ಹಾಲಾಡಿ ಶ್ರೀನಿವಾಸ್ ಶೆಟ್ಟಿಯವರಿಗೆ ಮಂತ್ರಿ ಸ್ಥಾನ ನೀಡಬೇಕು

ಬೆಂಗಳೂರು, ಆ.23-ಅಜಾತಶತ್ರು, ಕುಂದಾಪುರದ ವಾಜಪೇಯಿ ಎಂದು ಖ್ಯಾತಿ ಪಡೆದಿರುವ ಹಾಲಾಡಿ ಶ್ರೀನಿವಾಸ್ ಶೆಟ್ಟಿಯವರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಒತ್ತಾಯಿಸಿ ಬೆಂಗಳೂರು ಬಂಟರ ಸಂಘ ಮೌನ ಪ್ರತಿಭಟನೆ ನಡೆಸಿತು.

ನಗರದ ಫ್ರೀಡಂಪಾರ್ಕ್‍ನಲ್ಲಿಂದು ನಡೆದ ಮೌನ ಪ್ರತಿಭಟನೆಯಲ್ಲಿ ಬಂಟರಸಂಘದ ಅಧ್ಯಕ್ಷ ಆರ್.ಉಪೇಂದ್ರಶೆಟ್ಟಿ , ಮಧುಕರ ಶೆಟ್ಟಿ, ಬಾರ್ಕೂರ್ ದೀಪಕ್ ಶೆಟ್ಟಿ, ಮಂದಾರ್ತಿ ಉಮೇಶ್ ಶೆಟ್ಟಿ, ಕೋರ್ಗಿ ಬೋಜರಾಜ್ ಶೆಟ್ಟಿ, ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅಭಿಮಾನಿ ಬಳಗದ ಸದಸ್ಯರು ಹಾಗೂ ಕರಾವಳಿ ಭಾಗದ ವಿವಿಧ ಸಂಘಟನೆಗಳ ಸದಸ್ಯರು ಭಾಗಿಯಾಗಿದ್ದರು.

ಕರಾವಳಿಯ ಬಿಜೆಪಿಯ ಹಿರಿಯ ಶಾಸಕರಾಗಿರುವ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ಅಧಿಕಾರಕ್ಕಾಗಿ ಎಂದೂ ಲಾಬಿ ನಡೆಸಿದವರಲ್ಲ. ಅವರ ಹಿರಿತನಕ್ಕೂ ಬೆಲೆ ಸಿಗಲಿಲ್ಲ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಲ್ಲಿ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಸಂಘದ ಸದಸ್ಯರು ಒತ್ತಾಯಿಸಿದರು.

ಸಿಎಂ ಬಿ.ಎಸ್. ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಕರಾವಳಿ ಭಾಗದ ಬಿಜೆಪಿ ಶಾಸಕರನ್ನು ಕಡೆಗಣನೆ ಮಾಡಲಾಗಿದೆ.ಉಡುಪಿಯ ಐದು ವಿಧಾನ ಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಶಾಸಕರಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಏಳು ವಿಧಾನ ಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದಾರೆ. ಆದ್ರೆ ಕರಾವಳಿಯ 13 ಸ್ಥಾನಗಳಲ್ಲಿ 12 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ಶಾಸಕರಿಗೆ ಮಂತ್ರಿ ಪದವಿ ನೀಡದೇ ಇರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೂಡಲೇ ಮುಖ್ಯಮಂತ್ರಿ ಯಡಿಯೂರಪ್ಪ ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ನಳೀನ್‍ಕುಮಾರ್ ಕಟೀಲ್ ಅವರು ಸಂಪುಟಕ್ಕೆ ತೆಗೆದುಕೊಳ್ಳುವಂತೆ ವರಿಷ್ಠರಿಗೆ ಮನವಿ ಮಾಡಬೇಕು. ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಬಿಜೆಪಿಯ ಭದ್ರಕೋಟೆಯಾಗಿದೆ. ಹಾಲಾಡಿ ಅವರನ್ನು ಕಡೆಗಣಿಸಿರುವುದರಿಂದ ನಿಷ್ಠಾವಂತ ಬಿಜೆಪಿ ಕಾರ್ಯಕರ್ತರು ಕೂಡ ಬೇಸರಗೊಂಡಿದ್ದಾರೆ. ಅವರಿಗೆ ಮಂತ್ರಿ ಸ್ಥಾನ ನೀಡದಿದ್ದರೆ ಬಂಟ ಸಮುದಾಯ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠಕಲಿಸಲಿದೆ ಎಂದು ಎಚ್ಚರಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ