ಹತ್ತಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸತತ ಮಳೆ ಸುರಿಯುತ್ತಿದ್ದು, ನೆರೆ ಪರಿಸ್ಥಿತಿ ಗಂಭೀರವಾಗಿದೆ-ಮೃತಪಟ್ಟವರ ಸಂಖ್ಯೆ 5ಕ್ಕೇರಿದೆ…..ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಕರ್ನಾಟಕದ ಬಹುತೇಕ ಹತ್ತಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸತತ ಮಳೆ ಸುರಿಯುತ್ತಿದ್ದು, ನೆರೆ ಪರಿಸ್ಥಿತಿ ಗಂಭೀರವಾಗಿದೆ. ಉತ್ತರ ಕರ್ನಾಟಕ ಭಾಗದ
ಹಲವು ಗ್ರಾಮಗಳು ಜಲಾವೃತವಾಗಿದ್ದು, ಅಪಾರ ಪ್ರಮಾಣದ ಬೆಳೆ ನಾಶವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆ ಸಂಬಂಧಿತ
ಅವಘಡಗಳಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೇರಿದೆ.

ವಿಜಯಪುರ, ಬೆಳಗಾವಿ, ಬಾಗಲಕೋಟೆ, ಯಾದಗಿರಿ, ರಾಯಚೂರು, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ,
ಉತ್ತರ ಕನ್ನಡ, ಕೊಡಗು, ಹಾಸನ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರೆದಿದೆ.

ವಿಜಯಪುರದಲ್ಲಿ ಕೃಷ್ಣಾ ನದಿಯ ಪ್ರವಾಹದಿಂದ ಹಲವು ಗ್ರಾಮಗಳು ಜಲಾವೃತಗೊಂಡಿವೆ. ಬಾಗಲಕೋಟೆ ಜಿಲ್ಲೆಯಲ್ಲಿ 30ಕ್ಕೂ ಹೆಚ್ಚು
ಗ್ರಾಮಗಳಲ್ಲಿ ಕೃಷಿ ಭೂಮಿಗೆ ನೆರೆ ನೀರು ನುಗಿದ್ದು ಬೆಳೆ ನೀರು ಪಾಲಾಗಿದೆ. ಜಲಾವೃತಗೊಂಡ ಗ್ರಾಮಗಳಿಂದ ಸಂತ್ರಸ್ಥರನ್ನು ಗಂಜಿ ಕೇಂದ್ರಗಳಿಗೆ
ಸ್ಥಳಾಂತರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಬೆಳಗಾವಿ ಜಿಲ್ಲೆಯಲ್ಲಿ ಕೃಷ್ಣಾ ಮತ್ತು ಉಪನದಿಗಳು ಉಕ್ಕಿ ಹರಿಯುತ್ತಿದ್ದು, ಚಿಕ್ಕೋಡಿ, ಅಥಣಿ, ರಾಯಭಾಗ ಮತ್ತು ಖಾನ್ಹಾಪುರ ತಾಲೂಕುಗಳಲ್ಲಿ
ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣವಾಗಿ ನಿರಂತರ ಮಳೆಯಾಗುತ್ತಿದ್ದು, ಕೆಲವಡೆ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಮಂಗಳೂರು- ಚಿಕ್ಕಮಗಳೂರು ನಡುವೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯಲ್ಲಿ ಭೂ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ವಾಹನ
ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಧರ್ಮಸ್ಥಳದ ಸ್ನಾನಘಟ್ಟ
ಸಂಪೂರ್ಣ ಜಲಾವೃತಗೊಂಡಿದೆ.

ಉತ್ತರ ಕನ್ನಡ ಜಿಲ್ಲೆಯ ಕದ್ರಾ ಅಣೆಕಟ್ಟು ಹಾಗೂ ಕೈಗಾ ಬಳಿ ಪ್ರವಾಹದಲ್ಲಿ ಸಿಲುಕಿದ್ದ 500 ಮಂದಿಯನ್ನು ನೌಕಪಡೆ ಸಿಬ್ಬಂದಿಗಳು ರಕ್ಷಣಾ
ಕಾರ್ಯಾಚರಣೆ ನಡೆಸಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಿದ್ದಾರೆ.

ಕೊಡಗು ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಮುಂದುವರಿದಿದೆ. ಕಾವೇರಿ, ಲಕ್ಷ್ಮಣತೀರ್ಥ ನದಿಗಳ ಪ್ರವಾಹದಿಂದಾಗಿ ಸಾವಿರಾರು ಹೆಕ್ಟೇರ್
ಹೊಲಗದ್ದೆಗಳಿಗೆ ನೀರು ನುಗ್ಗಿ ಹಾನಿಯಾಗಿದೆ.ಭಾಗಮಂಡಲ ಕ್ಷೇತ್ರ ಪ್ರವಾಹದಿಂದಾಗಿ ದ್ವೀಪದಂತಾಗಿದೆ.

ಮೈಸೂರು ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಎಚ್.ಡಿ.ಕೋಟೆ ಮತ್ತು ಪಿರಿಯಾಪಟ್ಟಣ ತಾಲೂಕಿನ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿದೆ.

ಈ ನಡುವೆ ಬೆಳಗಾವಿ ನಗರದಲ್ಲಿ ಮಳೆಯಿಂದ ಆಗಿರುವ ಹಾನಿ ಪರಿಶೀಲನೆಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬೆಳಗಾವಿ ನಗರಕ್ಕೆ
ಇಂದು ಭೇಟಿ ನೀಡಿದ್ದಾರೆ. ಅವರು ಪರಿಹಾರ ಕಾರ್ಯಕ್ರಮಗಳ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ನಾಳೆ ಅವರು
ಬೆಳಗಾವಿ, ಬಾಗಲಕೋಟೆ ಜಿಲ್ಲೆಯ ಮಳೆ ಹಾನಿಗೊಳಗಾದ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ ಎಂದು ಅಧಿಕೃತ ಪ್ರಕಟಣೆ
ತಿಳಿಸಿದೆ.

ಪ್ರವಾಹ: ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಿಸಿದ ಸಿಎಂ

 

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ