ರಾಜ್ಯ ವಿಧಾನಸಭೆಯ ಒಟ್ಟು ಶಾಸಕರ ಸಂಖ್ಯಾಬಲ 222 ಇದ್ದು, ಸರ್ಕಾರ ರಚಿಸಲು ಬೇಕಾಗಿರುವ ಸರಳ ಬಹುಮತ 112 ಆಗಿದ್ದರೂ 105 ಶಾಸಕರನ್ನು ಹೊಂದಿರುವ ಬಿಜೆಪಿಗೆ ಸರ್ಕಾರ ರಚನೆ ಮಾಡಲು ರಾಜ್ಯಪಾಲರು ಅವಕಾಶ ಮಾಡಿಕೊಟ್ಟಿರುವುದು ಪ್ರಜಾಪ್ರಭುತ್ವದ ವಿರೋಧಿ ನಿರ್ಧಾರ ಎಂದು ಜೆಡಿಎಸ್ ಆರೋಪಿಸಿದೆ.
ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದು, ರಾಜ್ಯಪಾಲರು ಬಹುಮತದ ಬಗ್ಗೆ ಯಾವುದೇ ಅನುಮಾನ ವ್ಯಕ್ತಪಡಿಸದೆ ಸರ್ಕಾರ ರಚನೆಗೆ ಅನುಮತಿ ನೀಡಿದ್ದಾರೆ. ಬಿಜೆಪಿ ಬಹುಮತ ಸಾಬೀತುಪಡಿಸುವ ಬಗ್ಗೆ ಯಾವುದೇ ಸಂದೇಹವಿಲ್ಲದೆ ಒಂದೇ ನಿಮಿಷದಲ್ಲಿ ಅನುಮತಿ ನೀಡಿರುವುದು ಪ್ರಜಾಪ್ರಭುತ್ವದ ವಿರೋಧಿ ನಿರ್ಧಾರ ಎಂದು ಜೆಡಿಎಸ್ ಟ್ವೀಟ್ನಲ್ಲಿ ಅಸಮಾಧಾನ ವ್ಯಕ್ತಪಡಿಸಿದೆ.