ರಾಮಜನ್ಮ ಭೂಮಿ-ಬಾಬರಿ ಮಸೀದಿ ಭೂ ವಿವಾದ ಪ್ರಕರಣದ-ಐದನೇ ದಿನವೂ ಮುಂದುವರಿದ ವಿಚಾರಣೆ

ನವದೆಹಲಿ, ಆ.13– ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಜನ್ಮ ಭೂಮಿ-ಬಾಬರಿ ಮಸೀದಿ ಭೂ ವಿವಾದ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ಐದನೆ ದಿನವಾದ ಇಂದು ಕೂಡ ಮುಂದುವರಿಸಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಯ್ ನೇತೃತ್ವದ ಪಂಚ ನ್ಯಾಯಾಧೀಶರ ಸಾಂವಿಧಾನಿಕ ಪೀಠ ಅಯೋಧ್ಯೆ-ಬಾಬರಿ ಮಸೀದಿ ಭೂ ವಿವಾದ ಕುರಿತು ದಿನನಿತ್ಯದ ವಿಚಾರಣೆಯನ್ನು ಐದನೆ ದಿನವಾದ ಇಂದೂ ಕೂಡ ನಡೆಸಿತು.

ಅರ್ಜಿದಾರರಲ್ಲಿ ಒಬ್ಬರಾದ ರಾಮಲಲ್ಲಾ ವಿರಾಜ್‍ಮಾನ್ ಪರ ಹಿರಿಯ ವಕೀಲ ಸಿ.ಎಸ್.ವೈದ್ಯನಾಥನ್ ಈ ಸ್ಥಳದಲ್ಲಿ ರಾಮ ಮಂದಿರ ಇತ್ತು ಎಂಬ ವಾದವನ್ನು ಮಂಡಿಸಿದರು.

ರಾಮಮಂದಿರದ ಇದ್ದ ಸ್ಥಳದಲ್ಲೇ ಮಸೀದಿಯನ್ನು ನಿರ್ಮಿಸಲಾಗಿದೆ. ಈ ಬಗ್ಗೆ ಇತಿಹಾಸದಲ್ಲಿ ಉಲ್ಲೇಖವಿದೆ ಹಾಗೂ ಅಲಹಾಬಾದ್ ಹೈಕೋರ್ಟ್‍ನ ನ್ಯಾಯಾಧೀಶರೂ ಕೂಡ ಇದಲ್ಲಿ ಉಲ್ಲೇಖಿಸಿದ್ಧಾರೆ ಎಂದು ವಾದಿಸಿದರು.

ನ್ಯಾಯಮೂರ್ತಿಗಳಾದ ಎಸ್.ಎ.ಬೋಬಡೆ, ಡಿ.ವೈ.ಚಂದ್ರಚೂಡ್, ಅಶೊಕ್ ಭೂಷಣ್ ಮತ್ತು ಎಸ್.ಎ.ನಜೀರ್ ಪಂಚ ನ್ಯಾಯಪೀಠದಲ್ಲಿದ್ದಾರೆ.
ಸುಪ್ರೀಕೋರ್ಟ್ ನಿವೃತ್ತ ನ್ಯಾಯಮೂರ್ತಿ ಖಲೀಫುಲ್ಲಾ ನೇತೃತ್ವದ ತ್ರಿಸದಸ್ಯರ ಮಧ್ಯಸ್ಥಿಕೆ ಸಮಿತಿಯ ಸಂಧಾನ ವಿಫಲವಾದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಈ ವಿವಾದದ ದಿನನಿತ್ಯದ ವಿಚಾರಣೆ ಕೈಗೆತ್ತಿಕೊಂಡಿದೆ.

ರಾಮಜನ್ಮಭೂಮಿ, ಬಾಬರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಒಟ್ಟು 14 ಅರ್ಜಿದಾರರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. 2010ರಲ್ಲಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಈ ಮೇಲ್ಮನವಿಗಳನ್ನು ಸಲ್ಲಿಸಲಾಗಿದೆ.

ಅಲಹಾಬಾದ್ ಹೈಕೋರ್ಟ್ ತನ್ನ ತೀರ್ಪಿನಲ್ಲಿ 2.77 ಎಕರೆ ಭೂ ಪ್ರದೇಶವನ್ನು ಸುನ್ನಿ ವಕ್ಫ್ ಮಂಡಳಿ ನಿರ್ಮೋಹಿ ಅಖಾಡ ಹಾಗೂ ರಾಮಲಲ್ಲಾ ಈ ಮೂವರು ಪಕ್ಷದಾರರಿಗೆ ಸಮನಾಗಿ ಹಂಚಿಕೆ ಮಾಡಿತ್ತು. ಆದರೆ ಇದರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಮೇಲ್ಮನವಿಗಳನ್ನು ಸಲ್ಲಿಸಲಾಗಿತ್ತು.

ಈ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಲು ಸುಪ್ರೀಂಕೋರ್ಟ್ ಆದೇಶದ ಮೇರೆಗೆ ರಚಿಸಲಾಗಿದ್ದ ತ್ರಿಸದಸ್ಯ ಮಧ್ಯಸ್ಥಿಕೆ ಸಮಿತಿ ನಾಲ್ಕು ತಿಂಗಳಿಗೂ ಹೆಚ್ಚು ಕಾಲ ಸಂಧಾನ ಪ್ರಕ್ರಿಯೆ ಕೈಗೊಂಡು ಸರ್ವೋಚ್ಚ ನ್ಯಾಯಾಲಯಕ್ಕೆ ತನ್ನ ಮಧ್ಯಂತರ ವರದಿ ಸಲ್ಲಿಸಿತ್ತು ಆದರೆ, ವಿವಾದ ಇತ್ಯರ್ಥ ಸಂಧಾನದಲ್ಲಿ ಸಮಿತಿ ವಿಫಲವಾಗಿದೆ ಎಂದು ಸುಪ್ರೀಂಕೋರ್ಟ್ ನಿರ್ಣಯಿಸಿ ದಿನನಿತ್ಯ ವಿಚಾರಣೆ ಮುಂದುವರಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ