ಸಂಸತ್ತಿನಲ್ಲಿ ತ್ರಿವಳಿ ತಲಾಖ್ ಮಸೂದೆಯ ಜಾರಿ-ಒಂದು ಐತಿಹಾಸಿಕ ನಿರ್ಧಾರ-ಬಿಜೆಪಿ ಮುಖಂಡ ಎನ್.ರವಿಕುಮಾರ್

ಬೆಂಗಳೂರು,ಆ.2- ಕಾಂಗ್ರೆಸ್ ಹಾಗೂ ಜೆಡಿಎಸ್‍ನಿಂದ ಅನರ್ಹಗೊಂಡಿರುವ ಶಾಸಕರು ಬಿಜೆಪಿಗೆ ಸೇರ್ಪಡೆಯಾಗುವುದಾದರೆ ಕಾರ್ಯಕರ್ತರ ಅಭಿಪ್ರಾಯವನ್ನು ಪರಿಗಣಿಸಿಯೇ ಪಕ್ಷ ತೀರ್ಮಾನಿಸಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಹೇಳಿದ್ದಾರೆ.

ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಅನರ್ಹಗೊಂಡಿರುವ 17 ಮಂದಿ ಶಾಸಕರು ಎಲ್ಲಿಯೂ ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಹೇಳಲಿಲ್ಲ.

ಒಂದು ವೇಳೆ ನಮ್ಮ ಪಕ್ಷದ ತತ್ವ, ಸಿದ್ದಾಂತ ಒಪ್ಪಿಕೊಂಡು ಬರುವುದಾದರೆ ಸ್ಥಳೀಯ ಕಾರ್ಯಕರ್ತರ ಅಭಿಪ್ರಾಯವನ್ನು ಪಡೆಯಲಾಗುವುದು. ಈ ವಿಷಯದಲ್ಲಿ ನಾವು ಆತುರದ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಅನರ್ಹಗೊಂಡಿರುವ ಶಾಸಕರಿಗೂ ಬಿಜೆಪಿಗೂ ಯಾವುದೇ ರೀತಿಯ ಸಂಬಂಧವಿಲ್ಲ. ದೋಸ್ತಿ ಸರ್ಕಾರದಲ್ಲಿ ಉಂಟಾದ ಭಿನ್ನಮತದಿಂದಾಗಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸ್ಪೀಕರ್ ಅವರು ಸದಸ್ಯತ್ವವನ್ನು ಅನರ್ಹಗೊಳಿಸಿದ್ದಾರೆ. ನ್ಯಾಯಾಲಯದಲ್ಲಿ ಅನರ್ಹರಿಗೆ ಜಯ ಸಿಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಜಿಡ್ಡುಗಟ್ಟಿದ್ದ ಆಡಳಿತ ಯಂತ್ರಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪನವರು ಚುರುಕು ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ. ಮೈತ್ರಿ ಸರ್ಕಾರದ ಇಡೀ ಸಂಪುಟ ಸಭೆ ಮಾಡದಿರುವ ಕೆಲಸವನ್ನು ಬಿಎಸ್‍ವೈ ಒಬ್ಬರೇ ಮಾಡುತ್ತಿದ್ದಾರೆ ಎಂದು ಪ್ರಶಂಸಿಸಿದರು.

ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದರೂ ಹೈಕಮಾಂಡ್ ಯಾರನ್ನು ತೆಗೆದುಕೊಳ್ಳಬೇಕು ಎಂಬುದನ್ನು ತೀರ್ಮಾನಿಸುತ್ತದೆ. ಸಂಪುಟ ವಿಸ್ತರಣೆಯಲ್ಲಿ ಕೇಂದ್ರ ನಾಯಕರು ಯಡಿಯೂರಪ್ಪನವರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಹಸಿರು ನಿಶಾನೆ ನೀಡಲಿದ್ದಾರೆ ಎಂದರು.

ಈ ಬಾರಿ ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ಸದಸ್ಯತ್ವ ಅಭಿಯಾನ ನೋಂದಣಿಗೆ ಎಲ್ಲೆಡೆ ಉತ್ತಮ ಅಭಿಪ್ರಾಯ ವ್ಯಕ್ತವಾಗಿದೆ. ನಮ್ಮ ನಿರೀಕ್ಷೆಗೂ ಮೀರಿದ ನೋಂದಣಿಯಾಗಿದೆ. ಸುಮಾರು ಐದು ಲಕ್ಷ ಮುಸ್ಲಿಮರಿಗೆ ಬಿಜೆಪಿ ಸದಸ್ಯತ್ವ ನೀಡುವ ಗುರಿ ಇಟ್ಟುಕೊಂಡಿದ್ದೇವೆ ಎಂದು ಹೇಳಿದರು.

ಇದುವರೆಗೂ ಕಾಂಗ್ರೆಸ್ ಅಲ್ಪಸಂಖ್ಯಾತರನ್ನು ಕೇವಲ ವೋಟ್ ಬ್ಯಾಂಕಿಗೆ ಸೀಮಿತಗೊಳಿಸಿತ್ತು. ಇತ್ತೀಚಿನ ದಿನಗಳಲ್ಲಿ ಅಲ್ಪಸಂಖ್ಯಾತರು ಬಿಜೆಪಿ ಮೇಲೆ ವಿಶೇಷವಾದ ಒಲವು ತೋರುತ್ತಿದ್ದಾರೆ. ಸಂಸತ್ತಿನಲ್ಲಿ ತ್ರಿವಳಿ ತಲಾಖ್ ಮಸೂದೆಯನ್ನು ಜಾರಿ ಮಾಡಿದ್ದು ಒಂದು ಐತಿಹಾಸಿಕ ನಿರ್ಧಾರ. ಈವರೆಗೂ ಅಲ್ಪಸಂಖ್ಯಾತರು ನಮ್ಮಿಂದ ದೂರ ಇದ್ದದ್ದು ನಿಜ. ಈಗ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಸದಸ್ಯತ್ವ ನೋಂದಣಿ ಅಭಿಯಾನ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ದೇಶಾದ್ಯಂತ ಸದಸ್ಯತ್ವ ಅಭಿಯಾನ ಸಮರೋಪಾದಿಯಲ್ಲಿ ನಡೆಯುತ್ತಿದೆ.ಸುಮರು 50 ಲಕ್ಷ ಹೊಸ ಸದಸ್ಯರನ್ನು ನೋಂದಣಿ ಮಾಡುವ ಗುರಿ ಇಟ್ಟುಕೊಂಡಿದ್ದೇವೆ. ಇದೇ 5ರಂದು ವಿವಿಧ ಮೋರ್ಚಾಗಳ ಸಭೆ ಕರೆಯಲಾಗಿದೆ. ಇದರಲ್ಲಿ ಶಾಸಕರು, ಸಂಸದರು, 8 ಮೋರ್ಚಾಗಳ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಇದೇ 8ರಂದು ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್‍ಚೌವ್ಹಾಣ್ ಬೆಂಗಳೂರಿಗೆ ಆಗಮಿಸಲಿದ್ದಾರೆ. ದೇಶದಲ್ಲೇ ಕರ್ನಾಟಕ ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ಎರಡನೇ ಸ್ಥಾನದಲ್ಲಿದೆ. 8787 ಪೂರ್ಣಾವಧಿ ಕಾರ್ಯಕರ್ತರು ಕೆಲಸ ನಿರ್ವಹಿಸುತ್ತಿದ್ದಾರೆ. ವರಿಷ್ಠರು ನಮಗೆ ನೀಡಿರುವ ಗುರಿಯನ್ನು ತಲುಪಲಿದ್ದೇವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಕಾರ್ಯದರ್ಶಿ ಜಗದೀಶ್ ಹಿರೇಮನೆ, ಸಹ ವಕ್ತಾರ ಎ.ಎಚ್.ಆನಂದ್, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ತಮ್ಮೇಶ್‍ಗೌಡ, ಬಸವರಾಜ ಯಂಕಂಚಿ, ಕಾರ್ಯದರ್ಶಿ ಭಾರತಿ ಮುಗದುಮ್ ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ