ಬೆಂಗಳೂರು,ಆ.18-ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇನ್ನೆರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ.
ಕಳೆದೆರಡು ಮೂರು ದಿನಗಳಿಂದ ರಾಜ್ಯದ ಒಳನಾಡಿನಲ್ಲಿ ಸಾಧಾರಣ ಮಳೆ ಮುಂದುವರೆದಿದ್ದು, ನಿನ್ನೆ ರಾತ್ರಿ ಬೆಂಗಳೂರಿನಲ್ಲಿ 10ರಿಂದ 30 ಮೀ.ಮೀ ಉತ್ತಮ ಮಳೆಯಾಗಿದೆ. ಅದೇ ರೀತಿ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಸಾಧಾರಣ ಪ್ರಮಾಣದ ಮಳೆಯಾದ ವರದಿಯಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಪೂರ್ವ ಭಾಗದಲ್ಲಿ ಮಳೆಯಾಗುತ್ತಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಡಾ.ಜಿ.ಎಸ್.ಶ್ರೀನಿವಾಸ ರೆಡ್ಡಿ ತಿಳಿಸಿದರು.
ಹವಾ ಮುನ್ಸೂಚನೆ ಪ್ರಕಾರ ಬೆಂಗಳೂರು ಸೇರಿದಂತೆ ರಾಜ್ಯದ ಒಳನಾಡಿನಲ್ಲಿ ಸಾಧಾರಣ ಪ್ರಮಾಣದ ಮಳೆಯಾಗುವ ಲಕ್ಷಣವಿದೆ. ಮೋಡ ಕವಿದ ವಾತಾವರಣವಿದ್ದು, ಹಾಗಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.
ಇತ್ತೀಚೆಗೆ ಭಾರೀ ಮಳೆಯಿಂದ ಅತಿವೃಷ್ಟಿ ಹಾಗೂ ಪ್ರವಾಹಕ್ಕೆ ತುತ್ತಾಗಿದ್ದ ಉತ್ತರಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ.
ಉತ್ತರ ಕರ್ನಾಟಕದಲ್ಲಿ ಬಹುತೇಕ ಮಳೆ ನಿಂತಿದ್ದು, ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗಿದೆ. ಉತ್ತರ ಕರ್ನಾಟಕ, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಸದ್ಯಕ್ಕೆ ಭಾರೀ ಮಳೆಯಾಗುವ ಮುನ್ಸೂಚನೆಗಳಿಲ್ಲ ಎಂದು ಅವರು ತಿಳಿಸಿದರು.