ಬೆಂಗಳೂರು, ಜು.29-ರಾಜ್ಯದಲ್ಲಿ ಆಡಳಿತ ಯಂತ್ರ ಸ್ಥಗಿತವಾಗಿರಲಿಲ್ಲ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ತಿಳಿಸಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡಿಸಿದ ವಿಶ್ವಾಸ ಯಾಚನಾ ಪ್ರಸ್ತಾಪದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಖ್ಯಮಂತ್ರಿಯವರು ರಾಜ್ಯದಲ್ಲಿ ಆಡಳಿತ ಯಂತ್ರ ಸ್ಥಗಿತವಾಗಿದ್ದು, ಸರಿ ಮಾಡಬೇಕೆಂದು ಹೇಳಿದ್ದಾರೆ. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಮೂಲಕ ಬಡವರಿಗೆ ನ್ಯಾಯ ಕೊಡುವ ಕೆಲಸವನ್ನು 14 ತಿಂಗಳು ಮಾಡಿದ್ದೇವೆ. ಜನ ಮೆಚ್ಚುವಂತೆ ಆಡಳಿತ ನಡೆಸಲಾಗಿದೆ ಎಂದು ವಿರೋಧ ಪಕ್ಷದ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು.
ತಾವು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದ ಕಾರ್ಯಕ್ರಮಗಳನ್ನು ಮುಂದುವರೆಸಿದ್ದಲ್ಲದೆ, ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಪ್ರಣಾಳಿಕೆ ಅಂಶಗಳನ್ನು ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಮೂಲಕ ಜಾರಿ ಮಾಡುವ ಪ್ರಯತ್ನ ಮಾಡಿದ್ದೇವೆ. ರೈತರ ಸಾಲ ಮನ್ನಾ, ಬೀದಿ ಬದಿ ವ್ಯಾಪಾರಿಗಳಿಗೆ ನೆರವು ನೀಡುವುದು, ಖಾಸಗಿ ಸಾಲ ಮನ್ನಾ ಮಾಡಲು ಕಾಯ್ದೆ ತರುವ ಮೂಲಕ ರೈತರಿಗೆ, ಬಡವರಿಗೆ ನ್ಯಾಯ ಕೊಡುವ ಕೆಲಸ ಮಾಡಲಾಗಿದೆ ಎಂದು ಮೈತ್ರಿ ಸರ್ಕಾರದ ಆಡಳಿತವನ್ನು ಸಮರ್ಥಿಸಿಕೊಂಡರು.
ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ಮಂಡಿಸಿದ ವಿಶ್ವಾಸ ಮತಯಾಚನೆ ಸಂದರ್ಭದಲ್ಲಿ 4 ದಿನ ಸುದೀರ್ಘ ಚರ್ಚೆಯಾಗಿದೆ. ಆ ಸಂದರ್ಭದಲ್ಲಿ ತಾವೂ ಕೂಡ ಅನೇಕ ವಿಷಯಗಳನ್ನು ಪ್ರಸ್ತಾಪಿಸಿದ್ದು, ಈಗ ದೀರ್ಘ ಚರ್ಚೆ ಮಾಡುವುದಿಲ್ಲ ಎಂದರು.
ಯಡಿಯೂರಪ್ಪ ಯಾವ ರೀತಿ ಮುಖ್ಯಮಂತ್ರಿಯಾದರು ಎಂಬುದನ್ನು ಪ್ರಸ್ತಾಪಿಸಬಹುದಿತ್ತು. ಆದರೆ ಅದನ್ನು ಈಗ ಪ್ರಸ್ತಾಪಿಸುವುದಿಲ್ಲ, ಮುಖ್ಯಮಂತ್ರಿಯಾಗಿರುವುದಕ್ಕೆ ಅಭಿನಂದಿಸುವುದಾಗಿ ಹೇಳಿದರು.
ಮುಖ್ಯಮಂತ್ರಿಗಳು ಒಳ್ಳೆ ಕೆಲಸ ಮಾಡುವುದಾಗಿ ಹಾಗೂ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿರುವುದನ್ನು ಸ್ವಾಗತಿಸುತ್ತೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಯಾಗಿ ಸದನಕ್ಕೆ ಬರುತ್ತೇವೆ, ತಾವು ಮುಖ್ಯಮಂತ್ರಿಯಾಗಿ 5 ವರ್ಷ, ಕುಮಾರಸ್ವಾಮಿಯವರು 14 ತಿಂಗಳು ಮುಖ್ಯಮಂತ್ರಿಯಾಗಿ ಪ್ರಾಮಾಣಿಕ ಕೆಲಸ ಮಾಡಿದ್ದೇವೆ ಎಂದರು.