ಬೆಂಗಳೂರು, ಆ.3- ಚುನಾವಣೆಗೆ ಸ್ಪರ್ಧಿಸುವ ವೇಳೆ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ನೀಡಿರುವ ಶಾಸಕ ಜಮೀರ್ ಅಹಮ್ಮದ್ ಖಾನ್ ಅವರ ಶಾಸಕ ಸ್ಥಾನವನ್ನು ಅನರ್ಹಗೊಳಿಸಬೇಕೆಂದು ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ಅವರು ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.
2018ರ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಜಮೀರ್ ಅಹಮ್ಮದ್ಖಾನ್ ಅವರು ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ತಾವು ಚಲುವರಾಯಸ್ವಾಮಿ ಅವರಿಂದ 42 ಲಕ್ಷ ರೂ.ಗಳನ್ನು ಸಾಲ ಪಡೆದಿರುವುದಾಗಿ ಘೋಷಿಸಿಕೊಂಡಿದ್ದಾರೆ.
ಆದರೆ, ನಾಗಮಂಗಲ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಚಲುವರಾಯಸ್ವಾಮಿ ಅವರು ತಮ್ಮ ಪ್ರಮಾಣ ಪತ್ರದಲ್ಲಿ ಜಮೀರ್ ಅವರಿಗೆ ಸಾಲ ನೀಡಿರುವ ಬಗ್ಗೆ ಯಾವುದೇ ಘೋಷಣೆ ಮಾಡಿಲ್ಲ. ಇದನ್ನು ಗಮನಿಸಿದರೆ ಜಮೀರ್ ಅಹಮ್ಮದ್ಖಾನ್ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ನೀಡಿರುವುದು ಸ್ಪಷ್ಟವಾಗುತ್ತದೆ.
ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿರುವ ಜಮೀರ್ ಅಹಮ್ಮದ್ಖಾನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದೇನೆ ಹಾಗೂ ಈ ಪ್ರಕರಣವನ್ನು ಉಚ್ಛ ನ್ಯಾಯಾಲಯದಲ್ಲಿ ದಾಖಲಿಸಲು ತೀರ್ಮಾನಿಸಿದ್ದೇನೆ ಎಂದು ಎನ್.ಆರ್.ರಮೇಶ್ ಸುದ್ದಿಗಾರರಿಗೆ ತಿಳಿಸಿದರು.