ಭೋಪಾಲ್, ಆ.21- ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಧುರೀಣ ಬಾಬುಲಾಲ್ ಗೌರ್ ಇಂದು ಬೆಳಗ್ಗೆ ದೀರ್ಘಕಾಲದ ಅನಾರೋಗ್ಯದಿಂದಾಗಿ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಹೃದಯಾಘಾತದಿಂದ ಗೌರ್(89) ಕೊನೆಯುಸಿರೆಳೆದರು ಎಂದು ನರ್ಮದಾ ಆಸ್ಪತ್ರೆಯ ನಿರ್ದೇಶಕ ಡಾ. ರಾಜೇಶ್ ಶರ್ಮ ತಿಳಿಸಿದ್ದಾರೆ.
ವಯೋಮಾನ ಸಹಜ ವಿವಿಧ ಅನಾರೋಗ್ಯದಿಂದ ನರಳುತ್ತಿದ್ದ ಅವರು ಕೆಲಕಾಲದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಬಿಜೆಪಿ ಧುರೀಣರಾಗಿದ್ದ ಅವರು 2004-05ರಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿದ್ದರು. ಇವರು ಗೋವಿಂದಪುರ ವಿಧಾನಸಭಾ ಕ್ಷೇತ್ರದಿಂದ 10 ಬಾರಿ ಶಾಸಕರಾಗಿ ಚುನಾಯಿತರಾಗಿದ್ದರು.
ಬಾಬುಲಾಲ್ ಗೌರ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೂ ಆದ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ, ಮದ್ಯಪ್ರದೇಶ ಮುಖ್ಯಮಂತ್ರಿ ಕಮಲ್ನಾಥ್ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.