ಹೈ ಕಮಾಂಡ್ ಜೊತೆ ರಾಜ್ಯ ಕಾಂಗ್ರೆಸ್ ನಾಯಕರ ಚರ್ಚೆ

ಬೆಂಗಳೂರು, ಆ.21- ಈಗಾಗಲೇ ವಿಸರ್ಜನೆಗೊಂಡಿರುವ ಕರ್ನಾಟಕ ಕಾಂಗ್ರೆಸ್ ಪಕ್ಷಕ್ಕೆ ಹೊಸ ಪದಾಧಿಕಾರಿಗಳನ್ನು ನೇಮಿಸಲು ಮತ್ತು ವಿಪಕ್ಷ ನಾಯಕನ ಆಯ್ಕೆ ಸಂಬಂದ ನಾಳೆ ಹೈ ಕಮಾಂಡ್ ಜೊತೆ ರಾಜ್ಯ ಕಾಂಗ್ರೆಸ್ ನಾಯಕರು ಚರ್ಚೆ ನಡೆಸಲಿದ್ದಾರೆ.

ನಾಳೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಜನ್ಮದಿನವಾಗಿದ್ದು ಅವರಿಗೆ ಶುಭಾಷಯ ಕೋರಲು ಹಂಗಾಮಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮತ್ತಿತರರು ನಾಳೆ ದೆಹಲಿಗೆ ಭೇಟಿ ನೀಡಲಿದ್ದಾರೆ.

ರಾಹುಲ್ ಗಾಂಧಿಗೆ ಶುಭಾಷಯ ಕೋರಿದ ಬಳಿಕ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಸೋನಿಯಾ ಗಾಂಧಿ ಅವರು ಪಕ್ಷದ ಜವಾಬ್ದಾರಿ ವಹಿಸಿಕೊಂಡ ಬಳಿಕ ರಾಜ್ಯ ಕಾಂಗ್ರೆಸ್‍ನ ಎಲ್ಲಾ ನಾಯಕರ ಜೊತೆ ಸಭೆ ನಡೆಸಿಲ್ಲ. ನಾಳೆ ಸಭೆ ನಡೆಯಲಿದೆ ಎಂದು ಹೇಳಲಾಗಿದೆ.

ಈ ಸಭೆಯಲ್ಲಿ ಕೆಪಿಸಿಸಿ ಪದಾಧಿಕಾರಿಗಳ ನೇಮಕ, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಆಯ್ಕೆ, 17 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಗೆ ಜೆಡಿಎಸ್ ಜೊತೆ ಮೈತ್ರಿ ಮುಂದುವರೆಸಬೇಕೆ, ಬೇಡವೇ ಎಂಬ ಬಗ್ಗೆ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ನಾಳೆ ಕಾಂಗ್ರೆಸ್‍ನ ಹೈಕಮಾಂಡ್‍ನಲ್ಲಿರುವ ಪ್ರಮುಖ ನಾಯಕರು ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ.ನಂತರ ಸೋನಿಯಾ ಗಾಂಧಿ ಅವರ ಜೊತೆ ಅಂತಿಮ ಸುತ್ತಿನ ಮಾತುಕತೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ವಿಪಕ್ಷ ನಾಯಕ ಆಯ್ಕೆ ಸಂಬಂಧ ಬೆಂಗಳೂರಿಗೆ ಬಂದು ಎಲ್ಲರ ಜೊತೆ ಚರ್ಚೆ ಮಾಡಿ ನಿರ್ಧಾರ ಪ್ರಕಟಿಸುವುದಾಗಿ ಹೈಕಮಾಂಡ್ ತಿಳಿಸಿದೆ.ಬಹುತೇಕ ಹಿರಿಯ ನಾಯಕ ಗುಲಾಂನಬಿ ಆಜಾದ್ ಅವರು ವೀಕ್ಷಕರಾಗಿ ಬರುವ ನಿರೀಕ್ಷೆಗಳಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ