ಬೆಂಗಳೂರು, ಆ.21- ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಮತ್ತು ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಹಭಾಗಿತ್ವದಲ್ಲಿ ಆ. 23ರಂದು ರಾಜ್ಯ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ನಿವೃತ್ತ ನೌಕರರ ಪಿಂಚಣಿ ಮತ್ತು ಕುಟುಂಬ ಪಿಂಚಣಿ ಕುಂದು-ಕೊರತೆ ಸಂಬಂಧಿಸಿದಂತೆ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಲ್. ಬೈರಪ್ಪ ಅವರು, ನಿವೃತ್ತ ನೌಕರರ ಪಿಂಚಣಿ ಹಾಗೂ ಕುಟುಂಬ ಪಿಂಚಣಿ ಸಂಬಂಧಿಸಿದಂತೆ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಪಿಂಚಣಿ ಅದಾಲತ್ನ್ನು ಅಂದು ಬೆಳಗ್ಗೆ 11ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಪಿಂಚಣಿದಾರರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲಾಗುವುದು ಜಿಲ್ಲಾ ಮಟ್ಟದಲ್ಲಿ ಆಯಾ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪಿಂಚಣಿ ಅದಾಲತ್ ನಡೆಯಲಿದೆ. ಪಿಂಚಣಿದಾರರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ರಾಜ್ಯದಲ್ಲಿ ಉಂಟಾಗಿರುವ ನೆರೆ ಹಾವಳಿಗೆ ಸಂಬಂಧಿಸಿದಂತೆ ಸೆಪ್ಟೆಂಬರ್ ತಿಂಗಳ 1ದಿನದ ಪಿಂಚಣಿಯನ್ನು ಪರಿಹಾರಕ್ಕೆ ನೀಡಲು ತೀರ್ಮಾನಿಸಲಾಗಿದೆ. ಈ ಸಂಬಂಧ ರಾಜ್ಯಮಟ್ಟದ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಧರಿಸಿದ್ದು 4,20000ಕ್ಕೂ ಹೆಚ್ಚು ಪಿಂಚಣಿದಾರರ 1ದಿನದ ಪಿಂಚಣಿಯನ್ನು ಅವರಿಗೆ ನೀಡಲು ನಿರ್ಧರಿಸಿದೆ.ಈ ಸಂಬಂಧ ಪತ್ರವನ್ನು ಸಿಎಂ ಯಡಿಯೂರಪ್ಪ ಅವರಿಗೆ ಸಲ್ಲಿಸಲಾಗಿದೆ ಎಂದು ಹೇಳಿದರು.