ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಗಂಟೆಗೊಂದು ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಕಣಿವೆ ರಾಜ್ಯಕ್ಕೆ ಈಗಾಗಲೇ ಬಿಗಿ ಭದ್ರತೆ ಒದಗಿಸಲಾಗಿದೆ. ಈ ಮಧ್ಯೆ ಭಾನುವಾರ ತಡರಾತ್ರಿ ಒಮರ್ ಅಬ್ದುಲ್ಲಾ ಹಾಗೂ ಮೆಹಬೂಬಾ ಮುಫ್ತಿಯನ್ನು ವಶಕ್ಕೆ ಪಡೆದು ಗೃಹ ಬಂಧನದಲ್ಲಿ ಇಡಲಾಗಿದೆ. ಈ ನಡುವೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಇಂದು ನಡೆಯುತ್ತಿರುವ ಸಚಿವ ಸಂಪುಟ ಸಭೆ ಮಹತ್ವ ಪಡೆದುಕೊಂಡಿದೆ.
ಇನ್ನು ಈಗಾಗಲೇ ಜಮ್ಮು-ಕಾಶ್ಮೀರಕ್ಕೆ ತೆರಳಿದ್ದ ಪ್ರವಾಸಿಗರನ್ನು ವಾಪಸ್ ಕರೆಸಲಾಗಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆಗಸ್ಟ್ 15ರವರೆಗೆ ಇಂಟರ್ನೆಟ್ ಸೇವೆಯನ್ನು ಸಂಪೂರ್ಣವಾಗಿ ರದ್ದು ಮಾಡಲಾಗಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. ರಾಜಕೀಯ ತಜ್ಞರು ಪ್ರಮುಖವಾಗಿ ಎರಡು ಸಾಧ್ಯತೆಗಳನ್ನು ಅಂದಾಜಿಸಿದ್ದಾರೆ. ಒಂದು, ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಆರ್ಟಿಕಲ್ 370 ಮತ್ತು 35ಎ ಅನ್ನು ಸಂವಿಧಾನದಿಂದ ತೆಗೆದುಹಾಕಬಹುದು. ಎರಡು, ಜಮ್ಮು-ಕಾಶ್ಮೀರವನ್ನು ಮೂರು ಹೋಳಾಗಿ ವಿಭಜಿಸಬಹುದು.