ಮಂಡ್ಯ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಹೆಸರು ಇಡೀ ದೇಶದ ಗಮನ ಸೆಳೆದಿತ್ತು. ಆಗ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ತಮ್ಮ ಮಗನ ರಾಜಕೀಯ ಭವಿಷ್ಯಕ್ಕೆ ಅಡಿಪಾಯ ಹಾಕಲು ಮಂಡ್ಯವನ್ನೇ ಆಯ್ಕೆ ಮಾಡಿಕೊಂಡಿದ್ದು ಇದಕ್ಕೆ ಕಾರಣ. ಆದರೆ, ನಿಖಿಲ್ ಕುಮಾರಸ್ವಾಮಿ ವಿರುದ್ಧ ಬಿಜೆಪಿ ಬೆಂಬಲಿತ ಸುಮಲತಾ ಅಂಬರೀಶ್ ಭರ್ಜರಿ ಜಯ ಸಾಧಿಸಿದ್ದು ಈಗ ಇತಿಹಾಸ.
ಇದೀಗ ಮತ್ತೆ ಮಂಡ್ಯದಲ್ಲಿ ಚುನಾವಣಾ ಕಾವು ಶುರುವಾಗಿದೆ. ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ 17 ಶಾಸಕರ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಬೇಕಿದೆ. ಈ ಬಾರಿ ಮಂಡ್ಯದ ಕೆ.ಆರ್ ಪೇಟೆ ಉಪಚುನಾವಣೆಯಲ್ಲಿ ಮತ್ತೆ ನಿಖಿಲ್ ಕುಮಾರಸ್ವಾಮಿಯನ್ನು ಅದೃಷ್ಟ ಪರೀಕ್ಷೆಗೆ ಒಡ್ಡಲು ಜೆಡಿಎಸ್ ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ಬಾರಿ ಹಾಲಿ ಮುಖ್ಯಮಂತ್ರಿ ಮತ್ತು ಮಾಜಿ ಮುಖ್ಯಮಂತ್ರಿಗಳ ಮಕ್ಕಳು ಕೆ.ಆರ್. ಪೇಟೆಯಲ್ಲಿ ಮುಖಾಮುಖಿಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.
ಕೆ.ಆರ್. ಪೇಟೆ ವಿಧಾನಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಉಪಚುನಾವಣೆಗೆ ಸ್ಪರ್ಧಿಸಿದರೆ ಬಿಜೆಪಿಯಿಂದ ಸಿಎಂ ಬಿ.ಎಸ್. ಯಡಿಯೂರಪ್ಪನವರ ಮಗ ವಿಜಯೇಂದ್ರ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಮತ್ತು ನಿಖಿಲ್ ಕುಮಾರಸ್ವಾಮಿ ನಡುವಿನ ಸ್ಪರ್ಧೆ ಇಡೀ ದೇಶದ ಗಮನ ಸೆಳೆದಿತ್ತು. ಅದೇರೀತಿ ಇದೀಗ ನಿಖಿಲ್ ವಿರುದ್ಧ ವಿಜಯೇಂದ್ರ ಸ್ಪರ್ಧೆಗಿಳಿದರೆ ಮತ್ತೊಮ್ಮೆ ಮಂಡ್ಯ ದೇಶದ ಗಮನ ಸೆಳೆಯುವುದರಲ್ಲಿ ಅನುಮಾನವಿಲ್ಲ. ಹಾಗೇನಾದರೂ ಆದರೆ ಈ ಬಾರಿಯ ಉಪಚುನಾವಣೆಯಲ್ಲಿ ಮಂಡ್ಯವೇ ಹೈಲೈಟ್ ಆಗಲಿದೆ.
ಇನ್ನು, ಕೆ.ಆರ್. ಪೇಟೆಯಿಂದ ತಮ್ಮ ಮಗ ಸ್ಪರ್ಧಿಸುವ ಬಗ್ಗೆ ಚರ್ಚೆಗಳು ಆರಂಭವಾಗಿರುವ ಬೆನ್ನಲ್ಲೇ ಇಂದು ಹೆಚ್.ಡಿ. ಕುಮಾರಸ್ವಾಮಿ ಕೆ.ಆರ್. ಪೇಟೆಗೆ ಪ್ರಯಾಣ ಬೆಳೆಸಲಿದ್ದಾರೆ. ಇಂದು ಸಂಜೆ 4 ಗಂಟೆಗೆ ಇಲ್ಲಿನ ಯಶಸ್ವಿನಿ ಸಮುದಾಯದಲ್ಲಿ ಕುಮಾರಸ್ವಾಮಿ ಸಭೆ ನಡೆಸಲಿದ್ದಾರೆ. ಜೆಡಿಎಸ್ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಅವರ ಅಭಿಪ್ರಾಯಗಳನ್ನು ಸಂಗ್ರಹಿಸಲಿದ್ದಾರೆ. ಈ ಮೂಲಕ ಲೋಕಸಭೆಯಲ್ಲಿ ಸೋತ ಮಗನನ್ನು ವಿಧಾನಸಭೆಗೆ ಆರಿಸಿ ಕಳುಹಿಸಲು ಮಾಜಿ ಸಿಎಂ ಕುಮಾರಸ್ವಾಮಿ ಯೋಚನೆ ಮಾಡಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕಾರ್ಯಕ್ಷೇತ್ರ ಶಿಕಾರಿಪುರವಾದರೂ ಅವರ ಹುಟ್ಟೂರು ಕೆ.ಆರ್. ಪೇಟೆಯ ಬೂಕನಕೆರೆ. ಹೀಗಾಗಿ, ತಮ್ಮ ಹುಟ್ಟೂರಿನಿಂದಲೇ ಮಗ ವಿಜಯೇಂದ್ರನನ್ನು ಕಣಕ್ಕಿಳಿಸಲು ಬಿಎಸ್ವೈ ಚಿಂತಿಸಿದ್ದಾರೆ. ತವರಿನ ಅಭಿಮಾನವನ್ನು ಅಸ್ತ್ರವಾಗಿಟ್ಟುಕೊಂಡು ನಿಖಿಲ್ ಕುಮಾರಸ್ವಾಮಿಯನ್ನು ಮಣಿಸಲು ಸಿಎಂ ತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಸದ್ಯದಲ್ಲೇ ಅಭ್ಯರ್ಥಿಗಳನ್ನು ಎರಡೂ ಪಕ್ಷಗಳು ಅಂತಿಮಗೊಳಿಸಲಿವೆ.