ಗೃಹ ಸಚಿವರಿಂದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ

ಬೆಂಗಳೂರು, ಆ.11- ಕಳೆದ ಒಂದು ವಾರದಿಂದ ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಮತ್ತಿತರ ಕಡೆ ಭೀಕರ ಮಳೆ ಹಾಗೂ ಪ್ರವಾಹದಿಂದಾಗಿ ಉಂಟಾಗಿರುವ ಪರಿಸ್ಥಿತಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಅವಲೋಕಿಸಿದರು.

ಮಧ್ಯಾಹ್ನ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ರೈಲ್ವೆ ಸಚಿವ ಸುರೇಶ್ ಅಂಗಡಿ ಮತ್ತಿತರರು ಬರಮಾಡಿಕೊಂಡರು.

ನಂತರ ಅಮಿತ್ ಶಾ ಹಾಗೂ ಯಡಿಯೂರಪ್ಪ ಅವರು ಭಾರತೀಯ ವಾಯು ಸೇನೆಗೆ ಸೇರಿದ ವಿಶೇಷ ಹೆಲಿಕಾಫ್ಟರ್‍ನಲ್ಲಿ ಬಾಗಲಕೋಟೆ, ಬೆಳಗಾವಿ, ರಾಯಚೂರು, ವಿಜಯಪುರ ಸೇರಿದಂತೆ ಮತ್ತಿತರ ಕಡೆ ವೈಮಾನಿಕ ಸಮೀಕ್ಷೆ ನಡೆಸಿದರು.

ಬಳಿಕ ಸಂಜೆ ವಿಮಾನ ನಿಲ್ದಾಣದಲ್ಲೇ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಪ್ರವಾಹ ಮತ್ತು ಮಳೆಯಿಂದಾಗಿ ಉಂಟಾಗಿರುವ ನಷ್ಟದ ಬಗ್ಗೆ ಮಾಹಿತಿ ಪಡೆದರು.

ಪ್ರವಾಹ ಪೀಡಿತ ಸ್ಥಳಗಳಲ್ಲಿ ಕೇಂದ್ರ ಗೃಹ ಸಚಿವರೇ ವೈಮಾನಿಕ ಸಮೀಕ್ಷೆ ನಡೆಸಿರುವದರಿಂದ ರಾಜ್ಯಕ್ಕೆ ವಿಶೇಷ ಆರ್ಥಿಕ ನೆರವು ಘೋಷಣೆಯಾಗುವ ಸಂಭವವಿದೆ ಎಂದು ನಿರೀಕ್ಷಿಸಲಾಗಿದೆ.

ಈಗಾಗಲೇ ಯಡಿಯೂರಪ್ಪ ಕೂಡ ರಾಜ್ಯದ ಪರಿಸ್ಥಿತಿಯನ್ನು ಪ್ರತಿ ದಿನ ವರದಿ ರೂಪದಲ್ಲಿ ಪ್ರಧಾನ ಮಂತ್ರಿ ಕಾರ್ಯಾಲಯ, ಗೃಹ ಸಚಿವರ ಕಾರ್ಯಾಲಯ ಹಾಗೂ ಹಣಕಾಸು ಸಚಿವಾಲಯಕ್ಕೆ ವಸ್ತು ಸ್ಥಿತಿಯನ್ನು ವಿವರಿಸಿದ್ದಾರೆ.

ನಿನ್ನೆಯಷ್ಟೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾಸೀತಾರಾಮನ್ ಆಗಮಿಸಿ ಬೆಳಗಾವಿ ಸೇರಿದಂತೆ ಮತ್ತಿತರ ಭಾಗಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದಲ್ಲದೆ, ಖುದ್ದು ಕೆಲವು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದರು.

ಪ್ರವಾಹ ಪೀಡಿತ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದೆ ಎಂದು ನಿನ್ನೆಯಷ್ಟೇ ನಿರ್ಮಲಾಸೀತಾರಾಮನ್ ಭರವಸೆ ಕೊಟ್ಟಿದ್ದರು.

ಇಂದು ಅಮಿತ್ ಶಾ ಆಗಮಿಸಿರುವುದರಿಂದ ರಾಜ್ಯಕ್ಕೆ ಕೇಂದ್ರದಿಂದ ಹಣಕಾಸಿನ ನೆರವು ಸಿಗುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಯಡಿಯೂರಪ್ಪ 80 ತಾಲ್ಲೂಕುಗಳನ್ನು ಪ್ರಕೃತಿ ವಿಕೋಪ ಎಂದು ಘೋಷಣೆ ಮಾಡಿದ್ದಾರೆ. ಇತ್ತ ಪ್ರತಿಪಕ್ಷಗಳು ಕರ್ನಾಟಕವನ್ನು ರಾಷ್ಟ್ರೀಯ ವಿಕೋಪ ಎಂದು ಘೋಷಿಸಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಆಮಿತ್ ಶಾ ಆಗಮಿಸಿರುವದರಿಂದ ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಹಣಕಾಸಿನ ನೆರವು ಸಿಗಲಿದೆ ಎಂಬ ಮಾತುಗಳು ಸರ್ಕಾರದ ಮಟ್ಟದಲ್ಲಿ ಕೇಳಿ ಬರುತ್ತಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ