ಬೆಂಗಳೂರು, ಆ.20- ದಾವಣಗೆರೆ ಜಿಲ್ಲೆಗೆ ಸಚಿವ ಸ್ಥಾನ ಸಿಗಬೇಕಿತ್ತು. ಆದರೆ, ಯಾವ ಕಾರಣಕ್ಕೆ ಸಿಕ್ಕಿಲ್ಲ ಎಂಬುದು ಗೊತ್ತಿಲ್ಲ. ನಾನಂತೂ ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಮಾಜಿ ಸಚಿವ ಹಾಗೂ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟದಲ್ಲಿ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆ ನನಗಿರಲಿಲ್ಲ. ನಾನು ಯಾರ ಬಳಿಯೂ ಮಂತ್ರಿ ಸ್ಥಾನ ಕೇಳಿರಲಿಲ್ಲ. ಮುಂದಿನ ದಿನಗಳಲ್ಲೂ ಸಚಿವ ಸ್ಥಾನ ಬೇಕೆಂದು ಕೇಳುವುದಿಲ್ಲ. ನನ್ನ ಗುರಿ ಏನಿದ್ದರೂ ಕ್ಷೇತ್ರದ ಅಭಿವೃದ್ಧಿ ಎಂದು ಸ್ಪಷ್ಟಪಡಿಸಿದರು.
ದಾವಣಗೆರೆ ಜಿಲ್ಲೆ ಬಿಜೆಪಿ ಭದ್ರಕೋಟೆ. ನಿರಂತರವಾಗಿ ಇಲ್ಲಿ ಬಿಜೆಪಿಯ ಸಂಸದರು ಆಯ್ಕೆಯಾಗುತ್ತಾ ಬಂದಿದ್ದಾರೆ. ಆ ಕಾರಣಕ್ಕಾದರೂ ದಾವಣಗೆರೆಗೆ ಸಚಿವ ಸ್ಥಾನ ಕೊಡಬೇಕಾಗಿತ್ತು. ಕೆಲವು ಶಾಸಕರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಜಿಲ್ಲೆಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದೆವು ಎಂದರು.






