ಬೆಂಗಳೂರು, ಆ. 12- ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಪ್ರಮಾಣ ಇಳಿಮುಖವಾಗಿದ್ದು, ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಮುಂದುವರೆದಿದೆ.
ಹವಾ ಮುನ್ಸೂಚನೆ ಪ್ರಕಾರ ಇನ್ನು 2-3ದಿನಗಳ ಕಾಲ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿದೆ.
ಬಂಗಾಳಕೊಲ್ಲಿಯಲ್ಲಿ ಮತ್ತೊಮ್ಮೆ ವಾಯುಭಾರ ಕುಸಿತ ಉಂಟಾಗಿದ್ದು, ಮುಂದೆ ಯಾವ ಸ್ವರೂಪ ಪಡೆಯಲಿದೆ ಎಂಬುದನ್ನು ಗಮನಿಸಲಾಗುತ್ತಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ. ಜಿ.ಎಸ್. ಶ್ರೀನಿವಾಸ್ ರೆಡ್ಡಿ ತಿಳಿಸಿದರು.
ಉತ್ತರ ಕರ್ನಾಟಕದ ಒಂದೆರಡು ಕಡೆ ಹೊರತು ಪಡಿಸಿ ಮಳೆ ನಿಂತಿದೆ. ಆದರೂ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. ಕಳೆದೊಂದು ವಾರದಿಂದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಬೀಳುತ್ತಿದ್ದ ಭಾರೀಮಳೆ ಪ್ರಮಾಣ ತಗ್ಗಿದೆ. ಆದರೆ ಸಾಧಾರಣ ಪ್ರಮಾಣದ ಮಳೆ ಮುಂದುವರೆಯಲಿದೆ ಎಂದು ಹೇಳಿದರು.
ಕರಾವಳಿ, ಮಲೆನಾಡು ಹಾಗೂ ಉತ್ತರಕರ್ನಾಟಕ ಸೇರಿದಂತೆ ಬಿದ್ದ ಮಳೆ ಪ್ರಮಾಣ, ಪ್ರವಾಹ, ಆಸ್ತಿ-ಪಾಸ್ತಿ ಬೆಳೆ ನಷ್ಟ ಎಲ್ಲವು ದಾಖಲೆ ಪ್ರಮಾಣದಲ್ಲೇ ಉಂಟಾಗಿದೆ. ರಾಜ್ಯದ ದಕ್ಷಿಣ ಕರ್ನಾಟಕ ಸೇರಿದಂತೆ ಪೂರ್ವಭಾಗ ಬಹುತೇಕ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಕಂಡು ಬಂದಿದೆ. ಸ್ಥಳೀಯ ಹವಾ ಮುನ್ಸೂಚನೆ ಪ್ರಕಾರ ಬೆಂಗಳೂರು ಸುತ್ತ-ಮುತ್ತ ಭಾಗಶಃ ಮೊಡಕವಿದ ವಾತಾವರಣವಿದ್ದು ಸಂಜೆ ಹಾಗೂ ರಾತ್ರಿ ವೇಳೆ ಮಳೆಯಾಗುವ ಸಾಧ್ಯವಿದೆ ಎಂದರು.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಯಾವ ಸ್ವರೂಪ ಪಡೆಯಲಿದೆ ಮತ್ತು ಯಾವ ದಿಕ್ಕಿನೆಡೆಗೆ ಸಾಗಲಿದೆ ಎಂಬುದರ ಮೇಲೆ ಮಳೆ ಅವಲಂಬಿತವಾಗಿದೆ. ಒಟ್ಟಾರೆ ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು, ಮಳೆ ಪ್ರಮಾಣ ಇಳಿಕೆಯಾಗಿದೆ ಎಂದು ಹೇಳಿದರು.