ಬೆಂಗಳೂರು, ಆ.26-ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಹಲವು ಜಿಲ್ಲಾ ಘಟಕಗಳನ್ನು ಪುನಾರಚಿಸಲು ಉದ್ದೇಶಿಸಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿಳಿಸಿದ್ದಾರೆ.
ಈಗಾಗಲೆ ಹಲವು ಜಿಲ್ಲೆಗಳ ಪಕ್ಷದ ಪದಾಧಿಕಾರಿಗಳು ಹಾಗೂ ಮುಖಂಡರ ಅಭಿಪ್ರಾಯವನ್ನು ಪಡೆಯಲಾಗಿದ್ದು, ಸ್ಥಳೀಯರ ಸಲಹೆ ಮೇರೆಗೆ ಜಿಲ್ಲಾ ಘಟಕಗಳನ್ನು ಬದಲಾವಣೆ ಮಾಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಈಗಾಗಲೆ ಚಾಮರಾಜನಗರ ಜಿಲ್ಲಾಧ್ಯಕ್ಷರನ್ನು ಬದಲಾವಣೆ ಮಾಡಲಾಗಿದೆ. ಕಳೆದ ವಾರ ಹದಿಮೂರು ಜಿಲ್ಲೆಗಳ ಜೆಡಿಎಸ್ ಮುಖಂಡರ ಸಭೆಯನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನೇತೃತ್ವದಲ್ಲಿ ನಡೆಸಲಾಗಿದೆ. ಪ್ರತಿ ಜಿಲ್ಲಾವಾರು ಸಭೆ ನಡೆಸಿ ಪಕ್ಷ ಸಂಘಟನೆ, ಸ್ಥಳೀಯ ಸಮಸ್ಯೆಗಳು, ಆಧ್ಯತೆಗಳು ಹಾಗೂ ಪದಾಧಿಕಾರಿಗಳು ಬದಲಾವಣೆ ಬಗ್ಗೆ ಮಾಹಿತಿಯನ್ನು ಕಲೆಹಾಕಲಾಗಿದೆ.ಅಗತ್ಯವಿರುವ ಜಿಲ್ಲೆಗಳಲ್ಲಿ ಜಿಲ್ಲಾಮಟ್ಟದ ಪದಾಧಿಕಾರಿಗಳನ್ನು ಬದಲಾವಣೆ ಮಾಡುವ ಬಗ್ಗೆ ಗಂಭೀರ ಚಿಂತನೆ ನಡೆಸಲಾಗಿದೆ ಎಂದರು.
ಉತ್ತರ ಕರ್ನಾಟಕ, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅತಿವೃಷ್ಟಿ ಹಾಗೂ ನೆರೆಹಾವಳಿ ಉಂಟಾಗಿರುವದರಿಂದ ಜಿಲ್ಲಾವಾರು ಸಭೆಗಳನ್ನು ನಡೆಸಲಾಗಿಲ್ಲ ಎಂದರು.
ಕಳೆದ ವಾರ ನಿರಂತರವಾಗಿ ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ಚಾಮರಾಜನಗರ, ಮೈಸೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಬಳ್ಳಾರಿ, ಕೊಪ್ಪಳ, ಬೀದರ್ ಜಿಲ್ಲೆಗಳ ಸಭೆ ನಡೆಸಿ ಸಲಹೆ, ಮಾರ್ಗದರ್ಶನವನ್ನು ಗೌಡರು ನೀಡಿದ್ದಾರೆ ಎಂದು ಹೇಳಿದರು.
ಸರ್ಕಾರದ ವಿರುದ್ಧ ಟೀಕೆ.:
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ತಿಂಗಳಾದರೂ ಯಾವುದೇ ಕಾಮಗಾರಿ ನಡೆಯುತ್ತಿಲ್ಲ, ಆಡಳಿತ ಯಂತ್ರ ಸ್ಥಗಿತವಾಗಿದೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಅವಧಿಯಲ್ಲಿನ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಗೆ ತಡೆ ನೀಡಲಾಗಿದೆ. ಹೀಗಾಗಿ ಸರ್ಕಾರ ನಿಷ್ಕ್ರಿಯವಾದಂತಾಗಿದೆ.ಯಡಿಯೂರಪ್ಪನವರು ಮುಖ್ಯಮಂತ್ರಿಯಾದರೂ ಅವರಿಗೆ ಪೂರ್ಣಪ್ರಮಾಣದ ಅಧಿಕಾರ ಕೊಟ್ಟಂತಿಲ್ಲ. ಕೆಲಸ ಮಾಡಲು ಅವರಿಗೆ ಮುಕ್ತ ಅವಕಾಶವನ್ನು ಬಿಜೆಪಿ ನೀಡಬೇಕು ಇಲ್ಲದಿದ್ದರೆ, ರಾಜ್ಯದ ಅಭಿವೃದ್ಧಿಗೆ ತೊಂದರೆಯಾಗಲಿದೆ ಎಂದರು.
ರಾಜ್ಯದಲ್ಲಿ ಹಿಂದೆಂದೂ ಕಾಣದ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಪ್ರವಾಹದಿಂದ ಉಂಟಾದ ಹಾನಿ ಅಂದಾಜನ್ನು ಇದುವರೆಗೂ ನಿಖರವಾಗಿ ರಾಜ್ಯ ಸರ್ಕಾರ ಮಾಡಿಲ್ಲ, ಸಂಬಂಧಪಟ್ಟ ಇಲಾಖೆಗಳ ಸಚಿವರ ಈ ಕೆಲಸ ಸುಲಭವಾಗಿ ಆಗುತ್ತಿತ್ತು.ಕಳೆದ ಒಂದು ತಿಂಗಳಲ್ಲಿ ವರ್ಗಾವಣೆ ದಂಧೆ ಬಿಟ್ಟರೆ ಬೇರೇನು ಕೆಲಸವಾಗಿಲ್ಲ ಎಂದು ಟೀಕಿಸಿದರು.