ನಾಗಪುರ ವಾರ್ಡ್‍ನಲ್ಲಿ ಪಾದಚಾರಿ ಮೇಲ್ಸೇತುವೆ-ಮೇಯರ್ ಗಂಗಾಂಬಿಕೆ

ಬೆಂಗಳೂರು, ಆ.22- ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರದ ನಾಗಪುರ ವಾರ್ಡ್‍ನಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಪಾದಚಾರಿ ಮೇಲ್ಸೇತುವೆ ನಿರ್ಮಿಸಲಾಗುತ್ತಿದೆ ಎಂದು ಮೇಯರ್ ಗಂಗಾಂಬಿಕೆ ಇಂದಿಲ್ಲಿ ತಿಳಿಸಿದರು.

ಪಶ್ಚಿಮ ಕಾರ್ಡ್ ರಸ್ತೆ , ಮಹಾಲಕ್ಷ್ಮಿ ಲೇ ಔಟ್ ಮೆಟ್ರೋ ನಿಲ್ದಾಣ ಸಮೀಪ ಪಾದಚಾರಿ ಮೇಲ್ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಸಾರ್ವಜನಿಕರ ಅನುಕೂಲಕ್ಕಾಗಿ ಪಿಪಿಪಿ ಮಾದರಿಯಲ್ಲಿ ಪಾದಚಾರಿ ಮೇಲ್ಸೇತುವೆ ನಿರ್ಮಿಸಲು ಖಾಸಗಿ ಸಂಸ್ಥೆಗೆ ಗುತ್ತಿಗೆ ನೀಡಲಾಗಿದೆ ಎಂದರು.

ಮೇಲ್ಸೇತುವೆ ನಿರ್ಮಿಸುವ ಸಂಸ್ಥೆಯವರೇ ನೆಲ ಬಾಡಿಗೆ, ಜಾಹಿರಾತು ತೆರಿಗೆ ಸೇರಿದಂತೆ ವಾರ್ಷಿಕ 7 ಲಕ್ಷ ರೂ.ಗಳನ್ನು ಪಾಲಿಕೆಗೆ ಪಾವತಿಸಲಿದ್ದಾರೆ.9 ತಿಂಗಳೊಳಗೆ ಮೇಲ್ಸೇತುವೆ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ತಾಕೀತು ಮಾಡಿದ್ದೇನೆ ಎಂದರು.

ಉಪ ಮೇಯರ್ ಭದ್ರೇಗೌಡ, ಆಡಳಿತ ಪಕ್ಷದ ನಾಯಕ ಅಬ್ದುಲ್ ವಾಜಿದ್, ಮಾಜಿ ನಾಯಕ ಶಿವರಾಜ್, ಬಿಬಿಎಂಪಿ ಸದಸ್ಯ ಕೇಶವಮೂರ್ತಿ ಮತ್ತಿತರರು ಹಾಜರಿದ್ದರು.

ಈ ಕಾರ್ಯಕ್ರಮಕ್ಕೂ ಮುನ್ನ ಚಾಮರಾಜಪೇಟೆಯ ರಾಯನ್ ಸರ್ಕಲ್ ಸಮೀಪ ಸ್ಕೈವಾಕ್ ನಿರ್ಮಾಣ ಕಾಮಗಾರಿಗೆ ಮೇಯರ್ ಅವರು ಚಾಲನೆ ನೀಡಿದ್ದರು.

ಈ ರಸ್ತೆಯಲ್ಲಿ ಶಾಲಾ ಮಕ್ಕಳಿಗೆ ರಸ್ತೆ ದಾಟಲು ಅನಾನುಕೂಲವಾಗುತ್ತಿದ್ದ ಹಿನ್ನೆಲೆಯಲ್ಲಿ ಪಾದಚಾರಿ ಮೇಲ್ಸೇತುವೆ ನಿರ್ಮಿಸಲಾಗುತ್ತಿದೆ ಎಂದು ಮೇಯರ್ ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ