ತುಂಗಭದ್ರಾ ಹೂಳಿನ ಸಮಸ್ಯೆ ಕುರಿತು ಲೋಕಸಭೆಯಲ್ಲಿ ಗಮನ ಸೆಳೆದ ಸಂಸದ ಸಂಗಣ್ಣ

ಕೊಪ್ಪಳ, ಆ 06: ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾದ ತುಂಗಭದ್ರಾ ಜಲಾಶಯ ರೈತರು ಸೇರಿದಂತೆ ಮೂರು ಜಿಲ್ಲೆಗಳಿಗೆ ಜೀವನಾಡಿಯಾಗಿದೆ. ಜಲಾಶಯದಲ್ಲಿ ಹೂಳು ತುಂಬಿಕೊಂಡ ಪರಿಣಾಮ ಭಾರಿ ಪ್ರಮಾಣದಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದ್ದು, ಕೇಂದ್ರ ಸರ್ಕಾರ ಹೂಳು ತೆಗೆಯಲು ಹಣಕಾಸಿನ ನೆರವು ನೀಡಬೇಕು ಎಂದು ಕೊಪ್ಪಳ ಸಂಸದರಾದ ಕರಡಿ ಸಂಗಣ್ಣ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮಂಗಳವಾರ ಈ ಕುರಿತು ಲೋಕಸಭೆಯಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆದು ಮಾತನಾಡಿದ ಅವರು, ಅನೇಕ ವರ್ಷಗಳಿಂದ ಜಲಾಶಯವನ್ನೇ ನಂಬಿಕೊಂಡು ಇಲ್ಲಿನ ರೈತರು ಬದುಕು ಕಟ್ಟಿಕೊಂಡಿದ್ದಾರೆ. ಜಲಾಶಯದಲ್ಲಿ ಭಾರಿ ಪ್ರಮಾಣದಲ್ಲಿ ಹೂಳು ತುಂಬಿದ ಕಾರಣ ನೀರಿನ ಶೇಖರಣೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ.

ಹೀಗಾಗಿ ರೈತರಿಗೆ, ಕುಡಿಯುವ ನೀರಿಗೆ ತೊಂದರೆಯಾಗಿದೆ. ನಮ್ಮ ಭಾಗದ ರೈತರಿಗೆ ಇದು ಸಮಸ್ಯೆಯಾಗಿ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದೊಂದಿಗೆ ಕೇಂದ್ರ ಸರ್ಕಾರ ಸಹಕಾರ ನೀಡಿ ಜಲಾಶಯದಲ್ಲಿನ ಹೂಳು ಹೊರ ತೆಗೆಯಲು ಹಣಕಾಸಿನ ನೆರವು ನೀಡಬೇಕು ಎಂದು ಮನವಿ ಮಾಡಿದರು.

ಈಗಾಗಲೇ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ನವಲಿ ಬಳಿ ಸಮನಾಂತರ ಜಲಾಶಯ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ೧೦ ಸಾವಿರ ಕೋಟಿ ರೂಪಾಯಿಗಳ ಯೋಜನೆ ರೂಪಿಸಿದೆ. ಇದಕ್ಕೆ ಪೂರಕ ಎನ್ನುವಂತೆ ಕೇಂದ್ರ ಸರ್ಕಾರ ಕೂಡ ಆರ್ಥಿಕ ಸಹಾಯ ನೀಡಿದರೆ ಸಮನಾಂತರ ಜಲಾಶಯದ ಜೊತೆಗೆ ಹೂಳಿನ ಸಮಸ್ಯೆಗೆ ಇತಿಶ್ರೀ ಹಾಡಬಹುದು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಂಡು ತುಂಗಭದ್ರಾ ಜಲಾಶಯದ ಹೂಳಿನ ಸಮಸ್ಯೆಗೆ ಪರಿಹಾರ ನೀಡಬೇಕು ಎಂದು ಕೋರಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ