ಬೆಂಗಳೂರು,ಆ.17-ಉಗ್ರರು ದೇಶದೊಳಗೆ ಒಳನುಸಿಳಿರುವ ಸಾಧ್ಯತೆ ಇದೆ ಎಂಬ ಕೇಂದ್ರ ಗುಪ್ತಚರ ವಿಭಾಗದ ಎಚ್ಚರಿಕೆ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜ್ಯ ಮಹಾನಿರ್ದೇಶಕರು ಹಾಗೂ ಬೆಂಗಳೂರು ನಗರ ಪೆÇಲೀಸ್ ಆಯುಕ್ತರು ಸೇರಿದಂತೆ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ತುರ್ತು ಕರ್ಮ ಕೈಗೊಳ್ಳುವಂತೆ ಸೂಚಿಸಿರುವುದಾಗಿ ಹೇಳಿದರು.
ಯಾವುದೇ ಕಾರಣಕ್ಕೂ ರಾಜ್ಯದ ಜನತೆ ಆತಂಕಕ್ಕೆ ಒಳಗಾಗಬಾರದು, ಪೆÇಲೀಸರು ಎಲ್ಲ ರೀತಿಯ ಬಿಗಿಕ್ರಮಗಳನ್ನು ಕೈಗೊಂಡಿದ್ದಾರೆ.ವದಂತಿ ಸುದ್ದಿಗಳಿಗೆ ಕಿವಿಗೊಡಬಾರದೆಂದು ಯಡಿಯೂರಪ್ಪ ಮನವಿ ಮಾಡಿದರು.
ಪಾಕ್ ಮೂಲದ ಕೆಲವು ಆತ್ಮಾಹುತಿ ದಳದ ಉಗ್ರರು ದೇಶದೊಳಗೆ ನುಸುಳಿ ವಿಧ್ವಂಸಕ ಕೃತ್ಯ ನಡೆಸುವ ಸಾಧ್ಯತೆ ಇದೆ ಎಂದು ಕೇಂದ್ರ ಗುಪ್ತಚರ ವಿಭಾಗದ ಅಧಿಕಾರಿಗಳು ಎಚ್ಚರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಕಡೆ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ.
ಪ್ರಮುಖವಾಗಿ ಶಕ್ತಿಕೇಂದ್ರ ವಿಧಾನಸೌಧ, ವಿಕಾಸಸೌಧ, ಕೆಪಿಎಸ್ಸಿ, ಹೈಕೋರ್ಟ್, ರಾಜಭವನ, ರೈಲ್ವೆ, ಬಸ್, ಮೆಟ್ರೋ, ವಿಮಾನ ನಿಲ್ದಾಣಗಳು, ಸಾರ್ವಜನಿಕ ಸ್ಥಳಗಳು, ಐಟಿಬಿಟಿ ಕಂಪನಿಗಳು, ಮಾಲುಗಳು, ಸಮುದ್ರ ತೀರ ಪ್ರದೇಶಗಳು, ಪ್ರಸಿದ್ದ ಪ್ರವಾಸಿ ತಾಣಗಳು, ಧಾರ್ಮಿಕ ಕೇಂದ್ರಗಳು ಸೇರಿದಂತೆ ಮತ್ತಿತರ ಕಡೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.