ಉನ್ನತ ಅಧಿಕಾರಿಗಳ ಸಭೆ ನಡೆಸಿದ ಸಿಎಂ ಯಡಿಯೂರಪ್ಪ

ಬೆಂಗಳೂರು,ಆ.2- ಟ್ಯಾಂಕರ್‍ಗಳ ಮೂಲಕ ಕುಡಿಯುವ ನೀರು ಪೂರೈಕೆ, ತಕ್ಷಣವೇ ಗೋ ಶಾಲೆ ಆರಂಭಿಸುವುದು , ಕಡ್ಡಾಯವಾಗಿ ಗ್ರಾಮಗಳಿಗೆ ಭೇಟಿ, ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸಮರ್ಪಕವಾಗಿ ಒದಗಿಸುವುದು ಸೇರಿದಂತೆ ಬರಪೀಡಿತ ತಾಲ್ಲೂಕುಗಳಲ್ಲಿ ಸಮರೋಪಾದಿಯಾಗಿ ಕಾಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಬರಗಾಲವನ್ನು ಸಮರ್ಪಕವಾಗಿ ಎದುರಿಸಲು ಅಧಿಕಾರಿಗಳು ಮೈ ಚಳಿ ಬಿಟ್ಟು ಕಾರ್ಯ ನಿರ್ವಹಿಸಬೇಕು, ಜಿಲ್ಲಾಧಿಕಾರಿಗಳ ಖಜಾನೆಯಲ್ಲಿರುವ ಹಣವನ್ನು ಬಳಸಿಕೊಂಡು ಜನರ ಸಂಕಷ್ಟಗಳಿಗೆ ಸ್ಪಂದಿಸಬೇಕು. ಉದಾಸೀನ ತೋರಿಸಿದರೆ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವುದಾಗಿ ಎಚ್ಚರಿಸಿದರು.

ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಇಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಕಾರ್ಯ ನಿರ್ವಹಣಾಧಿಕಾರಿಗಳು(ಸಿಇಒ), ಪ್ರಾದೇಶಿಕ ಆಯುಕ್ತರು ಸೇರಿದಂತೆ ಉನ್ನತ ಅಧಿಕಾರಿಗಳ ಸಭೆ ನಡೆಸಿ ಬರಗಾಲ ನಿರ್ವಹಣೆ ಕುರಿತಂತೆ ಅಧಿಕಾರಿಗಳಿಂದ ಅವರು ಮಾಹಿತಿ ಪಡೆದರು.

ಬೆಳಗ್ಗೆಯಿಂದ ಸಂಜೆಯವರೆಗೂ ನಡೆದ ಸಭೆಯಲ್ಲಿ ಜಿಲ್ಲಾವಾರು ಮಾಹಿತಿ ಪಡೆದ ಯಡಿಯೂರಪ್ಪ , ಆಗಸ್ಟ್ ತಿಂಗಳು ಸಮೀಪಿಸಿದರೂ ಸುಮಾರು 98ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ವಾಡಿಕೆಯಂತೆ ಮಳೆಯಾಗಿಲ್ಲ. ಗಂಭೀರ ಪರಿಸ್ಥಿತಿ ಇರುವ ತಾಲ್ಲೂಕುಗಳಲ್ಲಿ ಕೂಡಲೇ ಸರ್ಕಾರಿ ಹಾಗೂ ಖಾಸಗಿ ಟ್ಯಾಂಕರ್‍ಗಳ ಮೂಲಕ ನೀರನ್ನು ಖರೀದಿಸಿ ಪೂರೈಕೆ ಮಾಡುವಂತೆ ಸೂಚಿಸಿದ್ದಾರೆ.

ಖಾಸಗಿಯವರಿಂದ ಎಷ್ಟೇ ಹಣ ಖರ್ಚಾದರೂ ಸರಿ ಖರೀದಿ ಮಾಡಿ ಪ್ರತಿಯೊಬ್ಬರಿಗೂ ನೀರು ಒದಗಿಸಬೇಕು. ಹಣದ ಬಗ್ಗೆ ಯಾರೊಬ್ಬರೂ ಚಿಂತೆ ಮಾಡಬೇಕಾದ ಅಗತ್ಯವಿಲ್ಲ. ನಿಮ್ಮ ನಿಮ್ಮ ಖಜಾನೆಯಲ್ಲಿರುವ ಹಣವನ್ನು ಖರ್ಚು ಮಾಡಿಕೊಳ್ಳಿ. ಅಗತ್ಯವಿರುವ ಕಡೆ ಕೂಡಲೇ ಹಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ಕೊಟ್ಟರು.

ಸಮಸ್ಯೆ ಇರುವ ಗ್ರಾಮಗಳಲ್ಲಿ ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಅಗತ್ಯ ತೀರ್ಮಾನ ಕೈಗೊಳ್ಳಲು ಅಧಿಕಾರ ನೀಡಲಾಗಿದೆ. ಕುಡಿಯುವ ನೀರು ಸರಬರಾಜು ಮತ್ತು ಮೇವಿನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಎಚ್ಚರವಹಿಸಬೇಕೆಂದು ತಾಕೀತು ಮಾಡಿದರು.

ಕುಡಿಯುವ ನೀರು ಸರಬರಾಜು ಮಾಡುವ ಟ್ಯಾಂಕರ್ ಗಳಿಗೆ ಜುಲೈಗಿಂಗಳ ತಿಂಗಳ ವರೆಗಿನ ಬಾಕಿ ಬಿಲ್ ಹಣವನ್ನು ವಾರದೊಳಗೆ ಪಾವತಿಸಬೇಕು. ಇನ್ನು ಮುಂದೆ ಪ್ರತಿ 15 ದಿನಗಳಿಗೊಮ್ಮೆ ಬಿಲ್ ಪಾವತಿಸಬೇಕು. ಅವಧಿ ಮುಗಿದ ನಂತರ ಬಿಲ್ ಸಲ್ಲಿಸಿದರೆ ಆಯಾ ಪಿಡಿಒ, ಇಓಗಳೇ ಹೊಣೆಗಾರರು. ಅವರ ವಿರುದ್ಧ ಕ್ರಮ ಕೈಗೊಳುವಂತೆ ಸೂಚಿಸಿದರು.

ಕುಡಿಯುವ ನೀರಿನ ಟ್ಯಾಂಕರ್‍ಗಳಿಗೆ ಜಿಪಿಎಸ್ ಅಳವಡಿಕೆ ಕಾರ್ಯವನ್ನು ಕೆಲವು ಜಿಲ್ಲೆಗಳಲ್ಲಿ ಪೂರ್ಣಗೊಳಿಸಿಲ್ಲ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಜಿ.ಪಿ.ಎಸ್ ಅಳವಡಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು, ಹಣ ಸೋರಿಕೆಯಾಗುವುದನ್ನು ತಡೆಗಟ್ಟಬೇಕು ಎಂದರು.

ಹೊಸದಾಗಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದ ಗ್ರಾಮಗಳಿಗೆ 24 ಗಂಟೆಯೊಳಗೆ ಟ್ಯಾಂಕರ್ ಮೂಲಕ ನೀರು ಸರಬರಾಜಿಗೆ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಎಲ್ಲಾ ಜಿಲ್ಲೆಗಳಲ್ಲಿ ವಾರದ ಏಳು ದಿನ, ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುವ ಸಹಾಯವಾಣಿಗಳನ್ನು ತೆರೆಯಲಾಗಿದ್ದು, ಇವುಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವಂತೆ ಕ್ರಮಕೈಗೊಳ್ಳು ಮುಖ್ಯಮಂತ್ರಿಗಳು ತಿಳಿಸಿದರು.

ಪ್ರತಿ ವ್ಯಕ್ತಿಗೆ ಕನಿಷ್ಠ 40 ಎಲ್‍ಪಿಸಿಡಿ ನೀರು ಒದಗಿಸಲು ಅಧಿಕಾರಿಗಳು ಕ್ರಮವಹಿಸಬೇಕು. ರಾಜ್ಯದಲ್ಲಿ ತಲೆದೋರಿರುವ ಬರಪರಿಸ್ಥಿತಿಯನ್ನು ನಿಭಾಯಿಸಲು ಅಧಿಕಾರಿಗಳು ಪ್ರಾಮಾಣಿಕವಾಗಿ ಪ್ರಯತ್ನಿಸಿ ಹೆಚ್ಚಿನ ಜವಾಬ್ದಾರಿಯನ್ನು ವಹಿಸಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದರು.

ಗೋ ಶಾಲೆ ಆರಂಭಿಸಿ:
ಬರಪೀಡಿತ ತಾಲ್ಲೂಕುಗಳಲ್ಲಿ ಮೇವು, ನೀರಿಲ್ಲದೆ ಜಾನುವಾರುಗಳು ಸಂಕಷ್ಟಕ್ಕೆ ಸಿಲುಕಿರುವ ಬಗ್ಗೆ ಪ್ರಸ್ತಾಪಿಸಿದ ಯಡಿಯೂರಪ್ಪ ಎಲ್ಲೆಲ್ಲಿ ಅಗತ್ಯವಿದೆಯೋ ಅಂತಹ ಕಡೆ ತಕ್ಷಣವೇ ಗೋಶಾಲೆಗಳನ್ನು ಆರಂಭಿಸಬೇಕು. ಯಾವುದೇ ಕಾರಣಕ್ಕೂ ಜಾನುವಾರುಗಳು ಮೇವು ಮತ್ತು ನೀರಿನ ಕೊರತೆ ಉಂಟಾಗದಂತೆ ನಿಗಾವಹಿಸಬೇಕೆಂದು ಸೂಚಿಸಿದರು.

ತುರ್ತು ಕ್ರಮಕ್ಕೆ ಸೂಚನೆ:
ರಾಜ್ಯದ ಯಾವ ಭಾಗಗಳಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಅಗತ್ಯವಿದೆಯೋ ಅಂತಹ ಕಡೆ ಸಮಸ್ಯೆ ಉಂಟಾಗದಂತೆ ಸಮರ್ಪಕವಾಗಿ ಪೂರೈಕೆ ಮಾಡಬೇಕು.

ಕೇಂದ್ರ ಸರ್ಕಾರ ಯೂರಿಯಾ ಗೊಬ್ಬರವನ್ನು ನಿರೀಕ್ಷೆಗೂ ಮೀರಿ ಪೂರೈಸಿದೆ, ರಸಗೊಬ್ಬರ ಮತ್ತು ಬಿತ್ತನೆ ಬೀಜಗಳಲ್ಲಿ ವ್ಯತ್ಯಾಸವಾಗದಂತೆ ಕ್ರಮ ಕೈಗೊಳ್ಳಬೇಕು. ಪಿಡಿಒ, ಗ್ರಾಮ ಲೆಕ್ಕಿಗರು, ಶಿರಸ್ತೇದಾರ್, ತಹಸೀಲ್ದಾರ್, ಸಹಾಯಕ ಆಯುಕ್ತರು ಸೇರಿದಂತೆ ಪ್ರತಿಯೊಬ್ಬರು ಆಲಸ್ಯ ಬಿಟ್ಟು ರೈತರ ಸಂಕಷ್ಟಗಳಿಗೆ ಸ್ಪಂದಿಸಬೇಕು. ಸಾಧ್ಯವಾದರೆ ಮುಂದಿನ ತಿಂಗಳು ಪುನಃ ಸಭೆ ಕರೆಯುವುದಾಗಿ ಯಡಿಯೂರಪ್ಪ ಹೇಳಿದರು.

ಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎನ್.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಸಲಹೆಗಾರ ಲಕ್ಷ್ಮಿನಾರಾಯಣ ಸೇರಿದಂತೆ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ