ರಾಜ್ಯದ ಬಹುಭಾಗ ಜಲಪ್ರಳಯಕ್ಕೆ ತುತ್ತಾಗಿರುವ ಹಿನ್ನಲೆ-ಕೇಂದ್ರ ಕರ್ನಾಟಕಕ್ಕೆ 50 ಸಾವಿರ ಕೋಟಿ ರೂ.ಗಳ ಪರಿಹಾರ ನೀಡಬೇಕು-ವಾಟಾಳ್ ನಾಗರಾಜ್

ಬೆಂಗಳೂರು,ಆ.10- ಉತ್ತರ ಕರ್ನಾಟಕ, ಕೊಡುಗು ಸೇರಿದಂತೆ ರಾಜ್ಯದ ಬಹುಭಾಗ ಜಲಪ್ರಳಯಕ್ಕೆ ತುತ್ತಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ 50 ಸಾವಿರ ಕೋಟಿ ರೂ.ಗಳ ಪರಿಹಾರ ನೀಡಬೇಕೆಂದು ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಒತ್ತಾಯಿಸಿದರು.

ರಾಜಭವನದ ಮುಂದೆ ಪ್ರತಿಭಟನೆ ನಡೆಸಿದ ಅವರು, ಜಲಪ್ರಳಯಕ್ಕೆ ತುತ್ತಾದವರಿಗೆ ಪರಿಹಾರ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ತುರ್ತಾಗಿ ಒದಗಿಸುವಂತೆ ಒತ್ತಾಯಿಸಿದರು.

ಜಲಪ್ರಳಯದಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಜನರು, ಜಾನುವಾರುಗಳು ಸಂಕಷ್ಟದಲ್ಲಿ ಸಿಲುಕಿವೆ. ಅನೇಕ ಕಡೆ ರಸ್ತೆಗಳು ಸಂಪೂರ್ಣ ಜಲಾವೃತವಾಗಿದೆ. ಸೇತುವೆಗಳು ಮುಳುಗಿಹೋವಿಎ. ಜನರು ದಾರಿ ಕಾಣದೆ ಪರಿತಪಿಸುತ್ತಿದ್ದಾರೆ, ಕೊಡಗಿನ ಪರಿಸ್ಥಿತಿ ಚಿಂತಾಜನಕವಾಗಿದೆ. ಕೂಡಲೇ ಸಮರೋಪಾದಿಯಲ್ಲಿ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರವಾಹದಲ್ಲಿ ಸಿಲುಕಿ ಸಾವನ್ನಪ್ಪಿದವರ ಕುಟುಂಬಗಳಿಗೆ 25 ಲಕ್ಷ ಪರಿಹಾರ ನೀಡಬೇಕು, ಕೂಡಲೇ ಮಂತ್ರಿಮಂಡಲ ರಚನೆಯಾಗಬೇಕು ಎಂದು ಆಗ್ರಹಿಸಿದರು.

ಯಡಿಯೂರಪ್ಪ ನೇತೃತ್ವದ ಸರ್ಕಾರ ಮೇಕೆದಾಟು ಯೋಜನೆಯನ್ನು ಕೂಡಲೇ ಪ್ರಾರಂಭಿಸಬೇಕು, ತಮಿಳುನಾಡು ಸರ್ಕಾರ ಯಾವುದೇ ಕಾರಣಕ್ಕೂ ಈ ಯೋಜನೆಗೆ ಅಡ್ಡಿಪಡಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ ಅವರು, ಯೋಜನೆಗೆ ಜಾರಿಗೆ ಬರದಿದ್ದರೆ, ಪ್ರವಾಹ ನಿಂತ ಬಳಿಕ ನಾವೇ ಖುದ್ದು ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ