ಒಂದೆರಡು ದಿನಗಳಲ್ಲಿ ಪರಿಹಾರದ ಹಣ ಘೋಷಣೆಯಾಗುವ ನಿರೀಕ್ಷೆ-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ನವದೆಹಲಿ,ಆ.17- ಪ್ರವಾಹದಿಂದ ತತ್ತರಿಸಿರುವ ರಾಜ್ಯಕ್ಕೆ ಕೇಂದ್ರದಿಂದ ಒಂದೆರಡು ದಿನಗಳಲ್ಲಿ ಪರಿಹಾರದ ಹಣ ಘೋಷಣೆಯಾಗುವ ನಿರೀಕ್ಷೆಯಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಪರಿಸ್ಥಿತಿಯನ್ನು ವಿವರಿಸಿದ್ದೇನೆ. ಇದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇಂದು ಅಥವಾ ನಾಳೆ ಕೇಂದ್ರದಿಂದ ತಾತ್ಕಾಲಿಕ ಪರಿಹಾರ ಘೋಷಣೆಯಾಗುವ ಸಂಭವವಿದೆ ಎಂದು ಹೇಳಿದರು.
ಎಷ್ಟು ಹಣ ಘೋಷಣೆಯಾಗಲಿದೆ ಎಂಬುದನ್ನು ಕಾದುನೋಡಬೇಕು.10 ಸಾವಿರ ಕೋಟಿ ತಾತ್ಕಾಲಿಕ ಪರಿಹಾರ ಧನ ಬಿಡುಗಡೆ ಮಾಡಬೇಕೆಂದು ಮನವಿ ಮಾಡಲಾಗಿದೆ.ರಾಜ್ಯದ ಪರಿಸ್ಥಿತಿಯನ್ನು ಪ್ರಧಾನಿಗೆ ಮನವರಿಕೆಯಾಗಿರುವುದರಿಂದ ಹೆಚ್ಚಿನ ಪರಿಹಾರ ದೊರಕುವ ಸಾಧ್ಯತೆ ಇದೆ ಎಂದು ಹೇಳಿದರು.

ಕೇಂದ್ರದಿಂದ ನಮಗೆ ಎಲ್ಲ ರೀತಿಯ ನೆರವು ಸಿಗುತ್ತಿದೆ.ರಾಜ್ಯದಲ್ಲಿ ಪ್ರವಾಹ ಬಂದ ತಕ್ಷಣವೇ ವಾಯುಪಡೆ, ಸೇನೆ, ಎನ್‍ಡಿಆರ್‍ಎಫ್, ಹೆಲಿಕಾಪ್ಟರ್, ದೋಣಿಗಳು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಿದ್ದಾರೆ ಎಂದರು.
ಪ್ರಧಾನಿಯವರು ಸದ್ಯದಲ್ಲೇ ಕೇಂದ್ರದಿಂದ ಅಧ್ಯಯನ ತಂಡವನ್ನು ರಾಜ್ಯಕ್ಕೆ ಕಳುಹಿಸಿಕೊಡುವುದಾಗಿ ಹೇಳಿದ್ದಾರೆ. ಹಣ ಬಿಡುಗಡೆಯಾಗಬೇಕಾದರೆ ಮೊದಲು ವರದಿ ಕೊಡಬೇಕು. ಸುಖಾಸುಮ್ಮನೆ ಹಣ ಬಿಡುಗಡೆಯಾಗುವುದಿಲ್ಲ ಎಂದು ಹೇಳಿದರು.

ಈಗಾಗಲೇ ಹಣಕಾಸು ಇಲಾಖೆ, ಗೃಹ ಇಲಾಖೆ ಹಾಗೂ ಪ್ರಧಾನಿ ಕಾರ್ಯಾಲಯಕ್ಕೆ ಅತಿವೃಷ್ಟಿಯಿಂದ ಉಂಟಾಗಿರುವ ವಸ್ತುಸ್ಥಿತಿಯನ್ನು ಮುಖ್ಯ ಕಾರ್ಯದರ್ಶಿ ವಿವರಿಸಿ ವರದಿಯನ್ನು ಸಲ್ಲಿಸಿದ್ದಾರೆ.ಖುದ್ದು, ನಿರ್ಮಲಾ ಸೀತಾರಾಮನ್, ಅಮಿತ್ ಷಾ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ ಎಂದು ತಿಳಿಸಿದರು.
ತಿರುಗೇಟು:
ಕೇಂದ್ರದಿಂದ ರಾಜ್ಯಕ್ಕೆ ಯಾವುದೇ ರೀತಿಯ ನೆರವು ಸಿಗುತ್ತಿಲ್ಲ ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದ ಯಡಿಯೂರಪ್ಪ, ತಲೆತಿರುಕರಂತೆ ಮಾತನಾಡುವುದನ್ನು ನಿಲ್ಲಿಸಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಧಾನಿ ಮೋದಿ, ಸಚಿವರಾದ ಅಮಿತ್ ಷಾ, ನಿರ್ಮಲಾ ಸೀತಾರಾಮನ್ ಸೇರಿದಂತೆ ಕೇಂದ್ರ ಸರ್ಕಾರ ನಮಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದೆ.ಕಾಂಗ್ರೆಸಿಗರು ಮೊದಲು ತಲೆತಿರುಕರಂತೆ ಮಾತನಾಡುವುದನ್ನು ಬಿಟ್ಟು ಜವಾಬ್ದಾರಿಯುತವಾಗಿ ನಡೆದುಕೊಳ್ಳಲಿ ಎಂದು ಹರಿಹಾಯ್ದರು.
ಹಿಂದೆ ರಾಜ್ಯದಲ್ಲಿ ಪ್ರವಾಹ ಉಂಟಾದಾಗ ಅಂದಿನ ಯುಪಿಎ ಸರ್ಕಾರ ಯಾವ ರೀತಿ ನಡೆದುಕೊಂಡಿದೆ ಎಂಬುದು ಎಲ್ಲರಿಗೂ ಗೊತ್ತು.ನಮಗೆ ಕೇಂದ್ರದಿಂದ ಅಗತ್ಯ ನೆರವು ಸಿಗುತ್ತಿರಬೇಕಾದರೆ ಆಧಾರರಹಿತ ಆರೋಪ ಮಾಡುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.
ಇಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಅಮಿತ್ ಷಾ ಅವರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಸಂಬಂಧ ಮಾತುಕತೆ ನಡೆಸಲಾಗುವುದು.ಸಾಧ್ಯವಾದರೆ ಇಂದೇ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು.ನಾಳೆ ಅಥವಾ ಸೋಮವಾರ ಸಂಪುಟ ವಿಸ್ತರಣೆಯಾಗಲಿದೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ