ಬೆಂಗಳೂರು, ಜು.25- ಸಿದ್ದರಾಮಯ್ಯ ಅವರು ನಮ್ಮ ನಾಯಕರು.ಅವರಿಂದಾಗಿಯೇ ನಾವು ರಾಜೀನಾಮೆ ಕೊಟ್ಟಿರುವುದು ಎಂದು ಅತೃಪ್ತ ಶಾಸಕರು ನೀಡಿರುವ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಂಡಾಮಂಡಲವಾಗಿದ್ದಾರೆ.
ಟ್ವಿಟರ್ನಲ್ಲಿ ತಮ್ಮ ಸಿಟ್ಟನ್ನು ಹೊರ ಹಾಕಿರುವ ಸಿದ್ದರಾಮಯ್ಯ, ನಾನು ಮುಖ್ಯಮಂತ್ರಿ ಆಗಿದ್ದ ಕಾಲದಲ್ಲೂ ಕೂಡ ನನ್ನ ಮೇಲೆ ಆರೋಪಗಳ ಸುರಿಮಳೆಯಾಗಿವೆ. ನನ್ನ ರಾಜಕೀಯ ಜೀವನದಲ್ಲಿ ಇವೆಲ್ಲ ಮೊದಲನೆಯದಲ್ಲ. ಬಹುಶಃ ಕೊನೆಯದೂ ಅಲ್ಲ.
ಇಂತಹ ಸುಳ್ಳು ಆರೋಪಗಳ ವಿಷ ಕುಡಿದು ನಾನು ವಿಷಕಂಠನಾಗಿದ್ದೇನೆ. ಕೊನೆಗೆ ಸತ್ಯವೇ ಗೆಲ್ಲುವುದು.ಸತ್ಯಮೇವ ಜಯತೆ ಎಂದು ಕನ್ನಡದಲ್ಲೇ ಟ್ವೀಟ್ ಮಾಡಿ ಕಾಂಗ್ರೆಸ್ಗೆ ಟ್ಯಾಗ್ ಮಾಡಿದ್ದಾರೆ.
ಮತ್ತೊಂದು ಟ್ವಿಟ್ನಲ್ಲಿ ಸಿದ್ದರಾಮಯ್ಯನವರು ನಮ್ಮ ನಾಯಕರು ಎಂದು ಅತೃಪ್ತ ಶಾಸಕರು ಹೇಳಿಕೆ ನೀಡಿದ್ದರೆ ಅವರಿಗೆ ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳುವ ದುರುದ್ದೇಶ ಇರಬಹುದು.ಒಂದು ವೇಳೆ ಅವರು ನೀಡದೇ ಇದ್ದ ಹೇಳಿಕೆಗಳನ್ನು ಮಾಧ್ಯಮಗಳು ವರದಿ ಮಾಡುತ್ತಿದ್ದರೆ ಇದರ ಹಿಂದೆ ಯಾರೋ ಸಂಚುಕೋರರು ಇದ್ದಾರೆ ಎಂಬುದು ಅರ್ಥ.ಸತ್ಯ ಬಯಲಾಗುವ ಕಾಲ ಬಂದೇ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅತೃಪ್ತರ ಹೇಳಿಕೆಗಳು ವರದಿಯಾದ ತಕ್ಷಣವೇ ಟ್ವಿಟ್ ಮಾಡಿರುವ ಸಿದ್ದರಾಮಯ್ಯ ಅವರು, ಕೆಲವು ಅತೃಪ್ತ ಶಾಸಕರು ನೀಡಿದ್ದಾರೆ ಎಂದು ಹೇಳಲಾದ ಹೇಳಿಕೆಗಳು ಮಾಧ್ಯಮಗಳಲ್ಲಿ ವರದಿಯಾಗುತ್ತಿವೆ.ಸಿದ್ದರಾಮಯ್ಯನವರು ನಮ್ಮ ನಾಯಕರು. ಅವರಿಂದಾಗಿಯೇ ನಾವು ರಾಜೀನಾಮೆ ಕೊಟ್ಟಿರುವುದು ಎಂದು ಅತೃಪ್ತರು ಹೇಳಿದ್ದರೆ ಅದು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶ ಪೂರಿತ. ಅವರು ಈ ಮಾತನ್ನು ನನ್ನ ಮುಂದೆ ಬಂದು ಹೇಳಲಿ.ಅದಕ್ಕೆ ತಕ್ಕ ಉತ್ತರ ಕೊಡುತ್ತೇನೆ ಎಂದು ಕಿಡಿಕಾರಿದ್ದಾರೆ.
ಸಮ್ಮಿಶ್ರ ಸರ್ಕಾರದ ಪತನಕ್ಕೆ ಸಿದ್ದರಾಮಯ್ಯ ಅವರ ಬೆಂಬಲಿಗರೇ ಮುಹೂರ್ತವಿಟ್ಟಿದ್ದು, ರಾಜೀನಾಮೆ ನೀಡಿ ಮುಂಬೈಗೆ ಹೋಗಿ ಕುಳಿತಿರುವುದು ಎಲ್ಲವೂ ಇತಿಹಾಸ.
ಮುಂಬೈನಿಂದ ವಾಪಸ್ ಬಂದ ಶಾಸಕ ಶಿವರಾಮ್ ಹೆಬ್ಬಾರ್ ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, ನಾವು ಇನ್ನೂ ಕಾಂಗ್ರೆಸ್ನಲ್ಲೇ ಇದ್ದೇವೆ. ಹಾಗಾಗಿ ಸಿದ್ದರಾಮಯ್ಯ ಅವರು ನಮ್ಮ ನಾಯಕರು ಎಂದು ಹೇಳಿದರು.
ಜತೆಗೆ ಕೆಲವು ಶಾಸಕರು ಸಿದ್ದರಾಮಯ್ಯ ಅವರಿಗಾಗಿಯೇ ನಾವು ರಾಜೀನಾಮೆ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ ಎಂಬುದು ವರದಿಯಾಗಿದೆ. ಇದು ಕಾಂಗ್ರೆಸ್ ಮತ್ತು ಜೆಡಿಎಸ್ ಪಾಳಯದಲ್ಲಿ ಆಕ್ರೋಶ ಹುಟ್ಟುಹಾಕಿದೆ.