ಬೆಂಗಳೂರು,ಆ.9- ಕೊಡಗು, ಹಾಸನ, ಚಿಕ್ಕಮಗಳೂರು ಸೇರಿದಂತೆ ಶಿವಮೊಗ್ಗ ಸೇರಿದಂತೆ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಬೀಳುತ್ತಿರುವ ಭಾರೀ ಮಳೆ ಇನ್ನೆರಡು ದಿನಗಳ ಕಾಲ ಮುಂದುವರೆಯುವ ಮುನ್ಸೂಚನೆಗಳಿವೆ.
ಪಶ್ಚಿಮಘಟ್ಟ ಹಾಗೂ ಕರಾವಳಿ ಭಾಗದಲ್ಲಿ ಮುಂಗಾರು ಚುರುಕಾಗಿದ್ದು ಕಳೆದ ಮೂರು ದಿನಗಳಿಂದಲೂ ಭಾರೀ ಪ್ರಮಾಣದ ಮಳೆ ಬೀಳುತ್ತಿದ್ದು, ಇನ್ನು ಎರಡು ದಿನಗಳ ಕಾಲ ಇದೇ ರೀತಿ ಮುಂದುವರೆಯುವ ಮುನ್ಸೂಚನೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ ರೆಡ್ಡಿ ತಿಳಿಸಿದರು.
ಪ್ರವಾಹ ಪೀಡಿತ ಉತ್ತರ ಕರ್ನಾಟಕದ ಬಾಗಲಕೋಟೆ, ಬಿಜಾಪುರ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗಿದೆ. ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಿದೆ.
ಹವಾಮುನ್ಸೂಚನೆ ಪ್ರಕಾರ ಇನ್ನು ಎರಡು ದಿನಗಳ ಕಾಲ ಇದೇ ರೀತಿ ಮಳೆ ಮುಂದುವರೆಯಲಿದ್ದು, ಕೊಡುಗು, ಮಲೆನಾಡು, ಕರಾವಳಿ ಭಾಗದಲ್ಲಿ ಆನಂತರ ಮಳೆ ಪ್ರಮಾಣ ಇಳಿಮುಖವಾಗುವ ಸಾಧ್ಯತೆಗಳಿವೆ ಎಂದರು.