ಬೆಂಗಳೂರು, ಆ.21-ನಾನು ಇಂಥದ್ದೇ ಖಾತೆ ಕೊಡಿ ಎಂದು ಮುಖ್ಯಮಂತ್ರಿ ಬಳಿ ಬೇಡಿಕೆ ಇಟ್ಟಿಲ್ಲ. ನನಗೆ ಯಾವುದೇ ಜವಾಬ್ದಾರಿ ವಹಿಸಿದರೂ ಶ್ರದ್ಧೆಯಿಂದ ಇಲಾಖೆಯನ್ನು ನಿಭಾಯಿಸುತ್ತೇನೆ ಎಂದು ನೂತನ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠದಲ್ಲಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ನನಗೆ ಇಂಥದ್ದೇ ಖಾತೆ ಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕೇಳಿಲ್ಲ. ಯಾವುದೇ ಖಾತೆ ಕೊಟ್ಟರೂ ಅದನ್ನು ನಿಭಾಯಿಸಲು ಸಿದ್ಧನಿದ್ದೇನೆ. ಹಿಂದೆ ಬಂಧಿಖಾನೆ, ವಸತಿ ಸಚಿವನಾಗಿ ಕೆಲಸ ಮಾಡಿದ ಅನುಭವವಿದೆ. ಜನಸೇವೆ ಮಾಡಲು ಇಂತಹದ್ದೇ ಖಾತೆ ಬೇಕೆಂದು ಬೇಡಿಕೆ ಇಡುವುದು ಸರಿಯಲ್ಲ ಎಂದರು.
ಪಕ್ಷದ ವರಿಷ್ಠರು ನನ್ನ ಮೇಲೆ ನಂಬಿಕೆ ಇಟ್ಟು ಸಂಪುಟಕ್ಕೆ ತೆಗೆದುಕೊಂಡಿದ್ದಾರೆ. ಅವರ ನಂಬಿಕೆಯನ್ನು ಹುಸಿಗೊಳಿಸದೆ ಯಾವುದೇ ಖಾತೆ ಕೊಟ್ಟರೂ ಅತ್ಯಂತಜವಾಬ್ದಾರಿಯುತವಾಗಿ ಕೆಲಸ ಮಾಡುತ್ತಾನೆ. ಅಧಿಕಾರ ಇರಲಿ, ಇಲ್ಲದಿರಲಿ ಮೊದಲಿನಿಂದಲೂ ಜನರ ಸೇವೆಯಲ್ಲಿ ತೊಡಗಿಕೊಂಡಿದ್ದೇನೆ ಎಂದು ತಿಳಿಸಿದರು.
ಸಂಪುಟಕ್ಕೆ 34 ಮಂದಿಯನ್ನು ತೆಗೆದುಕೊಳ್ಳಲು ಅವಕಾಶವಿದೆ.ಎಲ್ಲರಿಗೂ ಒಂದೇ ಹಂತದಲ್ಲಿ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ. ಕೆಲವರಿಗೆ ಮಂತ್ರಿ ಸ್ಥಾನ ಸಿಗಬೇಕಿತ್ತು. ಮುಂದಿನ ಹಂತದಲ್ಲಿ ಅವಕಾಶ ವಂಚಿತರಿಗೆ ಅವಕಾಶ ಸಿಕ್ಕೇ ಸಿಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುಖ್ಯಮಂತ್ರಿಗಳು ನಮಗೆ ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಹದಿಂದ ಉಂಟಾದ ಪರಿಸ್ಥಿತಿಯನ್ನು ನಿಭಾಯಿಸಲು ಸೂಚಿಸಿದ್ದಾರೆ. ಅದರಂತೆ ನಾನು ಆ ಜಿಲ್ಲೆಗೆ ತೆರಳುತ್ತಿದ್ದೇನೆ. ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ಥರನ್ನು ಭೇಟಿಯಾಗುವುದಾಗಿ ತಿಳಿಸಿದರು.
ಇದಕ್ಕೂ ಮುನ್ನ ತುಮಕೂರಿನ ಸಿದ್ದಗಂಗಾ ಮಠಕ್ಕೆಭೇಟಿ ನೀಡಿ ಲಿಂಗೈಕ್ಯ ಡಾ.ಶ್ರೀ ಶಿವಕುಮಾರಸ್ವಾಮೀಜಿಯವರ ಗದ್ದುಗೆಗೆ ಪೂಜೆ ಸಲ್ಲಿಸಿದ ನಂತರ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮೊದಲ ಬಾರಿಗೆ ಕೇಂದ್ರಮತ್ತು ರಾಜ್ಯದಲ್ಲಿ ತಮ್ಮದೇ ಪಕ್ಷದ ಸರ್ಕಾರವಿದೆ. ಇದರಿಂದ ನಮಗೆ ಹೆಚ್ಚಿನ ಅನುದಾನ ಸಿಗಲಿದ್ದು, ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನ ಮಾಡಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಯಡಿಯೂರಪ್ಪ ಸಂಪುಟದಲ್ಲಿ ಉತ್ತಮ ಸೇನಾನಿಗಳಿದ್ದಾರೆ. ಎಲ್ಲರೂ ಜನರನಿರೀಕ್ಷೆಗೆ ತಕ್ಕಂತೆಕೆಲಸಮಾಡುವ ದೃಢ ಸಂಕಲ್ಪ ಇಟ್ಟುಕೊಂಡಿದ್ದಾರೆ. ಹಿಂದಿನ ಜೆಡಿಎಸ್-ಕಾಂಗ್ರೆಸ್ಸಮ್ಮಿಶ್ರ ಸರ್ಕಾರ ಜನರನಿರೀಕ್ಷೆಗಳನ್ನು ಈಡೇರಿಸುವಲ್ಲಿ ವಿಫಲವಾಗಿತ್ತು.ರಾಜ್ಯದಲ್ಲಿ ನೂರಾರು ಸಮಸ್ಯೆಗಳಿವೆ. ಅವೆಲ್ಲವನ್ನು ಪರಿಹರಿಸುವ ಜವಾಬ್ದಾರಿ ನಮ್ಮ ಮೇಲಿದೆ. ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದೇ ನಮ್ಮ ಗುರಿ ಎಂದು ಹೇಳಿದರು.
ಈ ವೇಳೆ ಸಂಸದ ಜಿ.ಎಚ್.ಬಸವರಾಜ್, ಶಾಸಕರಾದ ಜ್ಯೋತಿಗಣೇಶ್, ಶಿವನಗೌಡ ನಾಯಕ್, ಮಾಜಿ ಸಚಿವ ಸೊಗಡುಶಿವಣ್ಣ ಮತ್ತಿತರರು ಹಾಜರಿದ್ದರು.