ಬೆಂಗಳೂರು,ಆ.5- ಲೋಕಸಭೆ ಚುನಾವಣೆಯಲ್ಲಿ ಹಿನ್ನಡೆ, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಪತನದ ನಂತರ ಪಕ್ಷ ಸಂಘಟನೆಗೆ ಒತ್ತು ನೀಡಿರುವ ಜೆಡಿಎಸ್ ಸರಣಿ ಸಭೆಗಳನ್ನು ನಡೆಸುತ್ತಿದೆ.
ಜೆಪಿಭವನದಲ್ಲಿ ನಾಳೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಕಾರ್ಯಕರ್ತರ ಸಭೆಯನ್ನು ನಡೆಸಲಾಗತ್ತದೆ.
ಮೈತ್ರಿ ಸರ್ಕಾರ ಪತನದ ನಂತರ ರಾಜಕೀಯದಲ್ಲಿ ಆಗಿರುವ ಬೆಳವಣಿಗೆಗಳು, ಪಕ್ಷ ಸಂಘಟನೆ, ಮುಂಬರುವ ಸ್ಥಳೀಯ ಸಂಸ್ಥೆ ಹಾಗೂ ಉಪಚುನಾವಣೆಗಳ ಸಿದ್ಧತೆಗಳ ಬಗ್ಗೆ ಸಮಾಲೋಚನೆ ನಡೆಸಲಾಗುತ್ತದೆ ಎಂದು ಜೆಡಿಎಸ್ ಪಕ್ಷದ ಮೂಲಗಳು ತಿಳಿಸಿವೆ.
ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮಾವೇಶವನ್ನು ನಡೆಸುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ. ಈಗಾಗಲೇ ಮಹಿಳಾ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ, ಅಲ್ಪಸಂಖ್ಯಾತ ಮುಖಂಡರ ಸಭೆ, ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಸಭೆಯನ್ನು ದೇವೇಗೌಡರ ನಡೆಸಿದ್ದಾರೆ.
ಸಕ್ರೀಯ ಕಾರ್ಯಕರ್ತರ ಸಭೆ: ಆ.7ರಂದು ಅರಮನೆ ಮೈದಾನದ ಶೀಷ ಮಹಲ್ನಲ್ಲಿ ಜೆಡಿಎಸ್ ಸಕ್ರಿಯ ಕಾರ್ಯಕರ್ತರ ಸಮಾವೇಶವನ್ನು ನಡೆಸಲು ಸಿದ್ದತೆ ಮಾಡಲಾಗಿದೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಎಲ್ಲ ಪದಾಧಿಕಾರಿಗಳು ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರು, ಮಾಜಿ ಸಚಿವರು, ವಿಧಾನಸಭೆ, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು, ಮಾಜಿ ಸಂಸದರು, 2018ರ ವಿಧಾನಸಭೆ ಹಾಗೂ 2019ರ ಲೋಕಸಭೆ ಚುನಾವಣೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಸೇರಿದಂತೆ ನಿಷ್ಠಾವಂತ ಕಾರ್ಯಕರ್ತರಿಗೆ ಆಹ್ವಾನ ನೀಡಿದ್ದಾರೆ.
ಪಕ್ಷಕ್ಕೆ ನಿಷ್ಠರಾಗಿರುವ ಮತ್ತು ಜೆಡಿಎಸ್ ಪಕ್ಷವನ್ನು ಕಟ್ಟೇ ಕಟ್ಟುತ್ತೇವೆ ಎಂಬ ಹಠ ತೊಟ್ಟಿರುವ ಕಾರ್ಯಕರ್ತರೊಂದಿಗೆ ಸಮಾಲೋಚಿಸಿ ಮುಂದಿನ ಹೋರಾಟದ ರೂಪುರೇಷೆಗಳನ್ನು ತಯಾರಿಸುವ ಉದ್ದೇಶದಿಂದ ಅರಮನೆ ಮೈದಾನದಲ್ಲಿ ನಿಷ್ಠಾವಂತ ಕಾರ್ಯಕರ್ತರ ಸಮಾವೇಶ ನಡೆಸಲಾಗುತ್ತಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಬಹಿರಂಗ ಪತ್ರವನ್ನು ಬರೆದಿದ್ದರು.
ಕಳೆದ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ದೊಡ್ಡ ಆಘಾತ ಉಂಟಾಗಿದೆ. ಇದಕ್ಕೆ ಕಾರಣ ರಾಜಕೀಯ ಬೆಳೆವಣಿಗೆ ತೆಗೆದುಕೊಂಡ ತಿರುವುಗಳು, ಕೆಲವರು ಪಕ್ಷಕ್ಕೆ ಬಗೆದ ದ್ರೋಹ, ಕಾರ್ಯಕರ್ತರನ್ನು ಕಡೆಗಣಿಸಿದ ನಮ್ಮ ಪ್ರಮಾದಗಳಿಂದ ಚುನಾವಣೆಯಲ್ಲಿ ಹಿನ್ನಡೆಯಾಗಿದೆ.
ಪಕ್ಷ ಇಂದು ಸಂಕಷ್ಟದಲ್ಲಿದೆ.ಅದನ್ನು ಕಟ್ಟಿ ಬೆಳೆಸಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ.ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಜಾರಿಗೊಳಿಸಿದ ರೈತರ ಸಾಲಮನ್ನಾ, ಬಡವರ ಬಂಧು, ಋಣಮುಕ್ತ ಕಾಯ್ದೆಯಂತಹ ಪ್ರಮುಖ ಕಾರ್ಯಕ್ರಮಗಳು ಮಸಕಾಗುವಷ್ಟರಮಟ್ಟಿಗೆ ಅಸಯ್ಯ ರಾಜಕೀಯ ಬೆಳವಣಿಗೆಗಳಾಗಿವೆ ಎಂದು ಗೌಡರು ಪತ್ರದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.