ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಚುನಾವಣೆಯಲ್ಲಿ ಮತ್ತೆ ಮುಖಾಮುಖಿಯಾಗ್ತಾರಾ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ.
ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ ನಾಯಕರು ಸುಮಲತಾ ಅವರನ್ನು ರಾಜ್ಯ ರಾಜಕಾರಣಕ್ಕೆ ತರಲಿದ್ದಾರೆ. ಈ ಮೂಲಕ ಸಂಖ್ಯಾಬಲ ಹೆಚ್ಚಿಸಿಕೊಳ್ಳಲು ಭಾರೀ ಪ್ಲಾನ್ ರೂಪಿಸಲಾಗಿದೆ. ವಿಧಾನಸಭಾ ಉಪ ಚುನಾವಣೆಯಲ್ಲಿ ನಿಖಿಲ್ ಅವರು ಸ್ಪರ್ಧಿಸುವುದು ಖಚಿತವಾದರೆ ಸುಮಲತಾ ಅವರನ್ನು ಪ್ರತಿಸ್ಪರ್ಧಿಯಾಗಿ ನಿಲ್ಲಿಸಲು ಬಿಜೆಪಿ ಸಿದ್ಧತೆ ನಡೆಸಿದೆ ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ.
ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ಕ್ಷೇತ್ರದ ನಾರಾಯಣಗೌಡ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಹೀಗಾಗಿ ಈ ಕ್ಷೇತ್ರಕ್ಕೆ ನಡೆಯಲಿರುವ ಉಪಚುನವಾವಣೆಯಲ್ಲಿ ನಿಖಿಲ್ ಅವರಿಗೆ ಅವಕಾಶ ನೀಡಬೇಕು ಎಂಬ ಕೂಗು ಜೆಡಿಎಸ್ನಲ್ಲಿ ಕೇಳಿಬಂದಿದೆ. ಹೀಗಾಗಿ ನಿಖಿಲ್ ಸ್ಪರ್ಧೆ ಮಾಡಿ ಗೆದ್ದರೆ ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಕನಸು ಕಂಡಿರುವ ಬಿಜೆಪಿಗೆ ಭಾರೀ ಹಿನ್ನಡೆಯಾಗಲಿದೆ. ಹೀಗಾಗಿ ಸುಮಲತಾ ಅವರಿಗೆ ಸಚಿವ ಸ್ಥಾನ ನೀಡುವುದಾಗಿ ಹೇಳಿ, ಕೆ.ಆರ್. ಪೇಟೆಯಿಂದ ಸ್ಪರ್ಧೆ ಮಾಡುವಂತೆ ಬಿಜೆಪಿ ಒತ್ತಾಯಿಸಲಿದೆ.
ಮಂಡ್ಯ ಜಿಲ್ಲೆಯಲ್ಲಿ ಇದುವರೆಗೂ ಒಂದೇ ಒಂದು ಶಾಸಕ ಸ್ಥಾನದಲ್ಲಿ ಬಿಜೆಪಿ ಗೆಲುವು ಸಾಧಿಸಿಲ್ಲ. ಈ ಬಾರಿ ಹೇಗಾದರೂ ಮಾಡಿ ಮಂಡ್ಯದಲ್ಲಿ ಖಾತೆ ತೆರೆಯಲು ಬಿಜೆಪಿ ಹರಸಾಹಸ ಪಡುತ್ತಿದೆ. ಈ ನಿಟ್ಟಿನಲ್ಲಿ ಕೆಆರ್ ಪೇಟೆಯಲ್ಲಿ ಬಿಜೆಪಿ ಗೆಲುವು ಸಾಧಿಸಿ ಸರ್ಕಾರವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳಲು ಪ್ಲಾನ್ ರೂಪಿಸುತ್ತಿದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಸಂಸದೆ ಸುಮಲತಾ ಅವರು ಕೆಆರ್ ಪೇಟೆ ಕ್ಷೇತ್ರವೊಂದರಲ್ಲೇ ಸುಮಾರು 15 ಸಾವಿರಕ್ಕೂ ಹೆಚ್ಚಿನ ಲೀಡ್ ಪಡೆದಿದ್ದರು.
ಹೀಗಾಗಿ ಸುಮಲತಾ ಅವರನ್ನು ಉಪ ಚುನಾವಣೆಗೆ ನಿಲ್ಲಿಸಲು ಮಾಸ್ಟರ್ ಪ್ಲಾನ್ ರೂಪಿಸಲಾಗಿದೆ. ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಕೆಆರ್ ಪೇಟೆ ಕ್ಷೇತ್ರದ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.