ಬೆಂಗಳೂರು, ಆ.19- ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆಗಳಿವೆ.
ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗದಲ್ಲಿ ಮಳೆ ಪ್ರಮಾಣ ಇಳಿಮುಖವಾಗಿದ್ದು, ರಾಜ್ಯಾದ್ಯಂತ ಹಗುರದಿಂದ ಸಾಧಾರಣ ಮಳೆ ಮುಂದುವರೆದಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡು ಹಾಗೂ ಪೂರ್ವ ಭಾಗದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಇಂದೂ ಕೂಡ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದರು.
ನಿನ್ನೆ ಹೈದರಾಬಾದ್ ಕರ್ನಾಟಕ, ಕರಾವಳಿ, ಮಲೆನಾಡು, ಬಯಲು ಸೀಮೆ ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಸಾಧಾರಣ ಪ್ರಮಾಣದ ಮಳೆಯಾಗಿದೆ.ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಉಡುಪಿ, ಯಾದಗಿರಿ, ಕೊಪ್ಪಳ ಜಿಲ್ಲೆ ಸೇರಿದಂತೆ ಕೆಲವೆಡೆ ಚದುರಿದಂತೆ ಭಾರೀ ಮಳೆ ಬಿದ್ದ ವರದಿಯಾಗಿದೆ.
ಹವಾ ಮುನ್ಸೂಚನೆ ಪ್ರಕಾರ ಇಂದೂ ಕೂಡ ರಾಜ್ಯದ ಒಳನಾಡಿನಲ್ಲಿ ಉತ್ತಮ ಮಳೆಯಾಗಲಿದೆ. ನಾಳೆಯಿಂದ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಅವರು ತಿಳಿಸಿದರು.
ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿ ವೇಳೆ ಮಳೆಯಾಗುವ ಸಂಭವವಿದೆ. ಕಳೆದೆರಡು ದಿನಗಳಿಂದಲೂ ಈ ಭಾಗದಲ್ಲಿ ಸಾಧಾರಣ ಪ್ರಮಾಣದ ಮಳೆಯಾಗುತ್ತಿದೆ ಎಂದು ಅವರು ಹೇಳಿದರು.