಾಸಕರ ಬಗ್ಗೆ ಬಿಸಿ ಬಿಸಿ ಚರ್ಚೆಗಳು ನಡೆದವು ಎಂದು ಮೂಲಗಳು ತಿಳಿಸಿವೆ.