ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನಲೆ-ಇನ್ನು ಮೂರು ದಿನಗಳ ಕಾಲ ಮುಂದುವರೆಯಲಿರುವ ಮಳೆ

ಬೆಂಗಳೂರು,ಆ.7- ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಪ್ರಬಲ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಇನ್ನು ಮೂರು ದಿನಗಳ ಕಾಲ ಇದೇ ರೀತಿ ಮಳೆ ಮುಂದುವರೆಯಲಿದೆ ಎಂದು ಹವಾ ಮುನ್ಸೂಚನೆಗಳಿವೆ.

ವಾಯುಭಾರ ಕುಸಿತದಿಂದಾಗಿ ಅರಬ್ಬಿ ಸಮುದ್ರದಲ್ಲಿ ದಟ್ಟವಾದ ಮೋಡಗಳ ಸಾಲು ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದೆ.ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಕಳೆದೆರಡು ದಿನಗಳಿಂದಲೂ ಆಗಾಗ್ಗೆ ಜಿಟಿಜಿಟಿ ಮಳೆ ಬೀಳುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.

ಕರಾವಳಿ, ಮಲೆನಾಡು ಹಾಗೂ ಬೆಳಗಾವಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಇನ್ನು ಮೂರು ದಿನ ಮುಂದುವರೆಯುವ ಸಾಧ್ಯತೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ ರೆಡ್ಡಿ ತಿಳಿಸಿದರು.

ಈ ವರ್ಷ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಭಾರೀ ಮಳೆ ಬಿದ್ದಿದೆ. ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ 40 ಸೆಂ.ಮೀ ವರೆಗೂ ಮಳೆ ಬಿದ್ದ ವರದಿಯಾಗಿದೆ.ಉತ್ತರ ಕರ್ನಾಟಕದಲ್ಲಂತೂ ಅತಿವೃಷ್ಟಿ ಉಂಟಾಗಿ ಎಲ್ಲ ಜಲಾಶಯಗಳು ಭರ್ತಿಯಾಗಿವೆ.

ಅಲ್ಲದೆ ನದಿಗಳು ಪ್ರವಾಹದಿಂದ ಉಕ್ಕಿ ಹರಿಯುತ್ತಿವೆ.ಕೊಡಗು, ಮಲೆನಾಡು ಭಾಗದಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆ ಬೀಳುತ್ತಿರುವುದರಿಂದ ಕಾವೇರಿ ಜಲಾನಯನದ ಭಾಗದ ಜಲಾಶಯಗಳಿಗೆ ಒಳಹರಿವು ದುಪ್ಪಟ್ಟಾಗಿದೆ.

ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುತ್ತಿದ್ದು, ಎರಡು ಮೂರು ದಿನಗಳ ಕಾಲ ಮುಂದುವರೆಯುವ ಮುನ್ಸೂಚನೆಗಳಿವೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ