ಬೆಂಗಳೂರು,ಆ.9-ಕಳೆದ ಒಂದು ವಾರದಿಂದ ಅತಿವೃಷ್ಟಿ ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಉತ್ತರ ಕರ್ನಾಟಕ ಭಾಗದ ಪರಿಹಾರ ಕಾರ್ಯಕ್ಕೆ ಜೆಡಿಎಸ್ನ ಎಲ್ಲಾ ಶಾಸಕರು ತಮ್ಮ ಒಂದು ತಿಂಗಳ ವೇತನವನ್ನು ನೀಡಲು ತೀರ್ಮಾನಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಉತ್ತರ ಕರ್ನಾಟಕ ಭಾಗದ ಜನರ ಪರಿಹಾರ ಕಾರ್ಯಕ್ಕಾಗಿ ನಮ್ಮೆಲ್ಲ ಶಾಸಕರ ಒಂದು ತಿಂಗಳ ಸಂಬಳವನ್ನು ನೀಡುತ್ತಿದ್ದೇವೆ. ಪ್ರವಾಹ ಮತ್ತು ಅತಿವೃಷ್ಟಿಯಿಂದ ಸಂಕಷ್ಟದಲ್ಲಿ ಸಿಲುಕಿರುವ ನಮ್ಮ ಅಣ್ಣತಮ್ಮಂದಿರೊಂದಿಗೆ ನಿಲ್ಲೋಣ ಎಂದು ತಿಳಿಸಿದ್ದಾರೆ.
ಜ್ವರದಿಂದಾಗಿ ಪ್ರವಾಹ ಸ್ಥಳಗಳಿಗೆ ಭೇಟಿ ಇಲ್ಲ: ತಾವು ಜ್ವರದಿಂದ ಬಳಲುತ್ತಿರುವ ಕಾರಣ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಸಾಧ್ಯವಾಗುತ್ತಿಲ್ಲ.
ಒಂದೆರಡು ದಿನಗಳಲ್ಲಿ ಉತ್ತರ ಕರ್ನಾಟಕಕ್ಕೆ ತೆರಳಿ ಪ್ರವಾಹದಿಂದ ಸಂಕಷ್ಟಕ್ಕೀಡಾಗಿರುವ ಜನರ ಕಷ್ಟದಲ್ಲಿ ಭಾಗಿಯಾಗುವುದಾಗಿ ಕುಮಾರಸ್ವಾಮಿ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಕುಮಾರಸ್ವಾಮಿ ಅವರು ಬೆಳಗಾವಿ, ರಾಯಚೂರು, ಹಾಸನ, ಕೊಡುಗು ಮತ್ತು ಬಾಗಲಕೋಟೆ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ಪ್ರವಾಹ ಪೀಡಿತ ಪ್ರದೇಶಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ಜೆಡಿಎಸ್ ಟ್ವೀಟ್ನಲ್ಲಿ ತಿಳಿಸಿದೆ.
ಅತಿವೃಷ್ಟಿಯಿಂದ ಉಂಟಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ನಿಭಾಯಿಸಲು ಹಗಲಿರುಳು ಶ್ರಮಪಡುತ್ತಿರುವ ಅಧಿಕಾರಿಗಳು ಹಾಗೂ ವಿವಿಧ ಸಂಸ್ಥೆಗಳನ್ನು ಕುಮಾರಸ್ವಾಮಿ ಅಭಿನಂದಿಸಿದ್ದಾರೆ.
ಕಳೆದೊಂದು ವಾರದಿಂದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಬಿಜಾಪುರ, ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಅತಿವೃಷ್ಟಿ ಹಾಗೂ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಸಂತ್ರಸ್ತರು ನೆರವಿಗಾಗಿ ಮೊರೆ ಇಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಶಾಸಕರು ತಮ್ಮ ತಿಂಗಳ ವೇತನವನ್ನು ಪ್ರವಾಸ ಸಂತ್ರಸ್ತರ ಪರಿಹಾರ ಕಾರ್ಯಕ್ಕೆ ನೀಡಿದ್ದಾರೆ ಎಂದು ಹೇಳಿದ್ದಾರೆ.