ಬೆಂಗಳೂರು: ನೂತನ ಸಿಎಂ ಯಡಿಯೂರಪ್ಪ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ. ಸಚಿವರ ನೇಮಕಕ್ಕೂ ಮುನ್ನವೇ ಬೆಳ್ಳಂಬೆಳಗ್ಗೆ ಸರಕಾರಿ ಕಚೇರಿಗೆ ಭೇಟಿ ನೀಡಿ ಸಿಬ್ಬಂದಿಗೆ ಬಿಸಿ ಮುಟ್ಟಿಸಿದ್ದಾರೆ.
ರಾಜ್ಯ ರಾಜಧಾನಿಯ ವಿಧಾನಸೌಧದ ನೆಲಮಹಡಿಯಲ್ಲಿರುವ ಸ್ವೀಕೃತಿ ಮತ್ತು ರವಾನೆ ಶಾಖೆಗೆ ದಿಢೀರ್ ಭೇಟಿ ನೀಡಿದ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಸರಕಾರಿ ಕೆಲಸದ ವೇಳೆಯಲ್ಲಿ ಎಲ್ಲ ಸಿಬ್ಬಂದಿ ಕಡ್ಡಾಯವಾಗಿ ಕಚೇರಿಯಲ್ಲಿ ಹಾಜರಿರಬೇಕೆಂಬ ಸೂಚನೆಯನ್ನು ನೀಡುವುದರ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದರು.
ಸಮಯಕ್ಕೆ ಸರಿಯಾಗಿ ಕಚೇರಿಗೆ ಬಾರದ ಸಿಬ್ಬಂದಿಗೆ ತರಾಟೆ ತೆಗೆದುಕೊಂಡಿದ್ದು ಆಡಳಿತ ಯಂತ್ರ ಚುರುಕುಗೊಳಿಸಲು ಪ್ರಯತ್ನ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಸಮಯಕ್ಕೆ ಸರಿಯಾಗಿ ಬರದಿದ್ದರೆ ಅಂತಹ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿಯೂ ನೂತನ ಸಿಎಂ ಬಿಎಸ್‌ವೈ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಇದ್ದಕ್ಕಿದ್ದಂತೆ ಕಚೇರಿಗೆ ಭೇಟಿ ನೀಡುವ ಮೂಲಕ ಅಲ್ಲಿನ ಸಿಬ್ಬಂದಿಗೆ ಶಾಕ್ ನೀಡಿದ್ದಾರೆ.
ರಾಜ್ಯ ರಾಜಕೀಯದಲ್ಲಿ ನಡೆದ ಕ್ಷಿಪ್ರ ಬೆಳವಣಿಗೆ ಬಳಿಕ ಸಮ್ಮಿಶ್ರ ಸರಕಾರ ಪತನಗೊಂಡಿತ್ತು. ನಂತರ ಜುಲೈ 26ರಂದು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಯಡಿಯೂರಪ್ಪ ಜುಲೈ 29ರಂದು ವಿಶ್ವಾಸಮತವನ್ನೂ ಗೆದ್ದರು. ಆಗಸ್ಟ್ 5 ರ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ತಿಳಿದುಬಂದಿದ್ದೂ, ಅದಕ್ಕೂ ಮುನ್ನವೇ ನೂತನ ಸಿಎಂ ಯಡಿಯೂರಪ್ಪ ಆಡಳಿತ ಯಂತ್ರಕ್ಕೆ ಬಿಸಿ ಮುಟ್ಟಿಸುವ ಯತ್ನ ಮಾಡಿದ್ದಾರೆ.